ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಜಿಲ್ಲೆಯ ವಿವಿಧ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ವಚ್ಛತಾಗಾರರಿಗೆ ಆಯಾ ಸಂಸ್ಥೆಯ ಮುಖ್ಯಸ್ಥರೇ ಗುರುತಿನ ಚೀಟಿಯನ್ನು ನೀಡಬೇಕು. ಇದರಿಂದ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುತ್ತದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ನಗರಸಭೆ, ಪಾಲಿಕೆ ಹೊರತುಪಡಿಸಿ ಸ್ವಚ್ಛತಾಗಾರರಿಗೆ ಬೇರೆಡೆ ಗುರುತಿನ ಚೀಟಿ ನೀಡುತ್ತಿಲ್ಲವೆಂಬ ದೂರುಗಳಿದ್ದು, ಕೆಲಸ ಪಡೆಯುತ್ತಿರುವ ಸಂಸ್ಥೆಗಳು ಸ್ವಚ್ಛತಾ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಶಿಕ್ಷಣ, ಶಾಲಾ ದಾಖಲಾತಿ, ಉದ್ಯೋಗ ಮತ್ತು ಇತರೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಕೌಶಲ್ಯಾಭಿವೃದ್ದಿ ಇಲಾಖೆ ಸಹಯೋಗದೊಂದಿಗೆ ಸಮಾಜ ಕಲ್ಯಾಣ ಇಲಾಖೆಯು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು. ಈ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮುಖ್ಯಸ್ಥರು ತಮ್ಮ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕೆಂದ ಅವರು ಇಂತಹ ಜಾಗೃತಿ ಕಾರ್ಯಕ್ರಮಕ್ಕೆ ಗೈರಾದ ಅಧಿಕಾರಿ/ನೌಕರರಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಿದರು.

ಪೌರ ಕಾರ್ಮಿಕರ ಆರೋಗ್ಯದ ಬಗ್ಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಬೇಕು. ವೇತನ ಖಾತೆಗಳಿಗೆ ಅಪಘಾತ ವಿಮೆ ಕವರ್ ಆಗುವ ಪಿಎಂಜೆಜೆಬಿವೈ ಮತ್ತು ಪಿಎಂ ಎಸ್‌ಬಿವೈ ಪಾಲಿಸಿಗಳನ್ನು ಕಡ್ಡಾಯವಾಗಿ ಮಾಡಿಸಬೇಕು. ಹಾಗೂ ಹೊರ ಗುತ್ತಿಗೆ ನೌಕರರಿಗೆ 20 ಲಕ್ಷ ರು. ವರೆಗೆ ಅಪಘಾತ ವಿಮೆ ಮೊತ್ತ ಬರುವಂತಹ, ವಾರ್ಷಿಕವಾಗಿ 1000 ಕಟ್ಟುವ ವಿಮೆಯನ್ನು ಮಾಡಿಸುವಂತೆ ತಿಳಿಸಿದರು.


ಖಾಸಗಿ ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ಗುತ್ತಿಗೆದಾರರು ಹೆಚ್ಚಿನ ಕಾರ್ಮಿಕರನ್ನು ನೇಮಿಸಿಕೊಂಡು ಕಡಿಮೆ ಕಾರ್ಮಿಕರಿಂದ ಹೆಚ್ಚಿನ ಕೆಲಸವನ್ನು ತೆಗೆದುಕೊಳ್ಳುತ್ತಿರುವ ಬಗ್ಗೆ ನಾಮ ನಿರ್ದೇಶಿತ ಸದಸ್ಯರು ಗಮನಕ್ಕೆ ತಂದಿದ್ದು, ಈ ರೀತಿ ಆಗದಂತೆ ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ನೇರಪಾವತಿ ಮತ್ತು ನೇರ ನೇಮಕಾತಿ ಪ್ರಕ್ರಿಯೆಯನ್ನು ಇನ್ನೊಂದೆರಡು ತಿಂಗಳಲ್ಲಿ ಪೂರ್ಣಗೊಳಿಸಬೇಕು. 8 ಗಂಟೆ ಕೆಲಸ ಮಾಡುವ ಕಾರ್ಮಿಕರಿಗೆ ಕನಿಷ್ಟ ಪಾವತಿಯನ್ನು ಮಾಡುವಂತೆ ಹಾಗೂ ಪರಿಷ್ಕೃತ ವೇತನವನ್ನು ಕಾರ್ಮಿಕರಿಗೆ ನೀಡುವಂತೆ ಸೂಚಿಸಿದರು.

ಮೆಗ್ಗಾನ್ ಆಸ್ಪತ್ರೆಯಲ್ಲಿ ಆರೋಗ್ಯ ಸಮಸ್ಯೆಯ ಕಾರಣಕ್ಕೆ ದೀರ್ಘ ರಜೆ ತೆಗೆದುಕೊಂಡವರು ಮತ್ತಿತರೆ ಕಾರಣಕ್ಕೆ ಕಾರ್ಮಿಕರನ್ನು ಕೆಲಸಕ್ಕೆ ತೆಗೆದು ಬೇರೆಯವರನ್ನು ನೇಮಿಸುವ ಬಗ್ಗೆ ಸದಸ್ಯರು ಗಮನಕ್ಕೆ ತಂದಿದ್ದು, ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಖುದ್ದು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಕೆಲಸದಿಂದ ತೆಗೆದುಹಾಕಿದವರ ವರದಿ ನೀಡುವಂತೆ ಸೂಚಿಸಿದರು.

ಅಧಿಕಾರಿಗಳಿಗೆ ಸೂಚನೆ: ಸಫಾಯಿ ಕರ್ಮಚಾರಿಗಳ ಜೀವನಮಟ್ಟ ಸುಧಾರಣೆಗೆ ಮತ್ತು ಅವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್, ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಿ.ಮಲ್ಲೇಶಪ್ಪ ಜಿಲ್ಲಾ ಮಟ್ಟದ ಅಧಿಕಾರಿಗಳು, ನಾಮನಿರ್ದೇಶಿತ ಸದಸ್ಯರಾದ ಚಿನ್ನಯ್ಯ, ಭಾನುಪ್ರಕಾಶ್ ಹಾಜರಿದ್ದರು.