ಕನ್ನಡಪ್ರಭ ವಾರ್ತೆ ಬೆಳಗಾವಿರಾಜ್ಯದಲ್ಲಿ ಬೆಲೆ ಏರಿಕೆ, ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ರಾಜ್ಯದಲ್ಲಿ ಬೆಲೆ ಏರಿಕೆ, ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ವ್ಯಕ್ತಪಡಿಸಿದರು.ಬಳಿಕ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಮನವಿ ಸಲ್ಲಿಸಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಹಿತವನ್ನು ಕಡೆಗಣಿಸಿ ಆಡಳಿತ ನಡೆಸುತ್ತಿದೆ. ಕಳೆದ ಮೂರೂವರೆ ವರ್ಷಗಳಲ್ಲಿ ರಾಜ್ಯದ ಜನರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.ಹಾಲು ಉತ್ಪಾದಕರ ಹಿತದ ಹೆಸರಿನಲ್ಲಿ ಹಾಲಿನ ದರ ಹೆಚ್ಚಿಸಿದ ಸರ್ಕಾರ, ಅದರ ಸಂಪೂರ್ಣ ಲಾಭವನ್ನು ರೈತರಿಗೆ ನೀಡದೆ ಗ್ರಾಹಕರ ಮೇಲೆಯೂ ಬೆಲೆ ಏರಿಕೆಯ ಹೊರೆ ಹೊರಿಸಿದೆ. ಸರ್ಕಾರಿ ಸೌಲಭ್ಯಗಳ ಶುಲ್ಕ ಹೆಚ್ಚಳ ಹಾಗೂ ಬಸ್ ಪ್ರಯಾಣ ದರ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಉಚಿತ ಬಸ್ ಪ್ರಯಾಣದ ಹೆಸರಿನಲ್ಲಿ ಒಂದು ಕೈಯಿಂದ ಕೊಟ್ಟು ಮತ್ತೊಂದು ಕೈಯಿಂದ ಕಿತ್ತುಕೊಳ್ಳುವ ನೀತಿಯನ್ನು ಸರ್ಕಾರ ಅನುಸರಿಸುತ್ತಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ನಾಯಕರು ಸಂವಿಧಾನಬದ್ಧ ಸಂಸ್ಥೆಗಳ ಬಗ್ಗೆ ಜನರಲ್ಲಿ ಅಪನಂಬಿಕೆ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋತಾಗ ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಆರೋಪ ಮಾಡುವವರು ಗೆದ್ದಾಗ ಅದೇ ವ್ಯವಸ್ಥೆಯನ್ನು ಸಮರ್ಥಿಸಿಕೊಳ್ಳುತ್ತಾರೆ. ಚುನಾವಣಾ ಆಯೋಗ, ಸುಪ್ರೀಂ ಕೋರ್ಟ್ ಹಾಗೂ ಸಿಬಿಐ ಸೇರಿದಂತೆ ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದರೂ ಸರ್ಕಾರ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. 150ಕ್ಕೂ ಹೆಚ್ಚು ತಾಲೂಕುಗಳಲ್ಲಿ ಮಳೆ ಕೊರತೆ ಉಂಟಾಗಿದ್ದು, ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗಿದೆ. ಆದರೂ ಸಚಿವರು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸುವ ಕೆಲಸ ಮಾಡಿಲ್ಲ ಎಂದು ದೂರಿದರು.
ವಿಬಿ-ಜಿ ರಾಮ-ಜಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸರ್ಕಾರ ಗಮನಹರಿಸಿಲ್ಲ. ಅಂಗನವಾಡಿ ನೌಕರರ ವೇತನ ಹೆಚ್ಚಳ ಹಾಗೂ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಭರವಸೆಗಳು ಘೋಷಣೆಗಳಿಗೆ ಸೀಮಿತವಾಗಿವೆ. ವಾಲ್ಮೀಕಿ ನಿಗಮ ಹಾಗೂ ಮೂಡಾ ಹಗರಣಗಳಲ್ಲಿ ಸರ್ಕಾರದ ಪಾತ್ರದ ಕುರಿತು ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿಂದೆ ಕಾಂಗ್ರೆಸ್ ಮಾಡಿದ್ದ ಶೇ.40 ಕಮಿಷನ್ ಆರೋಪಗಳಿಗೆ ವ್ಯತಿರಿಕ್ತವಾಗಿ, ಈಗ ಗುತ್ತಿಗೆದಾರರ ದೂರುಗಳಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಕಮಿಷನ್ ಆರೋಪಗಳು ಕೇಳಿಬರುತ್ತಿವೆ ಎಂದು ಟೀಕಿಸಿದರು.ಪ್ರತಿಭಟನೆಯಲ್ಲಿ ರಾಜ್ಯಸಭಾ ಮಾಜಿ ಸದಸ್ಯ ಈರಣ್ಣ ಕಡಾಡಿ, ಮಾಜಿ ಶಾಸಕ ವಿಶ್ವನಾಥ ಪಾಟೀಲ, ಸಾಬಣ್ಣ ತಳವಾರ, ಎಂ.ಬಿ.ಜಿರಲಿ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈರಣ್ಣ ಅಂಗಡಿ, ರಾಜಕುಮಾರ ಪವಲೆ, ವಿಜಯಕುಮಾರ ಕೊಡಗನೂರ, ಯುವರಾಜ ಜಾಧವ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ, ಈರಯ್ಯ ಖೋತ, ಮುಖಂಡರಾದ ಪಿ.ಎಫ್.ಪಾಟೀಲ, ಮುರಗೇಂದ್ರಗೌಡ ಪಾಟೀಲ, ಡಾ.ರವಿ ಪಾಟೀಲ, ವಿನಯ ಕದಂ, ನಿತಿನ್ ಚೌಗಲೆ, ಜಗದೀಶ ಬೂದಿಹಾಳ, ಸಚಿನ್ ಕಡಿ, ಯಲ್ಲೇಶ ಕೋಲಕಾರ, ಉಮೇಶ ಪುರಿ, ಪ್ರವೀಣ ಮಾಳೇದರ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.ರಾಜ್ಯದ ಖಜಾನೆಯನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಜನಹಿತವನ್ನು ಕಡೆಗಣಿಸಿ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿ ಸರ್ಕಾರದ ಆಡಳಿತ ವೈಖರಿಯನ್ನು ಪರಿಶೀಲಿಸಬೇಕು. ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು.
-ಅನಿಲ ಬೆನಕೆ, ಮಾಜಿ ಶಾಸಕ, ಉಪಾಧ್ಯಕ್ಷ, ರಾಜ್ಯ ಬಿಜೆಪಿ