ಸಾರಾಂಶ
ಸಿಂಧನೂರಿನ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಸುವರ್ಣ ಸಂಭ್ರಮ-2024 ಕಾರ್ಯಕ್ರಮದಲ್ಲಿ ಸುವರ್ಣ ಸಿಂಧೂರ ವಿಶೇಷ ಸಂಚಿಕೆಯನ್ನು ಶಾಸಕ ಹಂಪನಗೌಡ ಬಾದರ್ಲಿ ಬಿಡುಗಡೆಗೊಳಿಸಿದರು.
ಕನ್ನಡಪ್ರಭ ವಾರ್ತೆ ಸಿಂಧನೂರು
ಇಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯವು ಅತ್ಯಂತ ಹಳೆಯ ಕಟ್ಟಡವಾಗಿದ್ದು, 50 ವರ್ಷಗಳ ಹಿಂದೆ ಇದನ್ನು ಕಟ್ಟಲಾಗಿದೆ. ಈ ಕಟ್ಟಡ ತೆರವುಗೊಳಿಸಿ ಅತ್ಯಾಧುನಿಕ ಸೌಕರ್ಯವುಳ್ಳ ನೂತನ ಕಟ್ಟಡದ ನಿರ್ಮಾಣಕ್ಕೆ ಮುರ್ನಾಲ್ಕು ತಿಂಗಳಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.ಸ್ಥಳೀಯ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಸುವರ್ಣ ಸಂಭ್ರಮ-2024 ಹಾಗೂ ಸುವರ್ಣ ಸಿಂಧೂರ ವಿಶೇಷ ಸಂಚಿಕೆ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಈಗಾಗಲೇ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಲಾಗುವುದು. ಮುಂದಿನ ವಾರದಲ್ಲಿ ಬೆಂಗಳೂರಿನಿಂದ ವಾಸ್ತುಶಿಲ್ಪಿಗಳು ಬಂದು ಕಾಲೇಜು ಕಟ್ಟಡ ಪರಿಶೀಲನೆ ಮಾಡಲಿದ್ದಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ‘ಸುವರ್ಣ ಸಿಂಧೂರ’ ವಿಶೇಷ ಸಂಚಿಕೆ ಅನಾವರಣ ಮಾಡಲಾಯಿತು. ವಿವಿಧ ಕ್ರೀಡೆ, ಸ್ಪರ್ಧಾತ್ಮಕ ಪರೀಕ್ಷೆ, ಕೌಶಲ್ಯಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ ತರಬೇತುದಾರರಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು. ಕೊಪ್ಪಳ ಗವಿಸಿದ್ದೇಶ್ವರ ಪದವಿ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ.ದಯಾನಂದ ಸಾಳುಂಕೆ ವಿಶೇಷ ಉಪನ್ಯಾಸ ನೀಡಿದರು. ಪ್ರಾಂಶುಪಾಲ ಶಿವಯ್ಯ ಎಂ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.