ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆ ಹಣ ಪಾವತಿ, ಉಚಿತ ಬಸ್ ಪ್ರಯಾಣ, ಉಚಿತ ವಿದ್ಯುತ್, ಅನ್ನಭಾಗ್ಯ, ಯುವನಿಧಿ ಯೋಜನೆಗಳ ಅನುಕೂಲತೆಯನ್ನು ಜನರಿಗೆ ತಿಳಿಸಬೇಕಿದೆ ಎಂದು ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಹೇಳಿದರು.
ಹಾವೇರಿ: ರಾಜ್ಯದಲ್ಲಿ ಜಾರಿಯಾಗಿರುವ ಹಾಗೂ ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ ಯೋಜನೆಗಳಿಂದ ದೇಶದ ಚಿತ್ರಣವೇ ಬದಲಾಗಲಿದೆ. ಭಾರತೀಯ ಆಹಾರ ನಿಗಮದ ದಾಸ್ತಾನಿನಲ್ಲಿ ಅಕ್ಕಿ ಇದ್ದರೂ ಕೊಡದ, ಗ್ಯಾರಂಟಿ ಯೋಜನೆ ಬಗ್ಗೆ ಅಪಸ್ವರ ಎತ್ತುವ ಬಿಜೆಪಿ ಸರ್ಕಾರದ ವಿರುದ್ಧ ಹೋರಾಡಬೇಕಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಹೇಳಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದರು.ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆ ಹಣ ಪಾವತಿ, ಉಚಿತ ಬಸ್ ಪ್ರಯಾಣ, ಉಚಿತ ವಿದ್ಯುತ್, ಅನ್ನಭಾಗ್ಯ, ಯುವನಿಧಿ ಯೋಜನೆಗಳ ಅನುಕೂಲತೆಯನ್ನು ಜನರಿಗೆ ತಿಳಿಸಬೇಕಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಜಾರಿಗೊಳಿಸುವ ಗ್ಯಾರಂಟಿ ಯೋಜನೆಯ ಕಾರ್ಡ್‌ಗಳನ್ನು ಮನೆ ಮನೆಗೆ ತಲುಪಿಸಿದರೆ ಆನಂದಸ್ವಾಮಿ ಗಡ್ಡದೇವರಮಠ ಗೆಲುವು ಸಾಧಿಸುವುದರಲ್ಲಿ ಯಾವುದೇ ಸಂದೇಹವಿಲ್ಲ. ಜೊತೆಗೆ ಪ್ರಧಾನಿ ಮೋದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಈಗ ತಾವೇ ಮೋದಿ ಗ್ಯಾರಂಟಿ ಎಂದು ಜನರ ಬಳಿ ಮತಯಾಚಿಸುತ್ತಿದ್ದಾರೆ ಎಂದು ಕುಟುಕಿದರು.
ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಮಾತನಾಡಿ, ದ್ವೇಷದ ರಾಜಕಾರಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಬೇಸತ್ತ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿನ ಮತದಾರರು ಪ್ರತಿ ವಿಧಾನಸಭಾ ವ್ಯಾಪ್ತಿಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಆನಂದಸ್ವಾಮಿ ಗಡ್ಡದೇವರಮಠ ಅವರನ್ನು ಗೆಲ್ಲಿಸುವ ವಿಶ್ವಾಸವಿದೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಕಾರ್ಡ್ ಪ್ರತಿ ಮನೆ ಮನೆ ತಲುಪಲು ಶ್ರಮಿಸಬೇಕಿದೆ ಎಂದರು.ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ ಕುಲಕರ್ಣಿ ಮಾತನಾಡಿ, ದೇಶದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಎದುರಾಳಿಗಳನ್ನು ಜಾರಿ ನಿರ್ದೇಶನಾಲಯ, ಸಿಬಿಐ ಸ್ವತಂತ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದರು.
ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಮಾತನಾಡಿದರು. ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ, ಮಾಜಿ ಸಂಸದ ಐ.ಜಿ. ಸನದಿ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ಶಾಸಕರಾದ ಜಿ.ಎಸ್. ಪಾಟೀಲ, ಯು.ಬಿ. ಬಣಕಾರ, ಶ್ರೀನಿವಾಸ ಮಾನೆ, ಪ್ರಕಾಶ ಕೋಳಿವಾಡ, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ರಾಮಣ್ಣ ಲಮಾಣಿ, ಬಿ.ಎಚ್. ಬನ್ನಿಕೋಡ, ರಾಮಕೃಷ್ಣ ದೊಡ್ಡಮನಿ, ರಾಜ್ಯ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಪ್ರಕಾಶಗೌಡ ಪಾಟೀಲ ಇತರರು ಇದ್ದರು.