ಸಾರಾಂಶ
ಬಳ್ಳಾರಿ: ಸಮುದಾಯಗಳಲ್ಲಿ ಬಾಲ್ಯ ವಿವಾಹ ಮತ್ತು ದೇವದಾಸಿ ಪದ್ಧತಿ ತಡೆಗಟ್ಟುವಲ್ಲಿ ಸರ್ಕಾರೇತರ ಸಂಘ-ಸಂಸ್ಥೆಗಳು ಮತ್ತು ವಿವಿಧ ಇಲಾಖೆಗಳ ಸಹಕಾರ ಅಗತ್ಯವಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.
ರೀಡ್ಸ್ ಸಂಸ್ಥೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಸಿಎಸಿಎಲ್ ಕರ್ನಾಟಕ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ. ರಾಜ್‍ಕುಮಾರ್ ರಸ್ತೆಯ ಬಿಡಿಎ ಫುಟ್‍ಬಾಲ್ ಮೈದಾನ ವೇದಿಕೆ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಾಲ್ಯವಿವಾಹ ಮತ್ತು ದೇವದಾಸಿ ಪದ್ಧತಿಯ ತಡೆಗಟ್ಟುವಲ್ಲಿನ ಸವಾಲುಗಳು ಮತ್ತು ಪರಿಹಾರ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಸಶಕ್ತ ಭಾರತ ನಿರ್ಮಾಣ ಮಾಡಲು ಕೇಂದ್ರ ಸರ್ಕಾರವು 2030ರ ವೇಳೆಗೆ ಬಾಲ್ಯ ವಿವಾಹ ಮುಕ್ತ ಮಾಡಲು ಪಣ ತೊಟ್ಟಿದೆ. ಅದೇರೀತಿಯಾಗಿ ಸಮುದಾಯ, ಸಂಘಟನೆಗಳು, ಪೋಷಕರು, ಎಲ್ಲ ಸರ್ಕಾರಿ ಇಲಾಖೆಗಳ ಜತೆಗೂಡಿ ರಾಜ್ಯವನ್ನು ಬಾಲ್ಯವಿವಾಹ ಮುಕ್ತ ಮಾಡಲು ಸಮನ್ವಯ ಸಾಧಿಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿದ್ದು, ಇದರ ವಿರುದ್ಧ ಗ್ರಾಪಂ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಮಕ್ಕಳ ಕಾವಲು ಸಮಿತಿಗಳನ್ನು ರಚಿಸಿ ಅನುಷ್ಠಾನ ಮಾಡಬೇಕು. ವಿವಿಧ ಇಲಾಖೆಯಿಂದ ನೇಮಿಸಿದ ಬಾಲ್ಯವಿವಾಹ ನಿಷೇಧಾಧಿಕಾರಿಗಳು ಸಮನ್ವಯ ಸಾಧಿಸಿ ಬಾಲ್ಯವಿವಾಹಗಳನ್ನು ತಡೆಗಟ್ಟುವಲ್ಲಿ ಶ್ರಮವಹಿಸಬೇಕು ಎಂದು ತಿಳಿಸಿದರು.
ಆಡುತ್ತ ತಮ್ಮ ಬಾಲ್ಯವನ್ನು ಅನುಭವಿಸಬೇಕಿದ್ದ ಮಕ್ಕಳು ಬಾಲ್ಯ ವಿವಾಹವೆಂಬ ಸುಳಿಗೆ ಸಿಲುಕುತ್ತಿದ್ದಾರೆ. ಬಾಲ್ಯ ವಿವಾಹದಿಂದ ಮಕ್ಕಳ ಹಕ್ಕುಗಳಿಗೆ ಚ್ಯುತಿ ಬಾರದಂತೆ ತಡೆಯಬೇಕು. ಪೋಷಕರಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆಯ ಬಗ್ಗೆ ಅರಿವು ಮೂಡಿಸಿ ಬಾಲ್ಯ ವಿವಾಹವನ್ನು ತೊಲಗಿಸಬೇಕು ಎಂದು ಸರ್ಕಾರೇತರ ಸಂಘ ಸಂಸ್ಥೆಗಳ ಸ್ವಯಂ ಸೇವಕರಿಗೆ ಕಿವಿಮಾತು ಹೇಳಿದರು.ರಾಜ್ಯದಲ್ಲಿ 28,657 ಪ್ರಕರಣಗಳು ಬಾಲ್ಯವಿವಾಹವಾದ ಗರ್ಭಿಣಿಯರಿದ್ದಾರೆ. ಅದೇ ರೀತಿಯಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 62 ಸಾವಿರ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.
ರೀಡ್ಸ್ ಸಂಸ್ಥೆಯ ಅಧ್ಯಕ್ಷ ಬಿ. ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೀಡ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸಿ. ತಿಪ್ಪೇಶಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯ ಎಚ್.ಸಿ. ರಾಘವೇಂದ್ರ, ವಿಜಯನಗರ ಜಿಲ್ಲೆಯ ಸಖಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ಡಾ. ಭಾಗ್ಯಲಕ್ಷ್ಮೀ, ರೀಡ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸಿ. ತಿಪ್ಪೇಶಪ್ಪ, ಮೈಸೂರು ಆರ್‌ಎಲ್‌ಎಚ್‌ಪಿ ಕಾರ್ಯನಿರ್ವಾಹಕ ನಿರ್ದೇಶಕಿ ಹಾಗೂ ಸಿಎಸಿಎಲ್‍ಕೆ ಸಂಚಾಲಕಿ ಸರಸ್ವತಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿದರು.ಬಳ್ಳಾರಿ ನಗರ ಡಿವೈಎಸ್ಪಿ ಚಂದ್ರಕಾಂತ ನಂದಾರೆಡ್ಡಿ, ಉಚ್ಚ ನ್ಯಾಯಾಲಯದ ಅಡಿಷನಲ್ ಅಡ್ವೋಕೇಟ್ ಜನರಲ್ ಕೇಶವ ರೆಡ್ಡಿ, ಸಿಡಬ್ಲ್ಯೂಸಿ ಅಧ್ಯಕ್ಷೆ ವಿಜಯಲಕ್ಷ್ಮೀ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ನಾಯಕ್ ಎಂ., ಗಾಂಧಿನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸಿದ್ಧರಾಮೇಶ್ವರ, ರೀಡ್ಸ್ ಸಂಸ್ಥೆಯ ಯೋಜನಾ ವ್ಯವಸ್ಥಾಪಕಿ ಕೆ. ಸೀತಾ ಮಹಾಲಕ್ಷ್ಮಿ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ವಿವಿಧ ಎನ್‍ಜಿಒ ಸಂಘ-ಸಂಸ್ಥೆಗಳ ನಿರ್ದೇಶಕರು, ಸ್ವಯಂ ಸೇವಕರು ಹಾಗೂ ರೀಡ್ಸ್ ಸಂಸ್ಥೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.