ಹಾವೇರಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ 12 ವರ್ಷಗಳಲ್ಲಿ ಭಾರತ ದೇಶದ ಚಿತ್ರಣವೇ ಬದಲಾಗಿದೆ. ಜನತೆಯ ಅಚಲ ವಿಶ್ವಾಸ ಮತ್ತು ಸರ್ಕಾರದ ಸೇವಾ ಮನೋಭಾವನೆಯೇ ಈ ಸಾಧನೆಯ ದೊಡ್ಡ ಶಕ್ತಿ ಎಂದು ವಿಧಾನಪರಿಷತ್ ಸದಸ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ ಹೇಳಿದರು.ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತತ ಮೂರನೇ ಬಾರಿಗೆ ದೇಶದ ಜನತೆ ಮೋದಿ ಅವರನ್ನು ಆಯ್ಕೆ ಮಾಡಿದರು. ಒಂದು ಕಾಲದಲ್ಲಿ ಭಾರತದ ಪ್ರಧಾನಮಂತ್ರಿ ವಿದೇಶಗಳಿಗೆ ಹೋದರೆ ಸಾಲ ಕೇಳಲು ಹೋಗಿದ್ದಾರೆ ಎಂದು ಟೀಕಿಸಲಾಗುತ್ತಿತ್ತು. ಆದರೆ ಇಂದು ಭಾರತವು ವಿಶ್ವದ ಎಲ್ಲ ಪ್ರಮುಖ ರಾಷ್ಟ್ರಗಳ ಗೌರವ ಮತ್ತು ಮಾನ್ಯತೆ ಪಡೆದ ದೇಶವಾಗಿ ಬೆಳೆದಿದೆ. ಹಿಂದೆ ಆಮದು ಆಧಾರಿತ ಆರ್ಥಿಕತೆಯಾಗಿ ಗುರುತಿಸಿಕೊಂಡಿದ್ದ ಭಾರತ, ಈಗ ರಫ್ತು ಆಧಾರಿತ ರಾಷ್ಟ್ರವಾಗಿ ರೂಪುಗೊಂಡಿದೆ. ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಚಂದ್ರಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಸಾಧನೆ ಮಾಡಿದೆ. ಪ್ರಸ್ತುತ ಭಾರತವು 190 ದೇಶಗಳಿಗೆ 7,500ಕ್ಕೂ ಹೆಚ್ಚು ಸರಕುಗಳನ್ನು ರಫ್ತು ಮಾಡುತ್ತಿದೆ ಎಂದು ತಿಳಿಸಿದರು.ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ವಿಶೇಷ ಒತ್ತು ನೀಡಿದ್ದು, ಮೈಸೂರು-ಬೆಂಗಳೂರು ಎಕ್ಸಪ್ರೆಸ್‌ವೇ ಸೇರಿದಂತೆ ಹಲವು ಮೂಲಸೌಕರ್ಯ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕರ್ನಾಟಕಕ್ಕೆ ಕೇಂದ್ರದಿಂದ ದೊರೆಯುವ ತೆರಿಗೆ ಪಾಲು ಯುಪಿಎ ಅವಧಿಯಲ್ಲಿ ₹81,794 ಕೋಟಿಯಾಗಿದ್ದರೆ, ಮೋದಿ ಸರ್ಕಾರದ ಅವಧಿಯಲ್ಲಿ 2,96,730 ಕೋಟಿಗೆ ಏರಿಕೆಯಾಗಿದ್ದು, ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂಬ ಆರೋಪ ಆಧಾರರಹಿತ ಎಂದು ಹೇಳಿದರು. ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ದೊರೆತಿದೆ. ರಾಜ್ಯದಲ್ಲಿ 610 ಜನೌಷಧ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, 1.90 ಕೋಟಿ ಜನರಿಗೆ ಆಯುಷ್ಮಾನ್ ಭಾರತ್ ಕಾರ್ಡ್ ವಿತರಿಸಲಾಗಿದೆ. ರಾಜ್ಯದ 4.20 ಕೋಟಿ ಜನರಿಗೆ ಕೇಂದ್ರ ಸರ್ಕಾರ ಆಹಾರ ಧಾನ್ಯ ವಿತರಿಸುತ್ತಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 40 ಲಕ್ಷ ರೈತರು ಪ್ರಯೋಜನ ಪಡೆದಿದ್ದಾರೆ. ಜಲ್ ಜೀವನ್ ಮಿಷನ್ ಅಡಿಯಲ್ಲಿ 87 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ ಎಂದು ತಿಳಿಸಿದರು.ರಾಜ್ಯದಲ್ಲಿ 2.12 ಕೋಟಿ ಜನಧನ್ ಖಾತೆಗಳು ತೆರೆಯಲ್ಪಟ್ಟಿದ್ದು, ಡಿಜಿಟಲ್ ಇಂಡಿಯಾ ಯೋಜನೆಯಡಿ 302 ಲಕ್ಷ ಕೋಟಿ ಮೌಲ್ಯದ ವಹಿವಾಟು ನಡೆದಿದೆ. ಕಳೆದ 12 ವರ್ಷಗಳಲ್ಲಿ 25 ಕೋಟಿಗೂ ಹೆಚ್ಚು ಜನರು ಬಡತನ ರೇಖೆಯಿಂದ ಹೊರಬಂದಿದ್ದಾರೆ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ, ಮಾಜಿ ಶಾಸಕ ಶಿವರಾಜ ಸಜ್ಜನರ, ಗವಿಸಿದ್ದಪ್ಪ ದ್ಯಾಮಣ್ಣವರ, ಭೋಜರಾಜ ಕರೂದಿ, ನೀಲಪ್ಪ ಚಾವಡಿ, ನಿರಂಜನ ಹೇರೂರ, ನಂಜುಂಡೇಶ ಕಳ್ಳೇರ, ವಿಜಯಕುಮಾರ ಚಿನ್ನಿಕಟ್ಟಿ, ಕರಬಸಪ್ಪ ಹಳದೂರ ಇದ್ದರು. ಧರ್ಮಸ್ಥಳ ಪ್ರಕರಣ: ಆರೋಪ ಸಾಬೀತಾದರೆ ಕ್ರಮ, ಇಲ್ಲದಿದ್ದರೆ ಹೋರಾಟಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಅವರು ಹೈಕೋರ್ಟ್ ಎದುರು ಎಲ್ಲ ಸತ್ಯಾಂಶಗಳನ್ನು ಬಿಚ್ಚಿಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ ತಿಳಿಸಿದ್ದಾರೆ.ಈ ಕುರಿತು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಕಾಶ್ ರಾಜ್ ಸೇರಿದಂತೆ ಯಾರೇ ಆಗಿದ್ದರೂ ಆರೋಪಗಳು ಸಾಬೀತಾದರೆ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯ ಹೊರಬರಬೇಕು ಎಂದು ಅವರು ಆಗ್ರಹಿಸಿದರು.
ಮೋದಿ ಪ್ರಧಾನಿಯಾದ ಮೇಲೆ ಭಾರತದ ಚಿತ್ರಣವೇ ಬದಲು
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ 12 ವರ್ಷಗಳಲ್ಲಿ ಭಾರತ ದೇಶದ ಚಿತ್ರಣವೇ ಬದಲಾಗಿದೆ. ಜನತೆಯ ಅಚಲ ವಿಶ್ವಾಸ ಮತ್ತು ಸರ್ಕಾರದ ಸೇವಾ ಮನೋಭಾವನೆಯೇ ಈ ಸಾಧನೆಯ ದೊಡ್ಡ ಶಕ್ತಿ ಎಂದು ವಿಧಾನಪರಿಷತ್ ಸದಸ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ ಹೇಳಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.