ಕನ್ನಡಪ್ರಭ ವಾರ್ತೆ ಬೈಲಹೊಂಗಲ ರಾಜ್ಯ ಸರ್ಕಾರ ರೈತರ ಪರ ನೀತಿ ಅನುಸರಿಸುವಲ್ಲಿ ವಿಫಲವಾಗಿದೆ ಎಂದು ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಟೀಕಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ದರೋಡೆ ಹಾಗೂ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಆದರೆ, ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಟೀಕಿಸಿದರು.

ಕನ್ನಡಪ್ರಭ ವಾರ್ತೆ ಬೈಲಹೊಂಗಲ

ರಾಜ್ಯ ಸರ್ಕಾರ ರೈತರ ಪರ ನೀತಿ ಅನುಸರಿಸುವಲ್ಲಿ ವಿಫಲವಾಗಿದೆ ಎಂದು ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಟೀಕಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ದರೋಡೆ ಹಾಗೂ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಆದರೆ, ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಟೀಕಿಸಿದರು.

ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರಿಗೆ ಭಾರೀ ನಷ್ಟ ಉಂಟಾಗಿರುವುದನ್ನು ಉಲ್ಲೇಖಿಸಿದ ಅವರು, ರೈತರ ಸಮಸ್ಯೆಗಳಿಗೆ ಸರ್ಕಾರ ಯಾವುದೇ ಪ್ರಾಮುಖ್ಯತೆ ನೀಡುತ್ತಿಲ್ಲ. ಮೆಕ್ಕೆಜೋಳಕ್ಕೆ ಖಾತರಿ ಬೆಲೆ ನೀಡುವ ಬದಲು ಸರ್ಕಾರ ಸಣ್ಣ ವಿಷಯಗಳಲ್ಲಿ ಸಮಯ ಕಳೆಯುತ್ತಿದೆ. ರಾಜ್ಯದಲ್ಲಿ ಸುಮಾರು 60 ಲಕ್ಷ ಟನ್ ಮೆಕ್ಕೆಜೋಳ ಉತ್ಪಾದನೆಯಾದರೂ ಖರೀದಿ ಕೇಂದ್ರಗಳನ್ನು ಪ್ರಾರಂಭಿಸದಿರುವುದು ಸರ್ಕಾರದ ನಿರ್ಲಕ್ಷ್ಯ ತೋರುತ್ತದೆ. ಕೇಂದ್ರ ಸರ್ಕಾರ ರೈತರಿಗೆ ₹ 6,000 ಕಿಸಾನ್ ಸಮ್ಮಾನ್ ನಿಧಿ ನೀಡುತ್ತಿದ್ದರೆ, ರಾಜ್ಯ ಸರ್ಕಾರದ ನಿರ್ಧಾರಗಳಿಂದ ರೈತರಿಗೆ ಕನಿಷ್ಠ ₹ 12 ಸಾವಿರ ನಷ್ಟವಾಗುತ್ತಿದೆ ಎಂದು ಆರೋಪಿಸಿದರು.

ವಿಜಯನಗರ, ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ನೀರಾವರಿ ಸಮಸ್ಯೆಯಿಂದ ರೈತರು ಎರಡು ಬೆಳೆ ಬೆಳೆಯಲಾಗದ ಸ್ಥಿತಿ ಎದುರಾಗಿದೆ. ಗೇಟ್‌ ದುರಸ್ತಿ ಮತ್ತು ನೀರಾವರಿ ವ್ಯವಸ್ಥೆಯ ನಿರ್ವಹಣೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಡಿ.9ರಂದು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ಉದ್ಯಮಿ ವಿಜಯ ಮೆಟಗುಡ್ಡ, ಸುಭಾಷ್ ಪಾಟೀಲ, ಎಫ್.ಎಸ್.ಸಿದ್ದನಗೌಡರ, ಗುರುಪಾದ ಕಳ್ಳಿ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.