ಸಾರಾಂಶ
ಉಪ ಚುನಾವಣೆ ನಡೆದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಬೇಲೂರು : ಉಪ ಚುನಾವಣೆ ನಡೆದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಯಲ್ಲಿ ಭರ್ಜರಿ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಬಸವೇಶ್ವರ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಜೆ. ನಿಶಾಂತ್ ಮಾತನಾಡಿ, ಮೂರೂ ಕ್ಷೇತ್ರಗಳಲ್ಲಿ ಭರ್ಜರಿಯಾಗಿ ಜಯಗಳಿಸುವ ಮೂಲಕ ಕಾಂಗ್ರೆಸ್ ಪಕ್ಷದ ಅಸ್ತಿತ್ವ ಏನು ಎಂಬುವುದನ್ನು ಸಾಬೀತುಪಡಿಸಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ಮಾಡಿದ್ದ ಮೈತ್ರಿ ಪಕ್ಷಗಳ ನಾಯಕರು, ಇವತ್ತು ಅವರೇ ಮೂಲೆಗುಂಪಾಗಿದ್ದಾರೆ. ಮೂರೂ ಕ್ಷೇತ್ರಗಳ ಮತದಾರ ಪ್ರಭುಗಳು ಇಬ್ಬರು ಮಾಜಿ ಮುಖ್ಯಮಂತ್ರಿ ಮಕ್ಕಳನ್ನು ಮನೆಗೆ ಕಳುಹಿಸಿದ್ದಾರೆ. ಮುಖ್ಯಮಂತ್ರಿಗಳ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಅಪಪ್ರಚಾರ ಮಾಡಿಕೊಂಡು ಬರುತ್ತಿದ್ದ ಇವರಿಗೆ ಜನರು ತಕ್ಕ ಶಾಸ್ತಿ ಮಾಡಿದ್ದು, ಒಕ್ಕಲಿಗ ನಾಯಕರು ಯಾರು ಎಂದು ತೊಡೆ ತಟ್ಟಿದ ನಾಯಕರಿಗೆ ನಿಜವಾದ ನಾಯಕರು ಯಾರೆಂಬುದನ್ನು ಮತದಾನ ಪ್ರಭುಗಳು ತೋರಿಸಿಕೊಟ್ಟಿದ್ದಾರೆ ಎಂದರು.
ಪುರಸಭೆ ಅಧ್ಯಕ್ಷ ಎ. ಆರ್. ಅಶೋಕ್ ಮಾತನಾಡಿ, ಬಡವರ ಪಾಲಿನ ಬಂಧು ಎಂದು ಮತ್ತೊಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತೋರಿಸಿಕೊಟ್ಟಿದ್ದಾರೆ. ಮೂರೂ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗೆಲ್ಲಲು ಭದ್ರ ಬುನಾದಿ ಹಾಕಿಕೊಟ್ಟಿದೆ.ಗ್ಯಾರಂಟಿ ಯೋಜನೆಯ ಮೂಲಕ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಗೆದ್ದು ಬೀಗಿದೆ ಎಂದರು ಮಾಜಿ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ ಆರ್ ವೆಂಕಟೇಶ್, ಪುರಸಭೆ ಸದಸ್ಯರಾದ ಜಮಾಲ್, ಅಕ್ರಂ, ಅಶೋಕ್, ಮುಖಂಡರಾದ ಮಲ್ಲಿಕ್, ರವೀಶ್, ಗೋಪಿನಾಥ್, ಚಂದ್ರಶೇಖರ, ಕೆಡಿಪಿ ಸದಸ್ಯೆ ಸೌಮ್ಯ ಆನಂದ್, ಗಿರೀಶ್, ಸುಬ್ರಹಣ್ಯ, ಇತರರು ಹಾಜರಿದ್ದರು.