ಕನ್ನಡಪ್ರಭ ವಾರ್ತೆ ಬೆಳಗಾವಿ
ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಭಾರತ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಉಪರಾಷ್ಟ್ರಪತಿಗೆ ಮನವಿ ಮಾಡಿದರು.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಗುರುವಾರ ನಡೆದ ಕಲಶಾರೋಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಸ್ತುತ ಗಲ್ಫ್ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಉಂಟಾಗಿದೆ. ಭಾರತ ಪ್ರಾಚೀನ ಕಾಲದಿಂದಲೂ ವಿಶ್ವಶಾಂತಿಯನ್ನು ಪ್ರತಿಪಾದಿಸುತ್ತ ಬಂದಿರುವ ನಾಡು. ಆದ್ದರಿಂದ ಜಾಗತಿಕ ಮಟ್ಟದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಭಾರತ ಸರ್ಕಾರ ಮಧ್ಯಪ್ರವೇಶಿಸಿ ಯುದ್ಧ ನಿಲ್ಲಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಇದರಿಂದ ಪ್ರಪಂಚದಾದ್ಯಂತ ಭಾರತದ ಗೌರವ ಮತ್ತು ಘನತೆ ಮತ್ತಷ್ಟು ಹೆಚ್ಚಾಗುತ್ತದೆ ಎಂದರು.
ಇದೇ ವೇಳೆ ದೇಶದ ಆಂತರಿಕ ವಿಚಾರಗಳ ಕುರಿತು ಮಾತನಾಡಿದ ಅವರು, ದೇಶದಲ್ಲಿ ಸಮಾನತೆ ಸ್ಥಾಪಿಸುವ ನಿಟ್ಟಿನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರುವುದು ಅಗತ್ಯ. ಈ ಕಾನೂನನ್ನು ಶೀಘ್ರ ಜಾರಿಗೆ ತರಲು ಉಪರಾಷ್ಟ್ರಪತಿಗಳು ಮುತುವರ್ಜಿ ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.