ಬರ ಅಧ್ಯಯನ ನಡೆಸಿರುವ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡುತ್ತಿದೆ. ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ವಿಜಯಾನಂದ ಕಾಶಪ್ಪನವರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಕುಷ್ಟಗಿ: ಬರ ಅಧ್ಯಯನ ನಡೆಸಿರುವ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡುತ್ತಿದೆ. ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ವಿಜಯಾನಂದ ಕಾಶಪ್ಪನವರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಪಟ್ಟಣಕ್ಕೆ ಭೇಟಿ ನೀಡಿದ ಸಚಿವರಿಗೆ ಸಂಯುಕ್ತ ತೀವ್ರ ಬರಪೀಡಿತ ರೈತರ ಹೋರಾಟ ಸಮಿತಿ ಮುಖಂಡರು ಕೊಪ್ಪಳ ಜಿಲ್ಲೆಯ ರೈತರ ಸಮಸ್ಯೆಗಳ ಕುರಿತು ಮನವಿ ಮಾಡಿದರು. ಜಿಲ್ಲೆಯ ರೈತರಿಗೆ ಬರ ಪರಿಹಾರದ ಪೂರ್ಣ ಮೊತ್ತ ಇನ್ನೂ ಜಮೆಯಾಗಿಲ್ಲ. ಬೆಳೆ ವಿಮೆ ಹಣವೂ ಬಂದಿಲ್ಲ. ಜಾನುವಾರುಗಳಿಗೆ ಮೇವು ಒದಗಿಸಲು ಮೇವು ಬ್ಯಾಂಕ್ ಹಾಗೂ ಗೋಶಾಲೆಗಳನ್ನೂ ಆರಂಭಿಸಿಲ್ಲ. ರೈತರ ಈ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ವಿಜಯಾನಂದ ಕಾಶಪ್ಪನವರ, ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದೆ. ರೈತರಿಗೆ ಒಟ್ಟು ₹5 ಸಾವಿರ ಬರ ಪರಿಹಾರ ನೀಡಲು ನಿರ್ಧರಿಸಲಾಗಿದ್ದು, ಈಗಾಗಲೇ ಮೊದಲ ಕಂತಿನಲ್ಲಿ ₹2,500 ರೈತರ ಖಾತೆಗಳಿಗೆ ಜಮೆ ಮಾಡಲಾಗಿದೆ. ಉಳಿದ ₹2,500 ಮೊತ್ತವನ್ನೂ ಶೀಘ್ರದಲ್ಲೇ ಜಮೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೇವು ಬ್ಯಾಂಕ್, ಗೋಶಾಲೆ ಆರಂಭಿಸುವ ಹಾಗೂ ಬೆಳೆ ವಿಮೆ ಪಾವತಿಸುವ ಪ್ರಕ್ರಿಯೆ ನಡೆಯುತ್ತಿದೆ. ಕೊಪ್ಪಳ ಜಿಲ್ಲೆಯಲ್ಲಿ ಈ ಕಾರ್ಯಗಳಲ್ಲಿ ವಿಳಂಬವಾಗುತ್ತಿರುವ ಕುರಿತು ಮಾಹಿತಿ ಪಡೆದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಲಾಗುವುದು ಎಂದರು.ಸಂಯುಕ್ತ ತೀವ್ರ ಬರಪೀಡಿತ ರೈತರ ಹೋರಾಟ ಸಮಿತಿಯ ಮುಖಂಡರಾದ ಹನುಮೇಶ ಶಾಖಾಪುರ, ಯಮನೂರಪ್ಪ ಮಡಿವಾಳರ, ಅಕ್ಕಮ್ಮ, ಮರೇಗೌಡ್ರ ಉಪಸ್ಥಿತರಿದ್ದರು.