ಸಾರಾಂಶ
ಕನ್ನಡಪ್ರಭ ವಾರ್ತೆ, ಹನೂರು
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ 90 ಕೋಟಿ ರು. ವೆಚ್ಚದಲ್ಲಿ ಅತ್ಯಾಧುನಿಕ ದಾಸೋಹ ಭವನ ನಿರ್ಮಾಣ ಮಾಡಲು ಅತಿ ಶೀಘ್ರ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪ್ರಾಧಿಕಾರದ ಉಪಾಧ್ಯಕ್ಷ ಕೆ. ವೆಂಕಟೇಶ್ ತಿಳಿಸಿದರು.ಬೆಂಗಳೂರಿನ ವಿಕಾಸ ಸೌಧ ಕಚೇರಿ ಆವರಣದಲ್ಲಿ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಕಳೆದ ಎರಡು ವರ್ಷಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಭಕ್ತಾದಿಗಳಿಗೆ ಪ್ರಾಧಿಕಾರದ ವತಿಯಿಂದ ಮೂಲಭೂತ ಸೌಲಭ್ಯ ಕಲ್ಪಿಸಿ ಕೊಡಬೇಕಾಗಿರುವುದು ಜವಾಬ್ದಾರಿ. ಈ ನಿಟ್ಟಿನಲ್ಲಿ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ. ಆ ಕಾಮಗಾರಿಗಳನ್ನು ಅತಿ ಶೀಘ್ರದಲ್ಲಿ ಪೂರ್ಣಗೊಳಿಸಿ ಭಕ್ತರಿಗೆ ಅನುಕೂಲ ಕಲ್ಪಿಸಿ ಕೊಡಬೇಕು ಎಂದರು.ಹಳೆ ದಾಸೋಹ ಭವನದ ಮುಂಭಾಗದ 3 ಎಕರೆ ಪ್ರದೇಶದಲ್ಲಿ 90 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ದಾಸೋಹ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಭಕ್ತಾದಿಗಳಿಗೆ ಪ್ರಸಾದ ಸ್ವೀಕರಿಸಲು ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಬಸ್ ನಿಲ್ದಾಣ ಅಭಿವೃದ್ಧಿಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯ, ನೆರೆಯ ರಾಜ್ಯಗಳಿಂದ ಹಬ್ಬ- ಹರಿದಿನ, ಜಾತ್ರಾ ಮಹೋತ್ಸವ ಹಾಗೂ ಇನ್ನಿತರ ವಿಶೇಷ ದಿನಗಳಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಜನ ಆಗಮಿಸುತ್ತಿದ್ದಾರೆ. ಆದರೆ ಶ್ರೀ ಕ್ಷೇತ್ರದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಭಕ್ತಾದಿಗಳ ಸಂಖ್ಯೆಗೆ ಅನುಗುಣವಾಗಿ ಮೂಲಭೂತ ಸೌಲಭ್ಯ ಒದಗಿಸಿಕೊಡಲು ಸಾಧ್ಯವಾಗುತ್ತಿಲ್ಲ. ಈ ನಿಟಿನಲ್ಲಿ ಹೆಚ್ಚುವರಿಯಾಗಿ ನಿಲ್ದಾಣ ನಿರ್ಮಾಣ ಮಾಡಿ ಭಕ್ತಾದಿಗಳಿಗೆ ಹಾಗೂ ಪ್ರಯಾಣಿಕರಿಗೆ ಕೂರಲು ಆಸನದ ವ್ಯವಸ್ಥೆ ಹಾಗೂ ಮಳೆ ಗಾಳಿ, ಬಿಸಿಲಿನ ತಾಪ ತಡೆಯಲು ಮೇಲ್ಚಾವಣಿ ನಿರ್ಮಾಣ ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಬಸ್ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದು ಎಂದರು. ಪ್ರಾಧಿಕಾರದಲ್ಲಿ ಸಭೆಯಲ್ಲಿ ನಡೆದ ತೀರ್ಮಾನಗಳನ್ನು ಅನುಷ್ಠಾನಕ್ಕೆ ತರಲು ಅಧಿಕಾರಿಗಳು ಹೆಚ್ಚಿನ ಶ್ರಮವಹಿಸಬೇಕು ಎಂದು ತಿಳಿಸಿದರು.
ಹಸಿರೀಕರಣಕ್ಕೆ ಒತ್ತುಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆದರು ಹಸಿರಿಕರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ದೇವಸ್ಥಾನದ ಆವರಣದ ಸುತ್ತಲೂ ಗಿಡಗಳನ್ನು ನೆಟ್ಟು ಹಸಿರುಮಯವಾಗಿ ಮಾರ್ಪಾಡು ಮಾಡಬೇಕು ಎಂದರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಈಗಾಗಲೇ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.ಸಭೆಯಲ್ಲಿ ಶಾಸಕ ಎಂ.ಆರ್. ಮಂಜುನಾಥ್, ಜಿಲ್ಲಾಧಿಕಾರಿ ಸಿಟಿ ಶಿಲ್ಪಾ ನಾಗ್, ಸಿಇಒ ಮೋನೋರೋತ್, ಲೋಕೋಪಯೋಗಿ ಇಲಾಖೆ ಮುಖ್ಯ ಕಾರ್ಯದರ್ಶಿ ಸತ್ಯನಾರಾಯಣ, ಪ್ರಾಧಿಕಾರದ ಕಾರ್ಯದರ್ಶಿ ಎ.ಈ. ರಘು , ಡಿಸಿಎಫ್ ಭಾಸ್ಕರ್, ಡಿಡಿಎಲ್ಆರ್ ವಿದ್ಯಾಯಿನಿ, ಇಇ ಕಿರಣ್, ಎಇಇ ಚಿನ್ನಣ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.