ಸಮಾನ ಅವಕಾಶ, ನ್ಯಾಯ ಒದಗಿಸುವುದು ಸಂವಿಧಾನದ ಆಶಯ: ಬಿರಾದಾರ ದೇವೀಂದ್ರಪ್ಪ

| Published : Nov 13 2025, 01:00 AM IST

ಸಮಾನ ಅವಕಾಶ, ನ್ಯಾಯ ಒದಗಿಸುವುದು ಸಂವಿಧಾನದ ಆಶಯ: ಬಿರಾದಾರ ದೇವೀಂದ್ರಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ಹಾವೇರಿ ನಗರದ ಜಿಲ್ಲಾ ಆಸ್ಪತ್ರೆ ಸಭಾಭವನದಲ್ಲಿ ಬುಧವಾರ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿರಾದಾರ ದೇವೀಂದ್ರಪ್ಪ ಎನ್. ಉದ್ಘಾಟಿಸಿದರು.

ಹಾವೇರಿ: ಎಲ್ಲರಿಗೂ ಸಮಾನ ಅವಕಾಶ ಹಾಗೂ ಸಮಾನ ನ್ಯಾಯ ಒದಗಿಸುವುದು ಸಂವಿಧಾನದ ಆಶಯವಾಗಿದ್ದು, ಎಲ್ಲ ಕಾನೂನುಗಳನ್ನು ಸಂವಿಧಾನದ ಅಡಿಯಲ್ಲಿ ಜಾರಿಗೆ ತರಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿರಾದಾರ ದೇವೀಂದ್ರಪ್ಪ ಎನ್. ಹೇಳಿದರು.

ನಗರದ ಜಿಲ್ಲಾ ಆಸ್ಪತ್ರೆ ಸಭಾಭವನದಲ್ಲಿ ಬುಧವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ವಕೀಲರ ಸಂಘ, ವೈದ್ಯಕೀಯ ವಿಜ್ಞಾನ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಜೀವನದಲ್ಲಿ ನಮ್ಮ ಇಚ್ಛೆಯಂತೆ ಹಾಗೂ ಬೇರೆಯವರಿಗೆ ತೊಂದರೆಯಾಗದಂತೆ ಬದುಕು ನಡೆಸಿದಾಗ ಮಾತ್ರ ಮಾನವ ಹಕ್ಕುಗಳ ರಕ್ಷಣೆ ಮಾಡಿದಂತೆ. ನಮ್ಮ ಸಮಾಜ ವ್ಯವಸ್ಥೆಯಲ್ಲಿ 1851ರಿಂದಲೇ ಕಾನೂನು ಸೇವೆಗಳ ಉಲ್ಲೇಖವಿದೆ. ಎಲ್ಲರಿಗೂ ಕಾನೂನಿನ ತಿಳಿವಳಿಕೆ ಅವಶ್ಯವಾಗಿದೆ ಎಂದು ಹೇಳಿದರು.

ಜಿಲ್ಲಾಸ್ಪತ್ರೆ ನೆಲಮಹಡಿಯಲಿ ಜಿಲ್ಲಾ ಮಾನಸಿಕ ವಿಮರ್ಶೆ ಕೇಂದ್ರ ಆರಂಭಿಸಲಾಗಿದ್ದು, ಈ ಬಗ್ಗೆ ತಿಳಿವಳಿಕೆ ನೀಡಬೇಕು. ಕಾರ್ಯಾಗಾರ ಮಾಡಬೇಕು ಎಂದು ಸಲಹೆ ನೀಡಿದರು.

ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್.ಎಂ. ರಮೇಶ ಮಾತನಾಡಿ, ಈಗ ವಿಭಕ್ತ ಕುಟುಂಬಗಳ ಸಂಖ್ಯೆ ಹೆಚ್ಚಾಗಿವೆ. ಒಂಟಿತನ, ಕೆಲಸದ ಒತ್ತಡ ನಾನಾ ಕರಣಗಳಿಂದ ಖಿನ್ನತೆ ಉಂಟಾಗಿ ಮಾನಸಿಕತೆ ಉಂಟಾಗುತ್ತದೆ. ಮಾನಸಿಕತೆಯನ್ನು ಆರಂಭಿಕ ಹಂತದಲ್ಲಿ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಬಹುದು ಹಾಗೂ ಅವರೊಂದಿಗೆ ಮಾನವೀಯತೆಯಿಂದ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಅವರು ಮಾತನಾಡಿ, ಮಕ್ಕಳು ತಂದೆ-ತಾಯಿಗಳನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಿದ್ದಾರೆ. ಮಕ್ಕಳ ಜೀವನ ರೂಪಿಸಲು ತಮ್ಮ ಬದುಕು ಸವೆಸಿದ ಪಾಲಕರನ್ನು ವೃದ್ಧಾಪ್ಯದಲ್ಲಿ ಚೆನ್ನಾಗಿ ನೋಡಿಕೊಳ್ಳಬೇಕು. ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ. ಪ್ರದೀಪಕುಮಾರ ಎಂ.ವಿ. ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಕಾನೂನು ನೆರವು ಅಭಿರಕ್ಷಣಾ ವಕೀಲರಾದ ಎನ್.ಎನ್. ಡಿಳ್ಳೆಪ್ಪನವರ ರಾಷ್ಟ್ರೀಯ ಕಾನೂನು ಸೇವೆಗಳ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ಆಸ್ಪತ್ರೆ ನೆಲಮಹಡಿಯಲ್ಲಿ ಜಿಲ್ಲಾ ಮಾನಸಿಕ ವಿಮರ್ಶೆ ಕೇಂದ್ರವನ್ನು ನ್ಯಾಯಾಧೀಶರು ಉದ್ಘಾಟಿಸಿದರು.

ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಎಚ್.ವಿ., ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗದೀಶ ಪಾಟೀಲ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಪಿ.ಆರ್. ಹಾವನೂರ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾಧಿಕಾರಿ ಡಾ. ಚನ್ನಬಸಯ್ಯ ವಿರಕ್ತಮಠ, ಮುಖ್ಯ ಕಾನೂನು ನೆರವು ಅಭಿರಕ್ಷಣಾ ವಕೀಲರಾದ ವಿ.ಜಿ. ದೊಡ್ಡಗೌಡರ, ಎಂ.ಚಿ. ಭರಮ್ಮನವರ ಇತರರು ಇದ್ದರು.