ಕನ್ನಡಪ್ರಭ ವಾರ್ತೆ ಬೆಳಗಾವಿ

ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ ಆರೋಪಿಸಿದರು.

ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಿಂದ ಆರಂಭವಾಗಿ ಈಗಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಡಳಿತದವರೆಗೂ ಸರ್ಕಾರ ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಲು ವಿಫಲವಾಗಿದೆ ಎಂದು ಟೀಕಿಸಿದರು.

ಕಾಂಗ್ರೆಸ್‌ನಲ್ಲಿ ಕಳೆದ ಎರಡು ವರ್ಷಗಳಿಂದ ಅಧಿಕಾರ ಹಂಚಿಕೆ ವಿಚಾರದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಈಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡು ಎರಡು ತಿಂಗಳು ಕಳೆದಿದ್ದರೂ, ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿರುವ ಸಂದರ್ಭದಲ್ಲಿ ಸಚಿವ ಸಂಪುಟದೊಳಗಿನ ಭಿನ್ನಾಭಿಪ್ರಾಯಗಳೇ ಹೆಚ್ಚಾಗಿ ಗೋಚರಿಸುತ್ತಿವೆ. ನಿರುದ್ಯೋಗ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದ ಸರ್ಕಾರ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ. ಕೆಪಿಎಸ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಪಶುವೈದ್ಯಕೀಯ ಹುದ್ದೆಗಳ ನೇಮಕಾತಿಯಲ್ಲೂ ಅಕ್ರಮ ನಡೆದಿರುವ ಆರೋಪಗಳಿವೆ. ಈ ಕುರಿತು ಸರ್ಕಾರ ಹಾಗೂ ಸಂಬಂಧಿತ ಸಚಿವರು ಸಮರ್ಪಕ ಉತ್ತರವನ್ನು ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುವ ಅವಕಾಶವೂ ರಾಜ್ಯದಲ್ಲಿ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಹೋರಾಟ ನಡೆಸಲಿದೆ. ಮುಖ್ಯಮಂತ್ರಿ ಹಾಗೂ ಸಚಿವ ಸಂತೋಷ್ ಲಾಡ್ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿರುವುದನ್ನು ಪ್ರಶ್ನಿಸಿದ ಅವರು, ಕಾಂಗ್ರೆಸ್‌ನ ನಿಲುವನ್ನು ಖಂಡಿಸಿದರು.


ಆ.13ರಿಂದ ಹರ್‌ ಘರ್‌ ತಿರಂಗಾ ಅಭಿಯಾನ

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಆ.13ರಿಂದ ಆರಂಭವಾಗಲಿರುವ ಹರ್ ಘರ್ ತಿರಂಗಾ ಅಭಿಯಾನ ರಾಜ್ಯಾದ್ಯಂತ ನಡೆಯಲಿದ್ದು, ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ವೇಳೆ ಮಾತನಾಡಿದ ಮಾಜಿ ಶಾಸಕ ಸಂಜಯ ಪಾಟೀಲ, ನೀಟ್ ಪರೀಕ್ಷೆ ಸಂಬಂಧ ದೆಹಲಿಯಲ್ಲಿ ನಡೆದ ಪ್ರತಿಭಟನೆಗಳಲ್ಲಿ ನೈಜ ವಿದ್ಯಾರ್ಥಿಗಳಿಗಿಂತ ರಾಜಕೀಯ ಉದ್ದೇಶದಿಂದ ಕೆಲವರು ಭಾಗವಹಿಸಿದ್ದಾರೆ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅಪಪ್ರಚಾರ ನಡೆಸುವ ಉದ್ದೇಶದಿಂದ ವಿರೋಧ ಪಕ್ಷಗಳು ಇಂತಹ ಹೋರಾಟಗಳನ್ನು ಸಂಘಟಿಸುತ್ತಿವೆ ಎಂದು ಟೀಕಿಸಿದರು. ಪ್ರಧಾನಿ ಮೋದಿ ಅವರ ನಾಯಕತ್ವವನ್ನು ವಿಶ್ವದ ಹಲವು ರಾಷ್ಟ್ರಗಳು ಮೆಚ್ಚಿಕೊಂಡಿವೆ. ದೇಶದಲ್ಲಿ ಹಲವು ಸುಧಾರಣಾ ಕ್ರಮಗಳು ಜಾರಿಯಾಗಿದ್ದು, ನೀಟ್ ಪರೀಕ್ಷೆಯಲ್ಲಿಯೂ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ. ವಿರೋಧ ಪಕ್ಷಗಳು ಎಷ್ಟೇ ಅಪಪ್ರಚಾರ ನಡೆಸಿದರೂ ಜನರು ಸತ್ಯವನ್ನು ಅರಿತುಕೊಂಡಿದ್ದಾರೆ ಎಂದು ಹೇಳಿದರು.

ಈ ಸುದ್ದಿಗೋಷ್ಠಿಯಲ್ಲಿ ಅರವಿಂದ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಲ್ಲಿಕಾರ್ಜುನ ಮಾದಮ್ಮನವರ, ಬಿಜೆಪಿ ಮಹಾನಗರದ ಜಿಲ್ಲಾಧ್ಯಕ್ಷೆ ಗೀತಾ ಸುತಾರ, ಸಚಿನ್ ಕಡಿ ಮೊದಲಾದವರು ಉಪಸ್ಥಿತರಿದ್ದರು.