- ಅಗತ್ಯ ಎಚ್ಚರ ವಹಿಸಿಲ್ಲ । 23 ಲಕ್ಷ ವಿದ್ಯಾರ್ಥಿಗಲ್ಲಿ ಆತಂಕ ಸೃಷ್ಟಿ

- - -

ದಾವಣಗೆರೆ: ನೀಟ್- ಯುಜಿ ಪರೀಕ್ಷೆ ರದ್ದುಗೊಳಿಸುವ ಮೂಲಕ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕೇಂದ್ರ ಸರ್ಕಾರವು ಕಲ್ಲು ಹಾಕಿದೆ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಮೇ 3ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಪರೀಕ್ಷೆ ರದ್ದುಗೊಳಿಸಿದೆ. ನೀಟ್ -ಯುಜಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಎಚ್ಚರ ವಹಿಸದೇ ಇರುವುದು ದುರಂತದ ಸಂಗತಿ ಎಂದು ಹೇಳಿದ್ದಾರೆ.

ಸುಮಾರು 23 ಲಕ್ಷದಷ್ಟು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರೀಕ್ಷೆ ರದ್ದುಗೊಳಿಸಿರುವುದು ಆತಂಕ ತರುವ ಜೊತೆಗೆ ದುಗುಡ ಹೆಚ್ಚಿಸಿದೆ. ಪರೀಕ್ಷೆ ತೆಗೆದುಕೊಂಡಿದ್ದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸುವುದಾಗಿಯೂ ಹಾಗೂ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ. ಆದರೆ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ರದ್ದುಗೊಳಿಸಿರುವುದರಿಂದ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಸೀಟು ಹಂಚಿಕೆಯೂ ವಿಳಂಬವಾಗುವ ಸಾಧ್ಯತೆ ಇದೆ. ಇದರಿಂದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಕೇಂದ್ರ ಸರ್ಕಾರವು ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟಲು ವಿಫಲವಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ರೊಚ್ಚಿಗೆದ್ದಿದ್ದಾರೆ. ಇದು ಕೇಂದ್ರ ಸರ್ಕಾರದ ನಿರ್ಲಕ್ಷ್ಯದ, ಬೇಜವಾಬ್ದಾರಿಯ ಪರಮಾವಧಿ ಎಂದು ಆರೋಪಿಸಿದ್ದಾರೆ.


ಪರೀಕ್ಷೆಗಾಗಿ ವಿದ್ಯಾರ್ಥಿಗಳು ಸಾಕಷ್ಟು ಶ್ರಮ ವಹಿಸಿದ್ದರು. ಕನಸು ಕಟ್ಟಿಕೊಂಡು ಪರೀಕ್ಷೆ ಬರೆದಿದ್ದರು. ಆದರೆ ದೇಶಾದ್ಯಂತ ಪರೀಕ್ಷೆ ರದ್ದುಗೊಳಿಸಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ವಿದ್ಯಾರ್ಥಿ ಸಮೂಹ ಹಾಗೂ ಪೋಷಕರು ಕ್ಷಮಿಸುವುದಿಲ್ಲ ಎಂದು ಸೈಯದ್ ತಿಳಿಸಿದ್ದಾರೆ.

- - -

-13ಕೆಡಿವಿಜಿ31: ಸೈಯದ್ ಖಾಲಿದ್ ಅಹ್ಮದ್