ಸಂವಿಧಾನದ ಪ್ರಸ್ತಾವನೆಯು ಭಾರತದ ಆತ್ಮವಾಗಿದೆ. ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಸ್ವಾತಂತ್ರ್ಯ, ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ ಹಾಗೂ ವ್ಯಕ್ತಿಯ ಘನತೆ ಮತ್ತು ರಾಷ್ಟ್ರದ ಏಕತೆ ಮತ್ತು ಸಮಗ್ರತೆಯನ್ನು ಸಾರುವ ಸಹೋದರತ್ವ ನಮ್ಮ ಸಂವಿಧಾನದ ಪ್ರಮುಖ ಆಶಯಗಳಾಗಿವೆ.
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಭಾರತದ ಸಂವಿಧಾನವು ದೇಶದ ಆಡಳಿತ ವ್ಯವಸ್ಥೆಯ ಮೂಲ ಆಧಾರ ಮಾತ್ರವಲ್ಲದೇ, ಪ್ರತಿಯೊಬ್ಬ ನಾಗರಿಕನ ಸ್ವಾತಂತ್ರ್ಯ, ಸಮಾನತೆ, ಘನತೆ ಮತ್ತು ಹಕ್ಕುಗಳನ್ನು ರಕ್ಷಿಸುವ ಪವಿತ್ರ ಕಾನೂನಾಗಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಸುಧೀರ್ ತಿಳಿಸಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನ ಮತ್ತು ಸಂವಿಧಾನ ದಿನದ ಕುರಿತು ಕಾನೂನು ಜಾಗೃತಿ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂವಿಧಾನದ ಪ್ರಸ್ತಾವನೆಯು ಭಾರತದ ಆತ್ಮವಾಗಿದೆ. ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಸ್ವಾತಂತ್ರ್ಯ, ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ ಹಾಗೂ ವ್ಯಕ್ತಿಯ ಘನತೆ ಮತ್ತು ರಾಷ್ಟ್ರದ ಏಕತೆ ಮತ್ತು ಸಮಗ್ರತೆಯನ್ನು ಸಾರುವ ಸಹೋದರತ್ವ ನಮ್ಮ ಸಂವಿಧಾನದ ಪ್ರಮುಖ ಆಶಯಗಳಾಗಿವೆ ಎಂದರು.ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಪ್ರಮುಖ ಸ್ತಂಭವಾಗಿದೆ. ನ್ಯಾಯಾಧೀಶರಾಗಿ ನಮ್ಮ ಜವಾಬ್ದಾರಿ ಕೇವಲ ಪ್ರಕರಣಗಳನ್ನು ವಿಚಾರಣೆ ನಡೆಸಿ ತೀರ್ಪು ನೀಡುವುದಕ್ಕೆ ಸೀಮಿತವಾಗಿಲ್ಲ. ಪ್ರತಿಯೊಬ್ಬ ವ್ಯಕ್ತಿಗೂ ನ್ಯಾಯ ದೊರೆಯುವಂತೆ ಮಾಡುವುದು, ಕಾನೂನಿನ ಆಳ್ವಿಕೆ ಎತ್ತಿಹಿಡಿಯುವುದು ಮತ್ತು ನ್ಯಾಯಾಂಗದ ಮೇಲಿನ ಜನರ ವಿಶ್ವಾಸವನ್ನು ಕಾಪಾಡುವುದು ನಮ್ಮ ಪ್ರಮುಖ ಕರ್ತವ್ಯವಾಗಿದೆ ಎಂದರು.
ವಕೀಲರು ನ್ಯಾಯಾಂಗ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದ್ದಾರೆ. ನ್ಯಾಯಾಧೀಶರು ಮತ್ತು ವಕೀಲರು ಪರಸ್ಪರ ಗೌರವ, ವೃತ್ತಿಪರ ನೈತಿಕತೆ ಹಾಗೂ ಸಂವಿಧಾನಾತ್ಮಕ ಮೌಲ್ಯಗಳೊಂದಿಗೆ ಕಾರ್ಯನಿರ್ವಹಿಸಿದಾಗ ನ್ಯಾಯಾಂಗ ವ್ಯವಸ್ಥೆ ಮತ್ತಷ್ಟು ಬಲಿಷ್ಟವಾಗುತ್ತದೆ ಎಂದು ಅಭಿಪ್ರಾಯಪಟ್ಟರು.ಇಂದಿನ ಯುವಜನತೆ ಸಂವಿಧಾನವನ್ನು ಕೇವಲ ಪರೀಕ್ಷೆಗಾಗಿ ಓದದೆ ಅದರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಕ್ಕುಗಳ ಬಗ್ಗೆ ಜಾಗೃತರಾಗು ಜೊತೆಗೆ ಕರ್ತವ್ಯಗಳನ್ನೂ ಪ್ರಾಮಾಣಿಕವಾಗಿ ಪಾಲಿಸಬೇಕು. ಸಂವಿಧಾನದ ಆಶಯಗಳನ್ನು ನಮ್ಮ ವೃತ್ತಿಯಲ್ಲಿ ಮತ್ತು ವೈಯಕ್ತಿಕ ಜೀವನದಲ್ಲಿ ಅಳವಡಿಸಿಕೊಳ್ಳೋಣ. ನ್ಯಾಯ, ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವದ ಮೌಲ್ಯಗಳ ಆಧಾರದ ಮೇಲೆ ಬಲಿಷ್ಟ ಭಾರತ ನಿರ್ಮಿಸಲು ಸಂಕಲ್ಪ ಮಾಡಲು ಕೈ ಜೋಡಿಸಬೇಕು ಎಂದು ಕರೆ ನೀಡಿದರು.
1ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸಿ.ಸುಷ್ಮಾ ಮಾತನಾಡಿ, ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯದ ಹಕ್ಕನ್ನು ನೀಡಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮತ್ತು ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಸಮಿತಿಗಳು ಮಹತ್ತರ ಜವಾಬ್ದಾರಿಯನ್ನು ನಿರ್ವಹಿಸುತ್ತಿವೆ ಎಂದರು.ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಡಾ.ವಿ.ವಿ.ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕಾನೂನು ಸೇವಾ ಸಮಿತಿ ಪ್ಯಾನಲ್ ವಕೀಲರಾದ ಅರುಣ್ ಕುಮಾರ್, ಡಿ.ಜೇ.ಗಣೇಶ್, ಎಸ್.ಎನ್.ಧನಂಜಯ, ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಎ.ಎನ್.ರಾಜೇಶ್ವರಿ, ಐಕ್ಯೂಐಸಿ ಸಂಯೋಜಕ ಬಿ.ಎಂ.ಉಮೇಶ್, ಪ್ರಾಧ್ಯಾಪಕ ಜಯಕೀರ್ತಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ದೀಪ, ದಿವ್ಯಶ್ರೀ, ಕಲ್ಪನಾ, ಅಭಿಷೇಕ್, ಮೂರ್ತಿ, ರಾಮಚಂದ್ರು, ಚೇತನ್, ಪ್ರದೀಪ, ಕುಮಾರ್, ರಘುಪತಿ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಹಾಜರಿದ್ದರು.