ಕ್ಷೇತ್ರದ ಜನತೆಗೆ ಧನ್ಯವಾದ ಅರ್ಪಿಸಿದ ಮಾಜಿ ಶಾಸಕ

| Published : Jun 05 2024, 12:30 AM IST

ಸಾರಾಂಶ

ಮಾಗಡಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರ ಗೆಲುವಿಗೆ ಕಾರಣರಾದ ಎಲ್ಲ ಮತದಾರರಿಗೂ ಮಾಜಿ ಶಾಸಕ ಎ.ಮಂಜುನಾಥ್ ಧನ್ಯವಾದಗಳನ್ನು ಅರ್ಪಿಸಿದರು.

ಮಾಗಡಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರ ಗೆಲುವಿಗೆ ಕಾರಣರಾದ ಎಲ್ಲ ಮತದಾರರಿಗೂ ಮಾಜಿ ಶಾಸಕ ಎ.ಮಂಜುನಾಥ್ ಧನ್ಯವಾದಗಳನ್ನು ಅರ್ಪಿಸಿದರು.

ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಡಾ. ಸಿ.ಎನ್.ಮಂಜುನಾಥ್ ಗೆಲುವು ಸಾಧಿಸಿದ್ದರಿಂದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರು ನಮ್ಮ ಪಾಲಿಗೆ ದೊಡ್ಡ ನಾಯಕರಂತೆ ಪ್ರತಿ ಬೂತ್ ಮಟ್ಟದಲ್ಲಿಯೂ ಕೆಲಸ ಮಾಡಿದ ಪರಿಣಾಮ, ಕ್ಷೇತ್ರದಲ್ಲಿ 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಅಭ್ಯರ್ಥಿ ಡಾ. ಮಂಜುನಾಥ್ ಗೆಲ್ಲಲು ಕಾರಣವಾಯಿತು. ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲು ಬಹಳಷ್ಟು ನೋವು ತಂದಿತ್ತು. ಲೋಕಸಭಾ ಚುನಾವಣೆಯಲ್ಲಿ ಮಾಗಡಿ ವಿಧಾನಸಭಾ ಕ್ಷೇತ್ರದ ಮತದಾರರು 30 ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡುವ ಮೂಲಕ ನನಗೆ ಬೆಂಬಲ ಕೊಟ್ಟಿದ್ದಕ್ಕೆ ನಾನು ಋಣಿಯಾಗಿರುತ್ತೇನೆ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ನೂತನ ಸಂಸದರ ಜೊತೆ ಚರ್ಚೆ ನಡೆಸಿ, ಸಂಪೂರ್ಣ ಸಹಕಾರ ನೀಡಲಾಗುತ್ತದೆ. ಮತದಾರರು ವಿರೋಧಿಗಳ ತೋಳ್ಬಲ, ಹಣ ಬಲ, ಭಾಗ್ಯಗಳಿಗೆ ಮನ್ನಣೆ ನೀಡದೇ ನಿಷ್ಠಾವಂತ ಅಭ್ಯರ್ಥಿಗೆ ಬೆಂಬಲ ನೀಡಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಮೈತ್ರಿಯನ್ನು ಬಳಸಿಕೊಂಡು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಪ್ರಯತ್ನಿಸಲಾಗುತ್ತದೆ ಎಂದು ಎ.ಮಂಜುನಾಥ್ ತಿಳಿಸಿದರು.

ಮಾಜಿ ಸಂಸದ ಡಿ.ಕೆ.ಸುರೇಶ್ ನಮಗೆ ಶಕ್ತಿ, ಸಾಮರ್ಥ್ಯ ಇಲ್ಲವೆಂದುಕೊಂಡಿದ್ದರು. ಅದರ ಪರಿಣಾಮವಾಗಿಯೇ ಇಂದು ಅವರಿಗೆ ದೊಡ್ಡ ಮಟ್ಟದಲ್ಲಿ ಸೋಲಾಗಲು ಕಾರಣವಾಗಿದೆ. ಮಾಗಡಿಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಕಾರ್ಡ್‌ಗಳನ್ನು ಹಂಚಿ ನನ್ನ ಸೋಲಿಗೆ ಕಾರಣರಾಗಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾನು, ಎಂಎಲ್ಸಿ ಸಿ.ಪಿ.ಯೋಗೇಶ್ವರ್, ಶಾಸಕ ಮುನಿರತ್ನರವರು ನಮ್ಮ ಶಕ್ತಿ, ಸಾಮರ್ಥ್ಯವನ್ನು ಡಿ.ಕೆ.ಸುರೇಶ್‌ಗೆ ತೋರಿಸಿ ಕೊಟ್ಟಿದ್ದೇವೆ ಎಂದು ನುಡಿದರು. ಜೆಡಿಎಸ್ ನ ಹಲವು ಮುಖಂಡರು ಭಾಗವಹಿಸಿದ್ದರು. ಫೋಟೊ 4ಮಾಗಡಿ1 :

ಮಾಗಡಿಯ ಜೆಡಿಎಸ್ ಕಚೇರಿಯಲ್ಲಿ ಡಾ.ಸಿ.ಎನ್.ಮಂಜುನಾಥ್ ಗೆಲುವಿನ ಸಂಭ್ರಮವನ್ನು ಶಾಸಕ ಎ.ಮಂಜುನಾಥ್‌ ಸುದ್ದಿಗಾರರೊಂದಿಗೆ ಹಂಚಿಕೊಂಡರು.