ಸಾರಾಂಶ
ಅನ್ನಭಾಗ್ಯ ಯೋಜನೆಗೆ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಫೆ.29 ರಂದು ಬೆಳಿಗ್ಗೆ 11 ಗಂಟೆಗೆ ಅರಮನೆ ಮೈದಾನದಲ್ಲಿ ‘ಅನ್ನಭಾಗ್ಯ ದಶಮಾನೋತ್ಸವ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರುಅನ್ನಭಾಗ್ಯ ಯೋಜನೆಗೆ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಫೆ.29 ರಂದು ಬೆಳಿಗ್ಗೆ 11 ಗಂಟೆಗೆ ಅರಮನೆ ಮೈದಾನದಲ್ಲಿ ‘ಅನ್ನಭಾಗ್ಯ ದಶಮಾನೋತ್ಸವ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಯೋಗದಲ್ಲಿ ಸಮಾರಂಭ ಆಯೋಜಿಸಿದ್ದು ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಮಾವೇಶವೂ ಜರುಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗ್ರಾಹಕರ ಸಂರಕ್ಷಣಾ ಹಕ್ಕುಗಳ ವಸ್ತು ಪ್ರದರ್ಶನ ಹಾಗೂ ಗ್ರಾಹಕ ರಕ್ಷಕ ತಪಾಸಣಾ ವಾಹನಗಳಿಗೆ ಚಾಲನೆ ನೀಡಲಿದ್ದಾರೆ. ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಅವರು ತೂಕ ಮತ್ತು ಅಳತೆಗಳ ಗ್ರಾಹಕರ ಜಾಗೃತಿ ಕೈಪಿಡಿ ಲೋಕಾರ್ಪಣೆಗೊಳಿಸಲಿದ್ದಾರೆ. ಆಹಾರ ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ ಅವರು ನಿಗಮದ ಸುವರ್ಣ ಮಹೋತ್ಸವ ವಿಡಿಯೋ ಬಿಡುಗಡೆಗೊಳಿಸಲಿದ್ದಾರೆ. ಶಾಸಕ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು 2013 ರಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದರು. ಇದೀಗ ಯೋಜನೆಯು 10 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದಶಮಾನೋತ್ಸವ ಸಮಾರಂಭ ಆಯೋಜಿಸಲಾಗಿದೆ.