ಸಾರಾಂಶ
ಕಾಂಗ್ರೆಸ್ ಸರ್ಕಾರ ಜನಪರವಾಗಿ ಕೆಲಸ ಮಾಡಿಕೊಂಡು ಬಂದಿದೆ. ಜನರ ಕಲ್ಯಾಣಕ್ಕಾಗಿಯೇ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಕಾಂಗ್ರೆಸ್ ಇರೋವರೆಗೂ ಈ ಗ್ಯಾರಂಟಿ ನಿಲ್ಲಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ಕನ್ನಡಪ್ರಭವಾರ್ತೆ ಹೊಸಪೇಟೆ
ಕಾಂಗ್ರೆಸ್ ಸರ್ಕಾರ ಜನಪರವಾಗಿ ಕೆಲಸ ಮಾಡಿಕೊಂಡು ಬಂದಿದೆ. ಜನರ ಕಲ್ಯಾಣಕ್ಕಾಗಿಯೇ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಕಾಂಗ್ರೆಸ್ ಇರೋವರೆಗೂ ಈ ಗ್ಯಾರಂಟಿ ನಿಲ್ಲಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.ನಗರದಲ್ಲಿ ನಡೆದ ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಜನಪರವಾಗಿ ಕೆಲಸ ಮಾಡಿಕೊಂಡು ಬಂದಿದೆ. ಮುಂದೆಯೂ ಜನ ಕಲ್ಯಾಣಕ್ಕಾಗಿ ಶ್ರಮಿಸಲಿದೆ ಎಂದರು.
ಈಗ ಕಂದಾಯ ಇಲಾಖೆಯಿಂದ 6ನೇ ಗ್ಯಾರಂಟಿಯಾಗಿ ‘ಭೂ ಗ್ಯಾರಂಟಿ’ ಯೋಜನೆ ಜಾರಿಗೊಂಡಿದೆ. ವಿರೋಧ ಪಕ್ಷಗಳು ಎಷ್ಟೇ ಟೀಕಿಸಿದರೂ ಸರಿ, ನಾವು ಜನಸೇವಾ ಕಾರ್ಯವನ್ನು ಮುಂದುವರಿಸುತ್ತೇವೆ. ಟೀಕೆಗಳು ಅಳಿಯುತ್ತವೆ. ಆದರೆ, ಕೆಲಸಗಳು ಉಳಿಯುತ್ತವೆ ಎಂಬ ತತ್ವದಲ್ಲಿ ನಮಗೆ ನಂಬಿಕೆಯಿದೆ ಎಂದು ಹೇಳಿದರು.ಕರ್ನಾಟಕ ಅಭಿವೃದ್ಧಿಯ ಪಥದತ್ತ ಮುನ್ನುಗ್ಗುತ್ತಿದೆ. ಪ್ರವಾಸೋದ್ಯಮ ಸೇರಿದಂತೆ ಎಲ್ಲ ಇಲಾಖೆಗಳಿಗೂ ರಾಜ್ಯದ ಪ್ರಗತಿಗೆ ಶ್ರಮವಹಿಸಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದೇವೆ. ಹೊಸ, ಹೊಸ ಯೋಜನೆಗಳ ಮೂಲಕ ಜನರ ಆರ್ಥಿಕ ಶಕ್ತಿಯನ್ನು ಮತ್ತಷ್ಟು ವೃದ್ಧಿಗೊಳಿಸುತ್ತೇವೆ ಎಂದು ಭರವಸೆ ನೀಡಿದರು.
ಕಾಂಗ್ರೆಸ್ ಸರ್ಕಾರದ ನೀತಿಗಳಿಂದಾಗಿಯೇ ಅನೇಕ ಬೃಹತ್ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದಾಗಿವೆ. 10 ಲಕ್ಷ ಕೋಟಿ ಹೂಡಿಕೆಗೆ ಅನೇಕ ಕಂಪನಿಗಳು ಮುಂದೆ ಬಂದಿದ್ದು, ಜನರ ಬದುಕು ಬದಲಾಯಿಸುವ ಕೆಲಸವನ್ನು ನಾವು ಮುಂದುವರಿಸಿಕೊಂಡು ಹೋಗುತ್ತೇವೆ. ರಾಜ್ಯದ ಸಮಗ್ರ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಯಾರು ಎಷ್ಟೇ ಟೀಕೆ ಮಾಡಿದರೂ ಜಗ್ಗದೆ ರಾಜ್ಯದ ಜನರಿಗೆ ಒಳಿತು ಮಾಡುವ ಕೆಲಸಗಳತ್ತ ಮುಖವೊಡ್ಡುತ್ತೇವೆ ಎಂದು ಅವರು ತಿಳಿಸಿದರು.