ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ 23ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆಯಲಿದೆ ಎಂದು ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಕೆ.ಎಸ್.ಮೂರ್ತಿ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 8.30ಕ್ಕೆ ರಾಷ್ಟ್ರ ಧ್ವಜ, ನಾಢ ಧ್ವಜ ಹಾಗೂ ಶರಣ ಸಾಹಿತ್ಯ ಪರಿಷತ್ತು ಧ್ವಜಗಳ ಧ್ವಜಾರೋಹಣ ನಡೆಯಲಿದೆ. ಸಮ್ಮೇಳನದ ಅಂಗವಾಗಿ 23 ರಂದು ಬೆಳಗ್ಗೆ 9 ಗಂಟೆಗೆ ಕುಶಾಲನಗರದ ಗಾಯತ್ರಿ ಕಲ್ಯಾಣ ಮಂಟಪದಿಂದ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ ಸಾಗಲಿದೆ. ವಿವಿಧ ಕಲಾತಂಡಗಳು, ಪೂರ್ಣ ಕುಂಭ ಹೊತ್ತ ಮಹಿಳೆಯರು, ಶರಣರ ವೇಷ ಧರಿಸಿದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಾಜಿ ಯೋಧರು ಸೇರಿದಂತೆ ವಿವಿಧ ಸಮುದಾಯಗಳ ಮಂದಿ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಅಪರ ಜಿಲ್ಲಾಧಿಕಾರಿ ಡಾ.ಸಹನಾ ಹಾದಿಮನಿ ಹಾಗೂ ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ತಹಸೀಲ್ದಾರ್ ಕಿರಣ್ ಗೌರಯ್ಯ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ, ವೃತ್ತ ನಿರೀಕ್ಷಕ ದಿನೇಶ್ ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.
ಬೆಳಗ್ಗೆ 10.30 ಗಂಟೆಗೆ ದೊಡ್ಡವೀರರಾಜೇಂದ್ರ ವೇದಿಕೆಯಲ್ಲಿ ನಡೆಯುವ ಉದ್ಘಾಟನಾ ಸಮಾರಂಭದ ಸಾನಿಧ್ಯವನ್ನು ಸುತ್ತೂರು ಮಠದ 24ನೇ ಜಗದ್ಗುರುಗಳಾದ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ವಹಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸಲಿದ್ದಾರೆ. ವಿರಾಜಪೇಟೆ ತಾಲೂಕಿನ ಅರಮೇರಿ ಕಳಂಚೇರಿ ಮಠದ ಪೀಠಾಧ್ಯಕ್ಷ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ.ಶಾಸಕರು ಮತ್ತು ಸ್ವಾಗತ ಸಮಿತಿ ಅಧ್ಯಕ್ಷ ಡಾ.ಮಂತರಗೌಡ, ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಅಲೂರ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಷ್ಟ್ರಾಧ್ಯಕ್ಷ ಡಾ.ಸಿ.ಸೋಮಶೇಖರ್, ಕಿರಿಕೊಡ್ಲಿಮಠದ ಪೀಠಾಧ್ಯಕ್ಷ ಸದಾಶಿವ ಸ್ವಾಮಿಜಿ ಇತರರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಒಡೆಯರ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ವಿವರಿಸಿದರು.
ಮಧ್ಯಾಹ್ನ 12.45 ರಿಂದ 1.30ರವರೆಗೆ ವಚನ ಸಾಹಿತ್ಯದ ವಿಚಾರಗೋಷ್ಠಿಗಳು, ವಚನ ಗಾಯನಗಳು ನಡೆಯಲಿವೆ. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಸಮ್ಮೇಳನ ಸಮಿತಿ ಗೌರವಾಧ್ಯಕ್ಷ ಹೆಚ್.ವಿ.ಶಿವಪ್ಪ, ಹಣಕಾಸು ಸಮಿತಿ ಅಧ್ಯಕ್ಷ ಶಾಂಬಶಿವಯ್ಯ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಮೋಹನ್ ಹಕ್ಕೆ, ಪ್ರಮುಖರಾದ ವಿಜಯಲಕ್ಷ್ಮಿ ಇದ್ದರು.