ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಕೇಂದ್ರ ಸಚಿವ ಕುಮಾರಣ್ಣ ಸುಮಾರು ನೂರು ಕಿಮಿ ರಸ್ತೆಗಳಿಗೆ ಸಿ.ಎಸ್.ಆರ್ ಮತ್ತು ಸಿ.ಆರ್.ಎಫ್ ಅನುದಾನದಡಿ ರಸ್ತೆ ಅಭಿವೃದ್ಧಿಗೆ ಅನುದಾನ ಕೊಡಿಸುವುದಾಗಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿರುವ ದೇವಾಲಯಗಳು ಇಂದಿನ ಒತ್ತಡದ ಜೀವನದಲ್ಲಿ ಮನುಷ್ಯನ ಮನಃಶಾಂತಿಗೆ ಆಸರೆಯಾಗಿವೆ ಎಂದು ಶಾಸಕ ಎಚ್.ಟಿ.ಮಂಜು ಹೇಳಿದರು.

ತಾಲೂಕಿನ ಚಿಕ್ಕಸೋಮನಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿ, ದೇವರು ಮತ್ತು ಧರ್ಮದ ಮಾರ್ಗದಲ್ಲಿ ನಾವು ಸಾಗಿದರೆ ಮನಸ್ಸಿಗೆ ಶಾಂತಿ, ನೆಮ್ಮದಿ ಪಡೆಯುವ ಜೊತೆಗೆ ಕೈ ಹಿಡಿದ ಕೆಲಸ, ಕಾರ್ಯಗಳಲ್ಲಿ ಯಶಸ್ಸನ್ನು ಕೂಡಾ ಹೊಂದಬಹುದು ಎಂದರು.

ತಾಲೂಕಿನ ಜನತೆ ನನ್ನ ಮೇಲೆ ವಿಶ್ವಾಸವಿಟ್ಟು ಶಾಸಕ ಸ್ಥಾನದ ಜವಾಬ್ದಾರಿ ನೀಡಿದ್ದಾರೆ. ಹಳ್ಳಿಗಳ ರಸ್ತೆಗಳು ಗುಂಡಿ ಬಿದ್ದು ಹಾಳಾಗಿವೆ. ಆದರೆ, ಕಾಂಗ್ರೆಸ್ ಸರ್ಕಾರದಲ್ಲಿ ಅನುದಾನದ ಕೊರತೆಯಿಂದ ಜನರ ನಿರೀಕ್ಷೆ ಮಟ್ಟಕ್ಕೆ ಸ್ಪಂದಿಸಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ನೋವು ನನ್ನನ್ನು ಕಾಡುತ್ತಿದೆ ಎಂದು ತಿಳಿಸಿದರು.

ಆಡಳಿತ ಪಕ್ಷದ ಶಾಸಕರೇ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಪಕ್ಷದ ಶಾಸಕನಾಗಿರುವ ನನ್ನ ಪಾಡು ಎಂತಹದು ಎಂಬುದು ಕ್ಷೇತ್ರದ ಜನರಿಗೆ ಗೊತ್ತಿದೆ ಎನ್ನುವುದು ನನ್ನ ಭಾವನೆಯಾಗಿದೆ. ಆದರೂ ಈ ಅನ್ಯಾಯ ನೋಡಿಕೊಂಡು ಸುಮ್ಮನೆ ಕುಳಿತು ನೋಡುವ ಜಾಯಮಾನ ನನ್ನದಲ್ಲ, ಕೊನೆಗೆ ಬೀದಿಗಿಳಿದು ಹೋರಾಟ ಮಾಡಿಯಾದರೂ ಅನುದಾನ ಬಿಡುಗಡೆ ಮಾಡಿಸಿ ಅಭಿವೃದ್ಧಿ ಕೆಲಸ ಮಾಡುತ್ತೇನೆ ಎಂದು ಘೋಷಿಸಿದರು.

ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಕೇಂದ್ರ ಸಚಿವ ಕುಮಾರಣ್ಣ ಸುಮಾರು ನೂರು ಕಿಮಿ ರಸ್ತೆಗಳಿಗೆ ಸಿ.ಎಸ್.ಆರ್ ಮತ್ತು ಸಿ.ಆರ್.ಎಫ್ ಅನುದಾನದಡಿ ರಸ್ತೆ ಅಭಿವೃದ್ಧಿಗೆ ಅನುದಾನ ಕೊಡಿಸುವುದಾಗಿ ತಿಳಿಸಿದ್ದಾರೆ. ತಾಲೂಕಿನಲ್ಲಿ ಫ್ಯಾಕ್ಟರಿಗಳನ್ನು ಸ್ಥಾಪಿಸಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ನಿಮ್ಮಿಂದ ಸಾಧ್ಯ ಎಂದು ಮನವಿ ಮಾಡಿದ್ದೇನೆ. ಅದಕ್ಕೆ ಕುಮಾರಣ್ಣ ಪೂರಕವಾಗಿ ಸ್ಪಂದಿಸಿದ್ದಾರೆ. ಈಗಾಗಲೇ ತಾಲೂಕಿನ ರೈಲ್ವೆ ಅಭಿವೃದ್ಧಿಗೆ ಸುಮಾರು ನೂರು ಕೋಟಿಗೂ ಅಧಿಕ ಅನುದಾನವನ್ನು ಕೇಂದ್ರದಿಂದ ಕೊಡಿಸಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಶ್ರಾಂತ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ, ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕಿರಾಮ್, ಡ್ರೋಣ್ ಪ್ರತಾಪ್ ಸೇರಿದಂತೆ ಹಲವು ಮುಖಂಡರು ಭಕ್ತಾದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.