ಕೊಪ್ಪಳ ನಗರದ ವಿವಿಧೆಡೆ ಗುರುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಭೂಮಿಪೂಜೆ ನೆರವೇರಿಸಿದರು. ಬಳಿಕ ಹುಲಿಕೆರೆ ರಸ್ತೆಯ ಮೌಲಾನಾ ಆಜಾದ್ ಶಾಲೆ ಬಳಿ ಜನಸಂಪರ್ಕ ಸಭೆ ನಡೆಸಿದರು.
ಕೊಪ್ಪಳ: ಕೊಪ್ಪಳ ನಗರವನ್ನು ರಾಜ್ಯದಲ್ಲೇ ಮಾದರಿ ನಗರವನ್ನಾಗಿ ರೂಪಿಸುವುದು ತಮ್ಮ ಗುರಿಯಾಗಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಹೇಳಿದರು.
ನಗರದ ವಿವಿಧೆಡೆ ಗುರುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಹಾಗೂ ಲೋಕಾರ್ಪಣೆ ನೆರವೇರಿಸಿ, ಹುಲಿಕೆರೆ ರಸ್ತೆಯ ಮೌಲಾನಾ ಆಜಾದ್ ಶಾಲೆ ಬಳಿ ನಡೆದ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.ನಗರದ 11 ವಾರ್ಡ್‌ಗಳಲ್ಲಿ ನಗರೋತ್ಥಾನ ಯೋಜನೆಯಡಿ ₹9.05 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ಹಾಕಲಾಗಿದೆ. ಸಮುದಾಯ ಭವನ ನಿರ್ಮಾಣಕ್ಕೆ ಸಮೀಕ್ಷೆ ನಡೆಸಿ ಹಂತ ಹಂತವಾಗಿ ಅನುದಾನ ನೀಡಲಾಗುವುದು. ಮೋತಿ ಕೆರೆ ಮತ್ತು ಹಂದಿ ಕೆರೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದ್ದು, ಕೊಪ್ಪಳ ಕೋಟೆ ಸಂರಕ್ಷಣೆಗೂ ಕಾಮಗಾರಿ ಆರಂಭಿಸಲಾಗಿದೆ ಎಂದರು.
ಕೊಪ್ಪಳ–ಭಾಗ್ಯನಗರಕ್ಕೆ 24x7 ಕುಡಿಯುವ ನೀರು ಪೂರೈಸುವ ₹145 ಕೋಟಿ ಯೋಜನೆಯ ಕಾಮಗಾರಿ ಶೇ. 80ರಷ್ಟು ಪೂರ್ಣಗೊಂಡಿದೆ. ಭಾಗ್ಯನಗರದ 7,800 ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲಾಗುತ್ತಿದೆ. ಕೊಪ್ಪಳ ನಗರದಲ್ಲೂ ₹80 ಕೋಟಿ ವೆಚ್ಚದಲ್ಲಿ ಪ್ರತಿ ಮನೆಗೂ ನಲ್ಲಿ ಸಂಪರ್ಕ ಕಲ್ಪಿಸುವ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.ಕೊಪ್ಪಳ ಕ್ಷೇತ್ರದಲ್ಲಿ ಸುಮಾರು ಒಂದು ಲಕ್ಷ ಎಕರೆಗೆ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದೆ. ಬಹದ್ದೂರ್‌ಬಂಡಿ, ಅಳವಂಡಿ–ಬೆಟಗೇರಿ ಹಾಗೂ ಸಿಂಗಟಾಲೂರು ಏತ ನೀರಾವರಿ ಯೋಜನೆಗಳ ಮೂಲಕ ನೀರಾವರಿ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
2013ರಲ್ಲಿ ₹135 ಕೋಟಿ ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ತರಲಾಗಿದ್ದು, ಜಿಲ್ಲಾಸ್ಪತ್ರೆಯನ್ನು 1,000 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಮುನಿರಾಬಾದ್‌ನಲ್ಲಿ ₹150 ಕೋಟಿ ವೆಚ್ಚದ ಕ್ಯಾನ್ಸರ್ ಕೇರ್ ಸೆಂಟರ್ ಘೋಷಣೆಯಾಗಿದ್ದು, ಕೊಪ್ಪಳ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ ಎಂದರು.ಕೊಪ್ಪಳ ಕೋಟೆಯ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ₹1.50 ಕೋಟಿ ಅನುದಾನ ನೀಡಲಾಗಿದೆ. ಇತಿಹಾಸ, ಪರಂಪರೆ ಹಾಗೂ ಸಾಂಸ್ಕೃತಿಕ ಹೆಗ್ಗುರುತುಗಳನ್ನು ಮುಂದಿನ ಪೀಳಿಗೆಗೆ ಉಳಿಸುವುದು ಎಲ್ಲರ ಜವಾಬ್ದಾರಿ ಎಂದರು.
ಮಾಜಿ ಸಂಸದ ಸಂಗಣ್ಣ ಕರಡಿ, ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ್, ಮಾಜಿ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಕಾಟನ್ ಪಾಷಾ ಉಪಸ್ಥಿತರಿದ್ದರು.