ಬೆಲೆ ಏರಿಸಿ ಜನತೆಗೆ ದ್ರೋಹ ಬಗೆದ ಸರ್ಕಾರ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

| Published : Jun 20 2024, 01:02 AM IST

ಬೆಲೆ ಏರಿಸಿ ಜನತೆಗೆ ದ್ರೋಹ ಬಗೆದ ಸರ್ಕಾರ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದರ ವಿರುದ್ಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದರು.

ಕನ್ನಡಪ್ರಭ ವಾರ್ತೆ ಹೊನ್ನಾಳಿ

ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದರ ಪರಿಣಾಮ ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಗೆ ಕಾರಣವಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಿ, ಪಟ್ಟಣದ ಸಂಗೊಳ್ಳಿರಾಯಣ್ಣ ವೃತ್ತದಲ್ಲಿ ರಸ್ತೆತಡೆ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾತನಾಡಿದ ಮಾಜಿ ಸಚಿವ ರೇಣುಕಾಚಾರ್ಯ, ವಿಧಾನಸಭಾ ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಕೇಂದ್ರದಲ್ಲಿ ಮೋದಿ ಸರ್ಕಾರ ಬೇಕಾಬಿಟ್ಟಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಲಾಗಿದೆ ಎಂದು ಖಂಡಿಸಿ ಭಾಷಣ ಮಾಡಿದ್ದರು, ಆದರೇ ಇದೀಗ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್, ಡೀಸೆಲ್ ತೈಲಗಳ ಬೆಲೆ ಏರಿಸುವದರೊಂದಿಗೆ ದಿನ ನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣರಾಗಿದ್ದಾರೆ. ತಕ್ಷಣ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಬೇಕು ಎಂದು ಒತ್ತಾಯ ಮಾಡಿದರು.

ದೇಶದಲ್ಲಿ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ಕಡಿಮೆ ಇದ್ದು, ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳಲ್ಲಿ ಮಾತ್ರ ಇವುಗಳ ಬೆಲೆ ಏರಿಕೆಯಾಗಿದೆ, ಇದನ್ನು ಗಮನಿಸಿದ ಸಿದ್ದರಾಮಯ್ಯ ಸರ್ಕಾರ ನಮ್ಮ ರಾಜ್ಯದಲ್ಲಿಯೂ ಬೆಲೆ ಏರಿಕೆ ಮಾಡಿ ಸಾಮಾನ್ಯ ಜನರಿಗೆ ದ್ರೋಹ ಎಸಗಿದ್ದಾರೆ ಎಂದು ಕಿಡಿ ಕಾರಿದರು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ದಿನದಿಂದ ಆಸ್ತಿ ನೋಂದಾವಣೆ, ವಿದ್ಯುತ್ ಸೇರಿ ಇತರ ಬೆಲೆ ಹೆಚ್ಚಿಸಿದೆ. ಕಳೆದ 8 ತಿಂಗಳಿನಿಂದ ರೈತರಿಗೆ ಹಾಲಿನ ಪ್ರೋತ್ಸಾಹ ಧನ ನೀಡಿರುವುದಿಲ್ಲ, ಹಿಂದಿನ ಬಿಜೆಪಿ ಸರ್ಕಾರ ರೈತರಿಗೆ ನೀಡುತ್ತಿದ್ದ ₹4 ಸಾವಿರ ನಿಲ್ಲಿಸಿದೆ, ಕೆಎಸ್‍ಆರ್‌ಟಿಸಿಯಲ್ಲಿ ಬಸ್ ಕಂಡಕ್ಟರ್‌ಗಳಿಗೆ ಮತ್ತು ಚಾಲಕರಿಗೆ ವೇತನ ನೀಡದ ದುಸ್ಥಿತಿಗೆ ರಾಜ್ಯ ಸರ್ಕಾರ ತಲುಪಿದೆ ಎಂದು ಆರೋಪಿಸಿದರು.

ನರೇಂದ್ರ ಮೋದಿಯವರು 3ನೇ ಬಾರಿಗೆ ಅಧಿಕಾರ ವಹಿಸಿಕೊಂಡ ತಕ್ಷಣ 9 ಕೋಟಿ ರೈತರ ಖಾತೆಗೆ ₹20 ಸಾವಿರ ಕೋಟಿ ಜಮಾ ಮಾಡಿದರು. ಇದು ಕೇಂದ್ರ ಸರ್ಕಾರದ ಸಾಧನೆ ಎಂದ ಅವರು, ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ವಾಲ್ಮೀಕಿ ನಿಗಮದ ₹187 ಕೋಟಿ ಹಗರಣ ಸೇರಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ತಕ್ಷಣ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ಜೆ.ಕೆ.ಸುರೇಶ್, ಇತರೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.