- ಹೊನ್ನಾಳಿಯಲ್ಲಿ ಬಿಜೆಪಿ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳ ಹೆಸರು ಘೋಷಣೆ
- - -ಕನ್ನಡಪ್ರಭ ವಾರ್ತೆ ಹೊನ್ನಾಳಿ
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ, ರೈತರು ಸಂಕಷ್ಟದಲ್ಲಿದ್ದಾರೆ. ಆದರೆ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ. ಹೀಗಾದರೆ ರೈತರು ಯಾರ ಬಳಿ ಸಮಸ್ಯೆ ಹೇಳಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.ಸೋಮವಾರ ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಹೆಸರನ್ನು ಘೋಷಣೆ ಮಾಡಿ ಅವರು ಮಾತನಾಡಿದರು. ಇಡೀ ರಾಜ್ಯದಲ್ಲಿ ಮಳೆ ಕೊರತೆಯಿಂದ ಎಲ್ಲ ಬೆಳೆಗಳು ಸರ್ವನಾಶ ಆಗಿದೆ. ಆದರೂ ರಾಜ್ಯ ಸರ್ಕಾರ ಯಾವೊಬ್ಬ ಮಂತ್ರಿಯೂ ಯಾವುದೇ ಬರ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿಲ್ಲ. ರೈತರಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿಲ್ಲ. ಬಹುಮುಖ್ಯವಾಗಿ ಕೃಷಿ ಹಾಗೂ ತೋಟಗಾರಿಕೆ ಸಚಿವರ ನೇಮಕವೂ ಆಗಿಲ್ಲ. ಇಂತಹ ದುಸ್ಥಿತಿಯಲ್ಲಿ ರೈತರು ಏನು ಮಾಡಬೇಕು ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಅತಿವೃಷ್ಠಿ ಎದುರಾದಾಗ ಕೂಡಲೇ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅತಿವೃಷ್ಟಿಗೆ ಒಳಗಾದ ಎಲ್ಲ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳದಲ್ಲೇ ಪರಿಹಾರ ಘೋಷಣೆ ಮಾಡಿದ್ದರು. ಅಲ್ಲದೇ ಮಳೆಯಿಂದ ಬಿದ್ದ ಮನೆಗಳಿಗೆ ₹90 ಸಾವಿರದಿಂದ ₹5 ಲಕ್ಷದವರೆಗೆ ಪರಿಹಾರ ನೀಡಿದ್ದರು. ಆದರೆ, ಕಾಂಗ್ರೆಸ್ ಸರ್ಕಾರ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಇನ್ನೂ ಮೀನಾ, ಮೇಷ ಎಣಿಸುತ್ತಿದೆ. ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕಾದರೆ ಮೊದಲು ರೈತರ ಸಾಲ ಮನ್ನಾ ಮಾಡಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದರು.
ವಿವಿಧ ಮೋರ್ಚಾಗಳ ಅಧ್ಯಕ್ಷರು:
ಹಿಂದುಳಿದ ವರ್ಗದ ತಾಲೂಕು ಅಧ್ಯಕ್ಷ ರಘು, ಯುವ ಮೋರ್ಚಾ ಅಧ್ಯಕ್ಷ ಪುನಿತ್ ಬಣ್ಣಜ್ಜಿ, ಎಸ್ಸಿ ಮೋರ್ಚಾ ಹನುಮಂತಪ್ಪ ತ್ಯಾಗದಕಟ್ಟೆ, ರೈತ ಮೋರ್ಚಾ ಅಧ್ಯಕ್ಷ ರಮೇಶ್ ಗೌಡ ತರಗನಹಳ್ಳಿ, ಮಹಿಳಾ ಮೋರ್ಚಾ ಅಧ್ಯಕ್ಷೆ ತಾರಮ್ಮ ಸುರಹೊನ್ನೆ, ಎಸ್‌ಟಿ ಮೋರ್ಚಾ ರುದ್ರೇಶ್ ಹಾಗೂ ಪದಾಧಿಕಾರಿಗಳ ಜವಾಬ್ದಾರಿಗಳನ್ನು ಸಚಿವ ಎಂ.ಪಿ.ರೇಣುಕಾಚಾರ್ಯ ಹಾಗೂ ತಾಲೂಕು ಬಿಜೆಪಿ ಅಧ್ಯಕ್ಷ ಅರಕೆರೆ ನಾಗರಾಜ್ ಘೋಷಣೆ ಮಾಡಿದರು.ಈ ಸಂದರ್ಭದಲ್ಲಿ ಬಿಜೆಪಿಯ ಅನೇಕ ಮುಖಂಡರು, ಕಾರ್ಯಕರ್ತರು ಇದ್ದರು.
- - -(ಕೋಟ್) ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡಿರುವವರು ಪಕ್ಷ ಸಂಘಟನೆಗೆ ಹೆಚ್ಚು ಆದ್ಯತೆ ನೀಡಬೇಕು. ಮೊದಲು ಪಕ್ಷ ಸಂಘಟನೆಗೆ ಹಗಲಿರಳು ಕೆಲಸ ಮಾಡಿರುವ ಪ್ರಮುಖ ಕಾರ್ಯಕರ್ತರನ್ನು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಾವು ಗೆಲ್ಲಿಸಿಕೊಂಡು ಬರಬೇಕು. ಆ ನಿಟ್ಟಿನಲ್ಲಿ ಹೊಸದಾಗಿ ಆಯ್ಕೆಯಾದ ಎಲ್ಲ ಮೋರ್ಚಾಗಳ ಪದಾಧಿಕಾರಿಗಳು ಈಗಿನಿಂದಲೇ ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಮಾಡಬೇಕು.
- ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ, ಬಿಜೆಪಿ.- - -
-13ಎಚ್.ಎಲ್.ಐ1:ಬಿಜೆಪಿಯ ವಿವಿಧ ಮೋರ್ಚಾಗಳ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಜವಾಬ್ದಾರಿಯನ್ನು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹಾಗೂ ಬಿಜೆಪಿ ಅಧ್ಯಕ್ಷ ಅರಕೆರೆ ನಾಗರಾಜ್ ಘೋಷಣೆ ಮಾಡಿದರು.