ಇನ್ನೆರಡು ತಿಂಗಳಲ್ಲಿ ಸರ್ಕಾರ ಪತನ

| Published : Sep 05 2024, 12:40 AM IST

ಸಾರಾಂಶ

ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದರಿಂದ ರಾಜ್ಯ ದಿವಾಳಿತನಕ್ಕೆ ಬಂದಿದೆ. ನಮ್ಮ ಸರ್ಕಾರ ಜಾರಿಗೊಳಿಸಿದ್ದ ವಿದ್ಯಾರ್ಥಿ ವೇತನ, ಡೀಸೆಲ್‌ ಸಬ್ಸಿಡಿ ಸೇರಿದಂತೆ ವಿವಿಧ ಯೋಜನೆಗಳಿಗೆ ಕಾಂಗ್ರೆಸ್‌ ಕೊಕ್ಕೆ ಹಾಕಿದೆ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಶಿಗ್ಗಾಂವಿ:

ಇನ್ನೆರೆಡು ತಿಂಗಳಲ್ಲಿ ರಾಜ್ಯ ಸರ್ಕಾರ ಪತನವಾಗಲಿದೆ. ಆ ರೀತಿಯ ರಾಜಕೀಯ ಪರಿಸ್ಥಿತಿ ರಾಜ್ಯದಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯಾವ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿದೆಯೋ ಅಲ್ಲಿನ ಜನರು ಪಶ್ಚಾತ್ತಾಪ ಪಡುತ್ತಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಮತ್ತೆ ಅಧಿಕಾರ ಹಿಡಿಯಲಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿ ಮತ್ತೆ ಅಧಿಕಾರಕ್ಕೆ ಬರಲಿದ್ದು ನರೇಂದ್ರ ಮೋದಿ ನಾಲ್ಕನೇ ಬಾರಿ ಪ್ರಧಾನಿ ಮಂತ್ರಿ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸರ್ಕಾರದ ಬಳಿ ಹಣವಿಲ್ಲ:

ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದರಿಂದ ರಾಜ್ಯ ದಿವಾಳಿತನಕ್ಕೆ ಬಂದಿದೆ. ನಮ್ಮ ಸರ್ಕಾರ ಜಾರಿಗೊಳಿಸಿದ್ದ ವಿದ್ಯಾರ್ಥಿ ವೇತನ, ಡೀಸೆಲ್‌ ಸಬ್ಸಿಡಿ ಸೇರಿದಂತೆ ವಿವಿಧ ಯೋಜನೆಗಳಿಗೆ ಕಾಂಗ್ರೆಸ್‌ ಕೊಕ್ಕೆ ಹಾಕಿದೆ. ಮುಂದಿನ ದಿನಗಳಲ್ಲಿ ಮಾಸಾಶನವನ್ನು ಸರ್ಕಾರ ನಿಲ್ಲಿಸಲಿದೆ ಎಂದು ಬೊಮ್ಮಾಯಿ ಹೇಳಿದರು. ನವೆಂಬರ್ ಉಪ ಚುನಾವಣೆ:

ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್‌ನಲ್ಲಿ ಉಪ ಚುನಾವಣೆ ನಡೆಯಬಹುದು. ಆದರಿಂದ ಕಾರ್ಯಕರ್ತರು ಈ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸುವ ಮೂಲಕ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಗೆಲುವು ಸಾಧಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.

6ರಂದು ಅಭಿಯಾನ:

ರಾಜ್ಯಾದ್ಯಂತ ಸೆ. 6ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಆದರೆ, ಕ್ಷೇತ್ರದಲ್ಲಿ ಅಭಿಯಾನಕ್ಕೆ ಚಾಲನೆ ನೀಡಬೇಕೆಂದು ಕಾರ್ಯಕರ್ತರು ಹಾಗೂ ಮುಖಂಡರ ಒತ್ತಾಯದಿಂದ ಇದೀಗ ಚಾಲನೆ ನೀಡಲಾಗಿದೆ ಎಂದ ಬೊಮ್ಮಾಯಿ, ಬಿಜೆಪಿ ವಿಶ್ವದಲ್ಲಿಯೇ ಅತಿ ಹೆಚ್ಚು ಸದಸ್ಯರನ್ನು ಹೊಂದಿದ ಪಕ್ಷವಾಗಿದೆ. ಕಳೆದ ಬಾರಿ 7 ಕೋಟಿ ಜನರು ಸದಸ್ಯತ್ವ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಈ ವೇಳೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.