ಜಿಲ್ಲೆಯಾದ್ಯಂತ ಕಾಂಗ್ರೆಸ್ ಅಲೆ ಜೋರು

| Published : Apr 14 2024, 01:46 AM IST

ಸಾರಾಂಶ

ಬೆಳಗಾವಿ ಜಿಲ್ಲೆಯಾದ್ಯಂತ ಕಾಂಗ್ರೆಸ್ ಅಲೆ ಜೋರಾಗಿ ಬೀಸುತ್ತಿದ್ದು, ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ ಜಿಲ್ಲೆಯಾದ್ಯಂತ ಕಾಂಗ್ರೆಸ್ ಅಲೆ ಜೋರಾಗಿ ಬೀಸುತ್ತಿದ್ದು, ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿಶ್ವಾಸ ವ್ಯಕ್ತಪಡಿಸಿದರು.

ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಬುಡರಕಟ್ಟಿ, ಗೋವನಕೊಪ್ಪ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್‌ ಪರ ಮತಯಾಚಿಸಿ ಮಾತನಾಡಿದ ಅವರು, ಬೈಲಹೊಂಗಲ ಕ್ಷೇತ್ರದಿಂದ ಅತಿಹೆಚ್ಚು ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬರಲಿವೆ ಎಂದು ಸಚಿವರು ಭರವಸೆ ವ್ಯಕ್ತಪಡಿಸಿದರು.

ಕೊರೋನಾ ಸಂಕಷ್ಟ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಅನುಕೂಲವಾಗುವ ಸಲುವಾಗಿ 2023ರ ವಿಧಾನಸಭೆ ಚುನಾವಣೆಗೂ ಮುನ್ನ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಯಿತು. ನಿರೀಕ್ಷೆಯಂತೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 135 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿತು. ಅಧಿಕಾರಕ್ಕೆ ಬಂದ ಕೇವಲ100 ದಿನಗಳಲ್ಲಿ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು ಎಂದು ತಿಳಿಸಿದರು.

ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ಸರ್ಕಾರ ಶ್ರೀಮಂತರ ಪರ ಕೆಲಸ ಮಾಡುತ್ತಿದೆ. ಬಡವರ ಅನುಕೂಲಕ್ಕಾಗಿ ಜಾರಿಗೆ ತರಲಾಗಿರುವ ಯೋಜನೆಗಳ ವಿರುದ್ಧ ಬಿಜೆಪಿಯವರು ಕೋರ್ಟ್‌ನಲ್ಲಿ ಕೇಸ್ ಹಾಕಿಸಿದ್ದಾರೆ. ಬಿಜೆಪಿಯವರಿಗೆ ಅಂಬಾನಿ, ‌ಅದಾನಿಯವರ ಚಿಂತೆ ಎಂದು ಲೇವಡಿ ಮಾಡಿದರು.

ಬಿಜೆಪಿ ಗೆದ್ದರೆ ಬೆಳಗಾವಿ ಜನ ಅವರನ್ನು ಹುಡುಕಿಕೊಂಡು ಹುಬ್ಬಳ್ಳಿಗೆ ಹೋಗುವ ಪರಿಸ್ಥಿತಿ ಬರುತ್ತದೆ. ಜನರು ಎಚ್ಚರಿಕೆಯಿಂದ ಮತ ಹಾಕಬೇಕು ಎಂದು ತಿಳಿಸಿದರು.

ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಮಾತನಾಡಿ, ಯುವಕರೇ ಈ ದೇಶದ ಆಸ್ತಿ. ನಾನೊಬ್ಬ ಯುವಕನಿದ್ದು, ಜನರ ಕಷ್ಟ ಸುಖಗಳಿಗೆ ಸ್ಪಂದಿಸುವ ಮನೋಭಾವ ಹೊಂದಿದ್ದೇನೆ. ಈ ಬಾರಿ ಎಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಕ್ಷೇತ್ರದಲ್ಲಿ ಬಿಜೆಪಿ ಸತತ 5 ಬಾರಿ ಗೆದ್ದಿದ್ದರೂ ಅಭಿವೃದ್ಧಿ ಮಾತ್ರ ಮಾಡಲಿಲ್ಲ. ಕೇವಲ ಪಕ್ಷ, ಮೋದಿ ಹೆಸರಿನಲ್ಲಿ ಗೆದ್ದಿದ್ದೆ ಅವರ ಸಾಧನೆ ಎಂದರು.

ಬೈಲಹೊಂಗಲ ತಾಲೂಕಿನ ನಯಾನಗರದಲ್ಲಿರುವ ಸುಖದೇವಾನಂದ ಮಠಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಭೇಟಿ ನೀಡಿದರು. ಶ್ರೀ ಅಭಿನವ ಸಿದ್ಧಲಿಂಗ ಮಹಾಸ್ವಾಮಿಗಳ ಆಶೀರ್ವಾದ ಪಡೆದರು.

ಈ ವೇಳೆ ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ, ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರ್ತಿಕ್ ಪಾಟೀಲ್, ಶಿವರುದ್ರಪ್ಪ ಹಟ್ಟಿಹೊಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರಗೌಡ ಪಾಟೀಲ, ಮಹಾದೇವಿ ಬೊಡ್ಕಿ, ಜಾನವ್ವ ಬಾವನ್ವರ್, ಬಸವನಗೌಡ ಪಾಟೀಲ, ವೀರಭದ್ರ ಡೊಂಬರಕೊಪ್ಪ‌,ಮಹಲಿಂಗ ಕಿತ್ತೂರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.