ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪ ಎದುರಿಸುತ್ತಿದ್ದ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಹೊಸನಗರ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪ ಎದುರಿಸುತ್ತಿದ್ದ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಹೊಸನಗರ ತಾಲೂಕಿನ ಮಳಲಿ ಗ್ರಾಮದ ನಿವಾಸಿಯಾಗಿರುವ ರಾಜೇಶ್ ಹಿರಿಮನೆ ವಿರುದ್ಧ ಕೆಳ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಎಲ್ಲಾ ವಿಚಾರಣಾ ಪ್ರಕ್ರಿಯೆಗಳಿಗೆ ಹೈಕೋರ್ಟ್ ಇದೀಗ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಈ ಆದೇಶವನ್ನು ಹೊರಡಿಸಿದೆ. ಹೊಸನಗರದ ಜೆಎಂಎಫ್‌ಸಿ ಮತ್ತು ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಈ ಪ್ರಕರಣದ ಮುಂದಿನ ಪ್ರಕ್ರಿಯೆಗಳನ್ನು ಮುಂದಿನ ವಿಚಾರಣೆಯವರೆಗೆ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ರಾಜೇಶ್ ಹಿರಿಮನೆ ಅವರು ರಾಹುಲ್ ಗಾಂಧಿ ಅವರ ಭಾವಚಿತ್ರವನ್ನು ಪಾಕಿಸ್ತಾನದ ಸೇನಾ ಸರ್ವಾಧಿಕಾರಿ ಅಸಿಮ್ ಮುನೀರ್ ಅವರ ಮುಖದೊಂದಿಗೆ ಮಾರ್ಫ್ (ಎಡಿಟ್) ಮಾಡಿದ್ದರು. ಬಳಿಕ ಆ ಫೋಟೋಗೆ “ONE AGENDA” ಎಂಬ ಶೀರ್ಷಿಕೆ ನೀಡಿ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದಲ್ಲಿ ರಾಜೇಶ್ ಅವರ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಅವರ ಮಾರ್ಗದರ್ಶನದಲ್ಲಿ ವಕೀಲ ಸುಯೋಗ್ ಅವರು ವಾದ ಮಂಡಿಸಿದ್ದರು.