ಕೊಪ್ಪಳ ನಗರದ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಸಂಯುಕ್ತಾಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ನೂತನ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಉದ್ಘಾಟನಾ ಸಮಾರಂಭ ನಡೆಯಿತು.
ಕೊಪ್ಪಳ: ಶಿಕ್ಷಣ ಮತ್ತು ಸಂಘಟನೆಯಿಂದ ಮಾತ್ರ ವಾಲ್ಮೀಕಿ ಸೇರಿದಂತೆ ಯಾವುದೇ ಶೋಷಿತ ಸಮುದಾಯಗಳ ಸಮಗ್ರ ಏಳಿಗೆ ಸಾಧ್ಯ. ಕೇವಲ ಸಮುದಾಯ ಭವನಗಳ ನಿರ್ಮಾಣದಿಂದ ಅಭಿವೃದ್ಧಿ ಸಾಧ್ಯವಿಲ್ಲ. ಸಮುದಾಯದ ಜನರು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿ, ಸಂಘಟಿತರಾಗಿ ಮುನ್ನಡೆಯುವ ಮೂಲಕ ಸಮಾಜದ ಬಲವರ್ಧನೆಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ನೂತನ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಮಹರ್ಷಿ ವಾಲ್ಮೀಕಿ ಅವರು ಕೇವಲ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತವಾದ ಮಹನೀಯರಲ್ಲ. ಇಡೀ ಮಾನವ ಕುಲಕ್ಕೆ ಮಾರ್ಗದರ್ಶನ ನೀಡಿದ ಮಹಾನ್ ಚೇತನ. ರಾಮಾಯಣದಂತಹ ಶ್ರೇಷ್ಠ ಮಹಾಕಾವ್ಯ ರಚಿಸುವ ಮೂಲಕ ಜಗತ್ತಿಗೆ ಮಾನವೀಯ ಮೌಲ್ಯಗಳನ್ನು ಸಾರಿದ್ದಾರೆ. ಅವರ ಆದರ್ಶ, ಚಿಂತನೆ ಹಾಗೂ ಕೊಡುಗೆಗಳನ್ನು ಇಂದಿನ ಯುವಪೀಳಿಗೆಗೆ ತಲುಪಿಸುವ ಕಾರ್ಯವಾಗಬೇಕು. ಜಯಂತಿಗಳು ಕೇವಲ ಆಚರಣೆಗಳಿಗೆ ಸೀಮಿತವಾಗದೆ ಸಮಾಜದ ಪ್ರಗತಿಗೆ ದಿಕ್ಸೂಚಿಯಾಗಬೇಕು ಎಂದರು.
ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರು ರಾಮಾಯಣದಂತಹ ಶ್ರೇಷ್ಠ ಗ್ರಂಥ ರಚಿಸುವ ಮೂಲಕ ಜಗತ್ತಿಗೆ ಆದರ್ಶ ಮೌಲ್ಯಗಳನ್ನು ನೀಡಿದ್ದಾರೆ. ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳವನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸುವಂತೆ ಒತ್ತಾಯಿಸಲು ಮುಖ್ಯಮಂತ್ರಿ ನೇತೃತ್ವದಲ್ಲಿ ಕೇಂದ್ರ ಸರ್ಕಾರಕ್ಕೆ ನಿಯೋಗ ಕೊಂಡೊಯ್ಯಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.ರಾಜ್ಯದಲ್ಲಿ ಅರ್ಧಕ್ಕೆ ನಿಂತಿರುವ ವಾಲ್ಮೀಕಿ ಭವನಗಳ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಇಲಾಖೆಯಿಂದ ಅಗತ್ಯ ಅನುದಾನ ಮತ್ತು ಸಹಕಾರ ನೀಡಲಾಗುವುದು. ಬಜೆಟ್ನಲ್ಲಿ ನಿಗದಿಪಡಿಸಿದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಎಸ್ಸಿ-ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಹೊಸ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮೀಜಿ ಮಾತನಾಡಿ, ಯಾವುದೇ ಸಮುದಾಯ ಸರ್ವತೋಮುಖ ಅಭಿವೃದ್ಧಿ ಸಾಧಿಸಬೇಕಾದರೆ ಒಬ್ಬ ಗುರು ಮತ್ತು ಒಂದು ಗುರಿ ಇರಬೇಕು. ರಾಜ್ಯದ ವಿವಿಧ ಸಮುದಾಯಗಳು ಸಂಘಟಿತವಾಗುತ್ತಿರುವಂತೆ ವಾಲ್ಮೀಕಿ ಸಮುದಾಯವೂ ಗುರುಪೀಠ ಹಾಗೂ ಸಂಘ-ಸಂಸ್ಥೆಗಳ ಮೂಲಕ ಸಂಘಟಿತವಾಗುತ್ತಿದೆ ಎಂದರು.