ವಿಶ್ವವಿದ್ಯಾಲಯದಲ್ಲಿ ಉಂಟಾಗಿರುವ ವಿವಿಧ ಸಮಸ್ಯೆಗಳು ಹಾಗೂ ಆರೋಪಗಳ ಕುರಿತು ಸಮಗ್ರವಾಗಿ ಪರಿಶೀಲಿಸಿ, ತಪ್ಪಿತಸ್ಥರು ಯಾರೇ ಆಗಿದ್ದರೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಜಾನಪದ ಸ್ನಾತಕೋತ್ತರ ಹಾಗೂ ಸಂಶೋಧಕರ ಒಕ್ಕೂಟದ ಅಧ್ಯಕ್ಷ ಡಾ. ಶಿವಸೋಮಣ್ಣ ನಿಟ್ಟೂರು ಆಗ್ರಹಿಸಿದರು.
ಹಾವೇರಿ: ಜಾನಪದ ವಿವಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ವಿಶ್ವವಿದ್ಯಾಲಯದಲ್ಲಿ ಉಂಟಾಗಿರುವ ವಿವಿಧ ಸಮಸ್ಯೆಗಳು ಹಾಗೂ ಆರೋಪಗಳ ಕುರಿತು ಸಮಗ್ರವಾಗಿ ಪರಿಶೀಲಿಸಿ, ತಪ್ಪಿತಸ್ಥರು ಯಾರೇ ಆಗಿದ್ದರೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಜಾನಪದ ಸ್ನಾತಕೋತ್ತರ ಹಾಗೂ ಸಂಶೋಧಕರ ಒಕ್ಕೂಟದ ಅಧ್ಯಕ್ಷ ಡಾ. ಶಿವಸೋಮಣ್ಣ ನಿಟ್ಟೂರು ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಹಿಂದಿನ ಕುಲಪತಿಗಳು ಹಾಗೂ ಅಧಿಕಾರಿಗಳ ಅವಧಿಯಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಸರ್ಕಾರ ಗಮನ ಹರಿಸಬೇಕು. ವಿಶ್ವವಿದ್ಯಾಲಯದ ಹಿತದೃಷ್ಟಿಯಿಂದ ಸಮಸ್ಯೆಗಳನ್ನು ಕಾಲಕಾಲಕ್ಕೆ ಪರಿಶೀಲಿಸಿ, ಅಗತ್ಯ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕು. ಸರ್ಕಾರ ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯ ಮತ್ತಷ್ಟು ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿಗಳು ಹಾಗೂ ಆಡಳಿತಾತ್ಮಕ ಸಮಸ್ಯೆಗಳ ಕುರಿತು ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ವಿಶ್ವವಿದ್ಯಾಲಯದ ಶೈಕ್ಷಣಿಕ ವ್ಯವಸ್ಥೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಿದರು.
ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಾ. ನಾಗರಾಜ ಎಸ್. ಮಾತನಾಡಿ, ಕರ್ನಾಟಕ ಜನಪದ ವಿಶ್ವವಿದ್ಯಾಲಯದಲ್ಲಿ ಆರಂಭಿಸಲಾಗಿದ್ದ ಎಂಟು ವಿಷಯಗಳನ್ನು ರದ್ದುಪಡಿಸುವ ಕುರಿತು ಸಮಿತಿ ರಚಿಸಿರುವ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ. ಕರ್ನಾಟಕ ಜನಪದ ವಿಶ್ವವಿದ್ಯಾಲಯದ ಮೂಲ ಉದ್ದೇಶ ಹಾಗೂ ಮಾನದಂಡಗಳನ್ನು ಗಮನದಲ್ಲಿಟ್ಟುಕೊಂಡು ಶೈಕ್ಷಣಿಕ ವಿಷಯಗಳನ್ನು ರೂಪಿಸಬೇಕು. ಜನಪದ ವೈದ್ಯ, ಜನಪದ ಆರಾಧನೆ, ಜನಪದ ಸಂಸ್ಕೃತಿ, ಜನಪದ ಸಂಗೀತ, ಜನಪದ ಕಲೆ ಸೇರಿದಂತೆ ಜನಪದಕ್ಕೆ ಸಂಬಂಧಿಸಿದ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಆದರೆ, ವಿಶ್ವವಿದ್ಯಾಲಯದ ಮೂಲ ಆಶಯವನ್ನು ಬದಿಗೊತ್ತಿ ಇತರೆ ವಿಷಯಗಳನ್ನು ಆರಂಭಿಸಿರುವುದು ಸೂಕ್ತವಲ್ಲ ಎಂದರು.ಜಾನಪದ ವಿವಿ ಸುತ್ತಮುತ್ತಲಿನಲ್ಲೇ ಎರಡು ವಿವಿಗಳಿವೆ. ಅಲ್ಲಿ ಸಾಮಾನ್ಯ ಹಾಗೂ ಇತರೆ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ವಿಷಯಗಳನ್ನು ಕಲಿಸುವ ಅವಕಾಶವಿದೆ. ಹೀಗಾಗಿ ಜನಪದ ವಿಶ್ವವಿದ್ಯಾಲಯದ ಮೂಲ ಉದ್ದೇಶಕ್ಕೆ ಅನುಗುಣವಾಗಿ ಶಿಕ್ಷಣ ನೀಡುವುದಕ್ಕಿಂತ ಬೇರೆ ವಿಷಯಗಳಿಗೆ ಆದ್ಯತೆ ನೀಡುವುದು ವಿಶ್ವವಿದ್ಯಾಲಯದ ಅಸ್ತಿತ್ವದ ಉದ್ದೇಶವನ್ನೇ ದುರ್ಬಲಗೊಳಿಸುತ್ತದೆ ಎಂದು ಹೇಳಿದರು.
ಹಿಂದಿನ ಅವಧಿಯಲ್ಲಿ ಟಿ.ಎಂ.ಭಾಸ್ಕರ್, ಡಿ.ಬಿ. ನಾಯ್ಕ್, ಸಿ.ಟಿ. ಗುರುಪ್ರಸಾದ್, ಷಹಜಾನ ಮುದಕವಿ ಸೇರಿದಂತೆ ಕೆಲವರು ವಿಶ್ವವಿದ್ಯಾಲಯದ ಮಾನದಂಡಗಳನ್ನು ಕಡೆಗಣಿಸಿ, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಬೇಕು ಹಾಗೂ ಆದಾಯ ಬರಬೇಕು ಎಂಬ ಉದ್ದೇಶದಿಂದ ಅವೈಜ್ಞಾನಿಕವಾಗಿ ಕೆಲವು ವಿಷಯಗಳನ್ನು ಆರಂಭಿಸಿದ್ದಾರೆ ಎಂಬ ಆರೋಪವಿದೆ. ಇದರಿಂದ ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿದಂತಾಗಿದೆ. ವಿಶ್ವವಿದ್ಯಾಲಯದ ಮೂಲ ಉದ್ದೇಶವನ್ನು ಸಂರಕ್ಷಿಸುವುದರ ಜತೆಗೆ ವಿದ್ಯಾರ್ಥಿಗಳ ಹಿತಕ್ಕೂ ಆದ್ಯತೆ ನೀಡಬೇಕು. ಮುಂದಿನ ಪೀಳಿಗೆಗೆ ಗುಣಮಟ್ಟದ ಜನಪದ ಶಿಕ್ಷಣ ದೊರೆಯುವಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಡಾ. ಬಸವರಾಜ ದುಗ್ಗಾಣಿ, ಹೊನ್ನಪ್ಪ ಮಾಳಗಿ, ಗುಡ್ಡಪ್ಪ ಹರಿಜನ, ಗುಡ್ಡಪ್ಪ ಬಣಕಾರ, ಬಸವರಾಜ ಮಾಳಗಿ, ಗುಡ್ಡಪ್ಪ ಮಾಳಗಿ, ನಾಗಪ್ಪ ಸೋಮಣ್ಣನವರ ಇದ್ದರು.