ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುಆಷಾಢ ಮಾಸದ ಅಂಗವಾಗಿ ಚಾಮುಂಡಿಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಭಕ್ತಾದಿಗಳು ಹಾಗೂ ಪ್ರವಾಸಿಗರಿಗೆ ಕಲ್ಪಿಸಿರುವ ಅಗತ್ಯ ವ್ಯವಸ್ಥೆಗಳನ್ನು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.ಚಾಮುಂಡಿಬೆಟ್ಟದಲ್ಲಿ ಪಾರ್ಕಿಂಗ್ ಸ್ಥಳ, ಬ್ಯಾರಿಕೇಡ್ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪರಿಶೀಲಿಸಿದ ಸಚಿವರು, ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ಮತ್ತು ಪ್ರವಾಸಿಗರೊಂದಿಗೆ ಕೆಲಕಾಲ ಚರ್ಚಿಸಿದರು.ಇದೇ ಸಂದರ್ಭದಲ್ಲಿ ಚಾಮುಂಡಿಬೆಟ್ಟ ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರು, ಜಿಲ್ಲಾಡಳಿತವು ತಮ್ಮನ್ನು ಕಡೆಗಣಿಸುತ್ತಿದೆ. ಯಾವುದೇ ಸಭೆ ಸಮಾರಂಭಗಳಿಗೆ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ದೂರಿದರು. ಅಲ್ಲದೆ, ತಮ್ಮನ್ನು ಹಾಗೂ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚಾಮುಂಡಿಬೆಟ್ಟದಲ್ಲಿ ಕಾರ್ಯಕ್ರಮಗಳನ್ನು ಮಾಡಿದರೇ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.ಈ ವೇಳೆ ಸಚಿವರು ಮಾತನಾಡಿ, ಜನಸಂದಣಿ ನಿರ್ವಹಣೆ, ಭದ್ರತೆಗೆ ಹೆಚ್ಚಿನ ಒತ್ತು ನೀಡಬೇಕು. ಸುಗಮವಾಗಿ ದರ್ಶನಕ್ಕಾಗಿ ಅಗತ್ಯ ಸಿದ್ಧತೆಯನ್ನು ಜಿಲ್ಲಾಡಳಿತದಿಂದ ಮಾಡಲಾಗಿದೆ ಎಂದರು.ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಪಂ ಸಿಇಒ ಯುಕೇಶ್ ಕುಮಾರ್, ನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸೀಫ್, ಶ್ರೀ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ, ಡಿಸಿಪಿಗಳಾದ ಎಂ. ಮುತ್ತುರಾಜು, ಸುಂದರ ರಾಜ್ ಮೊದಲಾದವರು ಇದ್ದರು.