ಸಾರಾಂಶ
ಸಂವಿಧಾನ ಪೀಠಿಕೆಯೇ ಸಂವಿಧಾನದ ಆಶಯಗಳಾಗಿದ್ದು, ಎತ್ತಿಹಿಡಿಯುವಲ್ಲಿ ನಾವೆಲ್ಲರೂ ಕೈಜೋಡಿಸೋಣ.
ಚಿತ್ರದುರ್ಗ: ಸಂವಿಧಾನ ಪೀಠಿಕೆಯೇ ಸಂವಿಧಾನದ ಆಶಯಗಳಾಗಿದ್ದು, ಎತ್ತಿಹಿಡಿಯುವಲ್ಲಿ ನಾವೆಲ್ಲರೂ ಕೈಜೋಡಿಸೋಣ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ವಕೀಲರ ಸಂಘ ಹಾಗೂ ಸರಸ್ವತಿ ಕಾನೂನು ಕಾಲೇಜು ಸಹಯೋಗದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಅಂಗವಾಗಿ ಸಂವಿಧಾನ ದೃಷ್ಟಿಯಲ್ಲಿ ಸಾಮಾಜಿಕ ನ್ಯಾಯ ಕುರಿತ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸಮಾಜದಲ್ಲಿರುವ ಅಸಮಾನತೆ ಹೋಗಲಾಡಿಸಿ, ಹಿಂದುಳಿದವರನ್ನು ಮುಖ್ಯವಾಹಿನಿಗೆ ತರುವುದೇ ಸಾಮಾಜಿಕ ನ್ಯಾಯ ಹಾಗೂ ಸಂವಿಧಾನದ ಆಶಯ ಕೂಡ ಹೌದು. ಸಂವಿಧಾನದ ಪೀಠಿಕೆಯಂತೆ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸಾಮಾಜಿಕ ನ್ಯಾಯ ದೊರೆಯಬೇಕು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಮಾತನಾಡಿ, ಅನ್ಯಾಯಕ್ಕೆ, ತುಳಿತಕ್ಕೆ, ಒಳಪಟ್ಟ ದುರ್ಬಲರಿಗೆ ಅಂತರಾತ್ಮದಿಂದ ಅವರಿಗೆ ನ್ಯಾಯ ಒದಗಿಸಿ ಕೊಡುವ ಮೂಲಕ ಸಾಮಾಜಿಕ ನ್ಯಾಯ, ಕಾನೂನು, ಸಂವಿಧಾನದ ಮಹತ್ವ ತಿಳಿಸಬೇಕು. ಡಾ.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಪೀಠಿಕೆಯಲ್ಲಿಯೇ ಸಾಮಾಜಿಕ ನ್ಯಾಯದ ಪರಿಕಲ್ಪನೆ ಇದೆ. ಸಂವಿಧಾನದ ಆಶಯ, ಪೀಠಿಕೆ, ಕಾನೂನುಗಳನ್ನು ತಿಳಿದು ಜನರಿಗೆ ಅರಿವು ಮೂಡಿಸಿದಲ್ಲಿ ಸಾಮಾಜಿಕ ನ್ಯಾಯದ ಪರಿಕಲ್ಪನೆ ಸಾರ್ಥಕವಾಗುವುದು ಎಂದು ಹೇಳಿದರು.ಸಂವಿಧಾನ ಜಾಗೃತಿ ಅಂಗವಾಗಿ ಸಂವಿಧಾನದ ಪೀಠಿಕೆಯನ್ನು ಇದೇ ಸಂದರ್ಭದಲ್ಲಿ ಬೋಧಿಸಲಾಯಿತು. ಸಮಾರಂಭದಲ್ಲಿ ಹಾಜರಿದ್ದ ಎಲ್ಲರೂ ಸಂವಿಧಾನದ ಪೀಠಿಕೆಯನ್ನು ವಾಚನ ಮಾಡಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಸರಸ್ವತಿ ಕಾನೂನು ಕಾಲೇಜಿನ ಪ್ರಾಂಶುಪಾಲೆ ಎಂ.ಎಸ್.ಸುಧಾದೇವಿ ಉಪನ್ಯಾಸ ನೀಡಿದರು. ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ಉಪಾಧ್ಯಕ್ಷ ಬಿ.ಎಂ ಅನಿಲ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ವಸತಿ ನಿಲಯಗಳ ಮೇಲ್ವಿಚಾರಕರು ಹಾಗೂ ಸರಸ್ವತಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಇದ್ದರು.