ಆದಿಕವಿ ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯವು ಒಂದು ಸಮುದಾಯಕ್ಕೆ ಸೀಮಿತವಾಗದೆ ಇಡೀ ಮನುಕುಲಕ್ಕೆ ಮಾರ್ಗದರ್ಶನ ನೀಡುವ ಗ್ರಂಥವಾಗಿದೆ. ರಾಜ್ಯ ಸರ್ಕಾರ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಸಾರ್ವತ್ರಿಕವಾಗಿ ವಾಲ್ಮೀಕಿ ಜಯಂತಿ ಆಚರಿಸುವ ಮೂಲಕ ಮಹಾತ್ಮರಿಗೆ ಗೌರವ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ವಾಲ್ಮೀಕಿ ಸಮುದಾಯ ಭವನ ಉದ್ಘಾಟನೆಯಾಗಿರುವುದು ಜಿಲ್ಲೆಯ ಇತಿಹಾಸದಲ್ಲಿ ಸ್ಮರಣೀಯ ದಿನವಾಗಿದೆ. ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕರಾದ ಸತೀಶ್ ಜಾರಕಿಹೊಳಿ ಅವರು ಜಿಲ್ಲೆಗೆ ಆಗಮಿಸಿ ಭವನ ಉದ್ಘಾಟಿಸಿರುವುದು ಸಂತಸ ತಂದಿದೆ. ರಾಜ್ಯದಲ್ಲಿಯೇ ಮೂರು ವಾಲ್ಮೀಕಿ ಭವನಗಳನ್ನು ಹೊಂದಿರುವ ಏಕೈಕ ಜಿಲ್ಲೆ ಕೊಪ್ಪಳವಾಗಿದೆ ಎಂದರು.ಕೊಪ್ಪಳ ಜಿಲ್ಲೆಗೆ ಪ್ರತ್ಯೇಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಮಂಜೂರು ಮಾಡಬೇಕು. ಗಂಡುಗಲಿ ಕುಮಾರರಾಮ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು. ಭೂ ಒಡೆತನ ಯೋಜನೆಯಡಿ ಪರಿಶಿಷ್ಟ ಪಂಗಡದವರಿಗೆ ಭೂಮಿ ಖರೀದಿಸಲು ಹೆಚ್ಚಿನ ಅನುದಾನ ಒದಗಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ, ಕೊಪ್ಪಳ ಜಿಲ್ಲೆಯ ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಕಲ್ಯಾಣ ಯೋಜನೆಗಳ ಭೌತಿಕ ಗುರಿ ಹಾಗೂ ಅನುದಾನ ಹೆಚ್ಚಿಸಬೇಕು. ತಾಲೂಕು ಮತ್ತು ನಗರ ಪ್ರದೇಶಗಳಲ್ಲಿ ಹೆಚ್ಚುವರಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಬೇಕು. ಎಸ್ಟಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಜಾರಿಗೊಳಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಕಲ್ಯಾಣ ಕರ್ನಾಟಕದ ಹಿಂದುಳಿದ ಜಿಲ್ಲೆಯಾಗಿರುವ ಕೊಪ್ಪಳದಲ್ಲಿ ಪರಿಶಿಷ್ಟ ಪಂಗಡದ ಜನಸಂಖ್ಯೆ ಹೆಚ್ಚಿದೆ. ಹೀಗಾಗಿ ಜನಸಂಖ್ಯೆಗೆ ಅನುಗುಣವಾಗಿ ಯೋಜನೆಗಳ ಗುರಿ ನಿಗದಿಪಡಿಸಬೇಕು. ನಗರದ ಎಲ್ಐಸಿ ಕಚೇರಿ ಮುಂಭಾಗದ ವೃತ್ತಕ್ಕೆ ''ಶ್ರೀ ಮಹರ್ಷಿ ವಾಲ್ಮೀಕಿ ವೃತ್ತ'' ಎಂದು ನಾಮಕರಣ ಮಾಡಿ, ಮೂರ್ತಿ ಪ್ರತಿಷ್ಠಾಪನೆ ಮಾಡಲು ಈ ತಿಂಗಳೊಳಗೆ ಲೋಕೋಪಯೋಗಿ ಇಲಾಖೆಯಿಂದ ಜಾಗವನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಕೆ. ರಾಜಶೇಖರ ಹಿಟ್ನಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಮಾಜಿ ಸಂಸದ ಕರಡಿ ಸಂಗಣ್ಣ, ವಾಲ್ಮೀಕಿ ಸಮುದಾಯದ ಜಿಲ್ಲಾಧ್ಯಕ್ಷ ಕೆ.ಎನ್. ಪಾಟೀಲ, ವಾಲ್ಮೀಕಿ ಸಮಾಜದ ಕೊಪ್ಪಳ ಮಾಜಿ ಜಿಲ್ಲಾಧ್ಯಕ್ಷ ಟಿ. ರತ್ನಾಕರ, ಸಮುದಾಯದ ಧರ್ಮದರ್ಶಿ ರಾಮಣ್ಣ ಕಲ್ಲಣ್ಣವರ, ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್, ಜಿಪಂ ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಯಿಲ್ ಬಾಗ್ಲಾ ಉಪಸ್ಥಿತರಿದ್ದರು.