ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರುರಾಜ್ಯ ಸರ್ಕಾರ ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಿಲ್ಲ. ಸರ್ಕಾರಕ್ಕೆ ಯಾವಾಗ ಬುದ್ಧಿ ಬರುತ್ತೋ ಆವಾಗ ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.ಡಾ.ಶಿವಕುಮಾರ ಸ್ವಾಮೀಜಿಗಳ 6ನೇ ಪುಣ್ಯಸ್ಮರಣೆ ಅಂಗವಾಗಿ ಸಿದ್ಧಗಂಗಾ ಮಠದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ವಿಜಯೇಂದ್ರ ಅವರು ಡಾ.ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಈ ವೇಳೆ ನಡೆದ ಸ್ವಾಮೀಜಿಗಳ ಭಾವಚಿತ್ರದ ಮೆರವಣಿಗೆಯಲ್ಲಿ ಪಾಲ್ಗೊಂಡರು. ಶ್ರೀಮಠದ ಸಿದ್ಧಲಿಂಗ ಸ್ವಾಮೀಜಿ ಹಾಗೂ ಶಿವಸಿದ್ದೇಶ್ವರ ಸ್ವಾಮೀಜಿಗಳ ದರ್ಶನ ಮಾಡಿ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಡಾ.ಶಿವಕುಮಾರ ಸ್ವಾಮೀಜಿಗಳು ಶಿವೈಕ್ಯರಾದ ಜನವರಿ ೨೧ರಂದು ಸರ್ಕಾರ ದಾಸೋಹ ದಿನವಾಗಿ ಆಚರಿಸಬೇಕು ಎಂದುಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಘೋಷಣೆ ಮಾಡಿದ್ದರು. ಆದರೆ ಈಗಿರುವ ಕಾಂಗ್ರೆಸ್ ಸರ್ಕಾರ ದಾಸೋಹ ದಿನದ ಆಚರಣೆಗೆ ಆಸಕ್ತಿ ವಹಿಸುತ್ತಿಲ್ಲ. ಸರ್ಕಾರಕ್ಕೆ ಯಾವಾಗ ಬುದ್ಧಿ ಬರುವುದೋ ಆವಾಗ ಅರ್ಥಪೂರ್ಣವಾಗಿ ಆಚರಿಸಲಿ ಎಂದು ಬೇಸರ ವ್ಯಕ್ತಪಡಿಸಿದರು.ತ್ರಿವಿಧ ದಾಸೋಹದ ಮೂಲಕ ಸಮಾಜಕ್ಕೆ ನೆರವಾಗಿದ್ದ ಡಾ.ಶಿವಕುಮಾರ ಸ್ವಾಮೀಜಿಗಳು ಕೋಟ್ಯಂತರ ಬಡ ವಿದ್ಯಾರ್ಥಿಗಳ ಬದುಕಿಗೆ ಬೆಳಕಾಗಿದ್ದಾರೆ. ಕೋಟ್ಯಾಂತರ ಭಕ್ತರನ್ನು ಹರಸಿ ಹಾರೈಸಿದ್ದಾರೆ. ಶ್ರೀಗಳ ಸೇವೆ ಸಮಾಜಕ್ಕೆ ಶ್ರೇಷ್ಠ ಸಂದೇಶವಾಗಿದೆ. ಅವರ ಪುಣ್ಯಸ್ಮರಣೆಯನ್ನು ದಾಸೋಹ ದಿನವಾಗಿ ಆಚರಿಸಿ ಶ್ರೀಗಳ ಸೇವೆಗೆ ಗೌರವ ಸಲ್ಲಿಸಬೇಕು ಎಂದರು. ಶ್ರೀಗಳ ಹುಟ್ಟೂರು ವೀರಾಪುರದಲ್ಲಿ ಪುತ್ಥಳಿ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿದೆ. ಮುಖ್ಯಮಂತ್ರಿಗಳ ಆದಷ್ಟು ಬೇಗ ಪುತ್ಥಳಿ ನಿರ್ಮಾಣ ಕಾರ್ಯ ಮುಗಿಸಲಿ ಎಂದರು. ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ, ಜಿಲ್ಲಾ ಬಿಜೆಪಿಯ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಸೇರಿದಂತೆ ಬಿಜೆಪಿಯ ವಿವಿಧ ಮೋರ್ಚಾಗಳ ಮುಖಂಡರು ಹಾಜರಿದ್ದರು.