ಭ್ರಷ್ಟಾಚಾರ, ಬೆಲೆ ಏರಿಕೆ, ಅನುದಾನ ಹಂಚಿಕೆಯಲ್ಲಿ ತಾರತಮ್ಯ, ದುರಾಡಳಿತ ನಡೆಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಉಳಿಗಾಲವಿಲ್ಲ.

ಕಾರ್ಯಕರ್ತರೊಂದಿಗೆ ೭ ಕಿಮೀ ಪಾದಯಾತ್ರೆ ನಡೆಸಿದ ಶಾಸಕ

ಕನ್ನಡಪ್ರಭ ವಾರ್ತೆ ಶಿರಹಟ್ಟಿಭ್ರಷ್ಟಾಚಾರ, ಬೆಲೆ ಏರಿಕೆ, ಅನುದಾನ ಹಂಚಿಕೆಯಲ್ಲಿ ತಾರತಮ್ಯ, ದುರಾಡಳಿತ ನಡೆಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಆಕ್ರೋಶ ವ್ಯಕ್ತಪಡಿಸಿದರು.ಬುಧವಾರ ತಾಲೂಕಿನ ಛಬ್ಬಿ ಗ್ರಾಮದ ಹೊರದುರಗಮ್ಮ ದೇವಿ ದೇವಸ್ಥಾನದಿಂದ ಎತ್ತು ಚಕ್ಕಡಿ ಸಮೇತ ಅಪಾರ ಜನಸಂಖ್ಯೆ ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ೭ ಕಿಮೀ ಪಾದಯಾತ್ರೆ ನಡೆಸಿ ನಂತರ ಪಟ್ಟಣದ ನೆಹರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಮಾತನಾಡಿದರು.

ವಿಶೇಷವಾಗಿ ಗ್ರಾಮೀಣ ಪ್ರದೇಶಗಳ ರಸ್ತೆ, ಕುಡಿಯುವ ನೀರು, ನೀರಾವರಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ಆದರೆ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿರುವುದರಿಂದ ಜನರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗುವಂತಾಗಿದೆ ಎಂದು ದೂರಿದರು.

ಜನಸಾಮಾನ್ಯರ ಬದುಕಿಗೆ ನೆರವಾಗಬೇಕಾದ ಸರ್ಕಾರವೇ ಬೆಲೆ ಏರಿಏರಿಕೆ ಮಾಡಿ ರೈತರನ್ನು ಭಿಕ್ಷುಕರನ್ನಾಗಿ ಮಾಡಿದೆ. ಈ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ರಾಜಕೀಯ ತಾರತಮ್ಯ ಮಾಡಲಾಗುತ್ತಿದೆ. ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಅಗತ್ಯ ಅನುದಾನ ನೀಡದೆ ಕ್ಷೇತ್ರದ ಅಭಿವೃದ್ಧಿಯನ್ನು ಕಡೆಗಣಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಿಲ್ಲ. ಬರ ಪರಿಸ್ಥಿತಿಯಿಂದ ಮುಂಗಾರು ಹಾಗೂ ಹಿಂಗಾರು ಬೆಳೆಗಳನ್ನು ಕಳೆದುಕೊಂಡ ರೈತರಿಗೆ ಸರ್ಕಾರದಿಂದ ನಿರೀಕ್ಷಿತ ನೆರವು ಸಿಕ್ಕಿಲ್ಲ. ಅಭಿವೃದ್ದಿ ಕಾಮಗಾರಿಗಳ ಕುರಿತು ಕೇವಲ ಘೋಷಣೆಗಳಾಗುತ್ತಿವೆಯೇ ಹೊರತು ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ಟೀಕಿಸಿದರು.ಶಿರಹಟ್ಟಿ ಮಂಡಲದ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ, ಕುಮಾರಸ್ವಾಮಿ ಹಿರೇಮಠ, ಫಕ್ಕೀರೇಶ ರಟ್ಟಿಹಳ್ಳಿ, ನಾಗರಾಜ ಲಕ್ಕುಂಡಿ, ಆನಂದಗೌಡ್ರ ಪಾಟೀಲ, ಲಿಂಗರಾಜ ಪಾಟೀಲ, ಸಣ್ಣವೀರಪ್ಪ ಹಳ್ಳೆಪ್ಪನವರ ಮಾತನಾಡಿದರು. ಜಾನು ಲಮಾಣಿ, ದೇವಪ್ಪ ಇಟಗಿ, ಗಂಗಧರ ಮೆಣಸಿನಕಾಯಿ, ಗೂಳಪ್ಪ ಕರಿಗಾರ, ತಿಮ್ಮರಡ್ಡಿ ಮರಡ್ಡಿ, ಮೋಹನ್ ಗುತ್ತೆಮ್ಮನವರ, ಅಶೋಕ ವರವಿ, ಮಲ್ಲಣ್ಣ ಹಣಜಿ, ಪ್ರವೀಣಗೌಡ ಪಾಟೀಲ, ಡಿ.ವೈ. ಹುನಗುಂದ, ಶರಣು ಚನ್ನೂರ, ನಂದಾ ಪಲ್ಲೇದ ಇತರರು ಇದ್ದರು. ನಂತರ ಗದಗ ಉಪವಿಭಾಗಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.