ನೆಲಮಂಗಲ: ರಾಜ್ಯದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ನೆಲಮಂಗಲ: ರಾಜ್ಯದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ನಗರಸಭೆ ವ್ಯಾಪ್ತಿಯ ವೀವರ್ಸ್ ಕಾಲೋನಿಯ ಶ್ರೀ ಚೌಡೇಶ್ವರಿ ದೇವಾಲಯ ಮುಂಭಾಗದಲ್ಲಿ ಬಿಜೆಪಿ ರೈತರ ಮೋರ್ಚಾ ನೇತೃತ್ವದಲ್ಲಿ ಸಮಾವೇಶಗೊಂಡು ನೂರಾರು ಮಂದಿ ರೈತರು ಮತ್ತು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಮೆರವಣಿಗೆ ನಡೆಸಿದರು. ಮೆರವಣಿಗೆಯಲ್ಲಿ ಕಾಂಗ್ರೆಸ್ ಸರ್ಕಾರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಎತ್ತಿನ ಗಾಡಿ ಹಾಗೂ ಟ್ಯಾಕ್ಟರ್ ರ್ಯಾಲಿ: ಪ್ರತಿಭಟನೆ ಹಿನ್ನಲೆ ಚೌಡೇಶ್ವರಿ ದೇವಾಲಯದಿಂದ ನಗರದ ತಾಲೂಕು ಕಚೇರಿವರೆಗೂ ಸುಮಾರು 10 ಎತ್ತಿನ ಗಾಡಿ ಹಾಗೂ 10 ಟ್ಯಾಕ್ಟರ್ಗಳು ಮೂಲಕ ನಗರದ ಮುಖ್ಯರಸ್ತೆಯಲ್ಲಿ ರ್ಯಾಲಿ ನಡೆಸಿದ್ದ ಹಿನ್ನಲೆ ನಗರದ ಮುಖ್ಯರಸ್ತೆ ಟ್ರಾಫಿಕ್ ಉಂಟಾಗಿದ್ದು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿತ್ತು. ಬಳಿಕ ನಗರ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ಭರತ್ಗೌಡ ನೇತೃತ್ವದ ಪೊಲೀಸ್ ಸಿಬ್ಬಂದಿಗಳು ಟ್ರಾಫಿಕ್ ನಿಯಂತ್ರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ವಿಧಾನ ಪರಿಷತ್ತು ಮಾಜಿ ಸದಸ್ಯ ಅಶ್ವಥ್ ನಾರಾಯಣ್‌ ಮಾತನಾಡಿ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ. ರೈತರ ಸಮಸ್ಯೆಗಳನ್ನು ಕೇಳುವವರೇ ಇಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ನೀಡಿದ್ದೇವೆ ಎಂದು ಜನರನ್ನು ನಂಬಿಸಿ, ಖಜಾನೆ ಲೂಟಿ ಮಾಡುತ್ತಿದ್ದಾರೆ. ಬೆಳೆ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಆದರೆ ಇದು ಕೇವಲ ಮಾಧ್ಯಮದಲ್ಲಿ ಮಾತ್ರ ಕಾಣಬಹುದಾಗಿದೆ. ಆದರೆ ರೈತರ ಖಾತೆಗೆ ಹಣ ಬಂದಿಲ್ಲ. ರಾಜ್ಯ ಸರ್ಕಾರ ರೈತರ ಬದುಕನ್ನು ಸಂಕಷ್ಟಕ್ಕೆ ದೂಡುತ್ತಿದೆ ಎಂದರು.

ಬಿಜೆಪಿ ರೈತ ಮೋರ್ಚಾ ಗ್ರಾಮಾಂತರ ಜಿಲ್ಲಾಧ್ಯಕ್ಷ ಕೆ.ಪಿ.ಬೃಂಗೇಶ್ ಮಾತನಾಡಿ ರಾಜ್ಯದಾದ್ಯಂತ ಅತಿಹೆಚ್ಚು ಮಂದಿ ಕೃಷಿ ಕಾಯಕವನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದು ರೈತರ ವಿರೋಧಿ ಕಾಂಗ್ರೇಸ್ ಸರ್ಕಾರ ರೈತರಿಗೆ ಸಂಕಷ್ಟ ಅನುಭವಿಸುವಂತೆ ಮಾಡುತ್ತಿದೆ. ರೈತರಿಗೆ ಬೆಂಬಲ ಬೆಲೆ ನೀಡುವಲ್ಲಿ ಸಂಪೂರ್ಣ ರಾಜ್ಯ ಸರ್ಕಾರ ವಿಫಲವಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರ ಬಗ್ಗೆಗಿನ ಕಾಳಜಿ ಹಿನ್ನಲೆ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ. ಅದರೇ ಕಾಂಗ್ರೇಸ್ ಸರ್ಕಾರ ರೈತರಿಗೆ ನಿತ್ಯ ಒಂದಲ್ಲ ಒಂದು ರೀತಿ ಸಮಸ್ಯೆ ಉಂಟು ಮಾಡುತ್ತಿದೆ. ರೈತರ ಶಾಪ ಖಂಡಿತ ರಾಜ್ಯ ಸರ್ಕಾರಕ್ಕೆ ತಟ್ಟುತ್ತದೆ. ರೈತರ ಕಣ್ಣೀರು ಹಾಕಿಸಿರುವ ರಾಜ್ಯ ಕಾಂಗ್ರೇಸ್ ಸರ್ಕಾರಕ್ಕೆ ರೈತರ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ ಭೂಸ್ವಾಧೀನ ಹೆಸರಿನಲ್ಲಿ ರೈತರ ಕೃಷಿ ಭೂಮಿಯನ್ನು ವಶಪಡಿಸಿಕೊಂಡು ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ಜತೆಗೆ ಕಾಂಗ್ರೇಸ್ ಸರ್ಕಾರದ ಅವಧಿಯಲ್ಲಿ ರೈತರು ಹಾಗೂ ಜನಸಾಮಾನ್ಯರು ನೋವು ಅನುಭವಿಸುತ್ತಿದ್ದಾರೆ. ಜತೆಗೆ ಸರ್ಕಾರಿ ಕಚೇರಿಗಳು ಕಾಂಗ್ರೇಸ್ ಕಚೇರಿಗಳಾಗಿ ಮಾರ್ಪಟ್ಟಿದೆ. ಅಧಿಕಾರಿಗಳ ಬ್ರಷ್ಟಚಾರ ಹೆಚ್ಚಳವಾಗಿದೆ ಎಂದು ಅರೋಪಿಸಿದರು.

ಸಂದರ್ಬದಲ್ಲಿ ಬಿ ಜೆ ಪಿ ಮುಖಂಡ ಸಪ್ತಗಿರಿ ಶಂಕರ್‌ ನಾಯಕ್‌ ಮಾಜಿ ಶಾಸಕ ಎಂ.ವಿ.ನಾಗರಾಜು, ಚಂದ್ರಪ್ಪ, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರವಿ ಇದ್ದರು.

ಪೊಟೊ-8 ಕೆಎನ್‌ಎಲ್‌ಎಮ್‌1-ನೆಲಮಂಗಲ ನಗರದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.