ಸಾರಾಂಶ
ಶಿವಮೊಗ್ಗದ ಸೀನಪ್ಪ ಶೆಟ್ಟಿ ವೃತ್ತದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ಸಿಗರು ಪಕ್ಷದ ಬಾವುಟ ಹಿಡಿದು ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗಮುಡಾ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲರು ಪೂರ್ವಾನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಸೀನಪ್ಪಶೆಟ್ಟಿ (ಗೋಪಿ) ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ, ರಸ್ತೆ ತಡೆ ನಡೆಸಿ ದಿಢೀರ್ ಪ್ರತಿಭಟನೆ ನಡೆಸಲಾಯಿತು.ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಕಾನೂನು ಗಾಳಿಗೆ ತೂರಿ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿದ್ದಾರೆ. ಇದು ಕಾನೂನು ಬಾಹಿರ ನಡೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಪ್ರತಿಭಟನಾಕಾರರು ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಜೊತೆಗೆ ಬಿಜೆಪಿ- ಜೆಡಿಎಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಪಾಲರು ಕೇಂದ್ರದ ಕೈಗೊಂಬೆಯಾಗಿ ನಡೆದುಕೊಳ್ಳುತ್ತಿದ್ದಾರೆ. ಕಾನೂನುನನ್ನು ಗಾಳಿಗೆ ತೂರಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ರಾಜಕೀಯ ಪ್ರೇರಿತ ಎಂದು ದೂರಿದರು.ಸೀನಪ್ಪಶೆಟ್ಟಿ (ಗೋಪಿ) ವೃತ್ತದಲ್ಲಿ ವೃತ್ತಾಕಾರದಲ್ಲಿ ನಿಂತ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ನೆಹರು ರಸ್ತೆ, ಬಾಲರಾಜ ಅರಸು ರಸ್ತೆ, ಕಸ್ತೂರ ಬಾ ರಸ್ತೆ, ದುರ್ಗಿಗುಡಿ ರಸ್ತೆ, ಜ್ಯೂವೆಲ್ ರಾಕ್ ರಸ್ತೆಗಳಲ್ಲಿ ವಾಹನಗಳು ಜ್ಯಾಮ್ ಆಗಿದ್ದವು.
ಪ್ರಮುಖರಾದ ಎನ್. ರಮೇಶ್, ಎಸ್.ಪಿ. ಶೇಷಾದ್ರಿ, ಶಿವಕುಮಾರ್, ಕಲೀಂ ಪಾಶ, ಗಿರೀಶ್, ಶರತ್ ಮರಿಯಪ್ಪ, ಶಾಮೀರ್ ಖಾನ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.