ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ವಿವಿಧ ಯೋಜನೆಯಡಿ ಉಚಿತ ಸೌಲಭ್ಯ ಪಡೆಯುವಲ್ಲಿ ತೋರಿದ ಆಸಕ್ತಿ, ಸರ್ಕಾರಿ ಶಾಲೆಗಳಲ್ಲಿ ದೊರೆಯುವ ಉಚಿತ ಶಿಕ್ಷಣ ಪಡೆಯುವಲ್ಲೂ ಇರಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.ರಾಜ್ಯ ಮಕ್ಕಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಮಕ್ಕಳ ಹಕ್ಕುಗಳು ಹಾಗೂ ಆರ್‌ಟಿಇ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಅಧಿನಿಯಮ (ಪೋಕ್ಸೋ)-2012 ಕುರಿತು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ 28 ಸಾವಿರ ಬಾಲ ತಾಯಂದಿರು ಇರುವುದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಬಾಲ್ಯ ವಿವಾಹ ತಡೆಗಟ್ಟಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಸೇರಿ ವಿವಿಧ ಇಲಾಖೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಕರ್ತವ್ಯಲೋಪ ಸಹಿಸುವದಿಲ್ಲ ಎಂದು ಎಚ್ಚರಿಸಿದರು.ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದ್ಯಾವಪ್ಪ ಎಸ್. ಬಿ. ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ದೊರೆತರೆ ದೇಶದ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ. ಮಕ್ಕಳು ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿದರೆ ಮುಂದೆ ದೇಶಕ್ಕೆ ಕಂಟಕವಾಗುವ ಸಾಧ್ಯತೆ ಇದೆ. ಪಾಲಕರಿಗೆ ಬಾಲ್ಯ ವಿವಾಹ ಮಾಡದಂತೆ, ಮಕ್ಕಳಿಗೆ ಶಿಕ್ಷಣ ಕೊಡಿಸುವ ಕುರಿತು ಜಾಗೃತಿ ಮೂಡಿಸುವುದು, ಸಮಾಲೋಚನೆ ಕರ್ತವ್ಯಗಳನ್ನು ನಿರ್ವಹಿಸಬೇಕು, ಇಂದಿನ ಮಕ್ಕಳು ಮುಂದಿನ ಪ್ರಜೆಗಳು ಉತ್ತಮ ಪ್ರಜೆಗಳ ನಿರ್ಮಾಣ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ, ಪೊಲೀಸ್ ಇಲಾಖೆ ಸೇರಿ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗೆ ಮಕ್ಕಳ ಹಕ್ಕುಗಳ ಕಾಯ್ದೆಗಳ ಬಗ್ಗೆ ಸಂಪೂರ್ಣ ಜ್ಞಾನ ಇಲ್ಲದಿರುವುದು ವಿಷಾಧನೀಯ. ಘಟನೋತ್ತರವಾಗಿ ಕಾರ್ಯನಿರ್ವಹಿಸುವುದಕ್ಕಿಂತ ಸಮಾಜ ಘಾತುಕ ಘಟನೆಗಳು ನಡೆಯದಂತೆ, ಸಮಾಜಕ್ಕೆ ನಮ್ಮದೂ ಒಂದು ಕೊಡುಗೆ ಇರಲಿ ಎಂಬ ಭಾವನೆಯೊಂದಿಗೆ ಕಾರ್ಯನಿರ್ವಹಿಸಬೇಕು. ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಅತ್ಯಗತ್ಯವಾಗಿದೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಶಶಿಧರ ಕುರೇರ್ ಮಾತನಾಡಿ, ಮಕ್ಕಳ ಸ್ನೇಹಿಯಾಗಿ ಕೆಲಸ ಮಾಡಲು ಮಕ್ಕಳ ಗ್ರಾಮ ಸಭೆಗಳು ಸಹಕಾರಿಯಾಗಿವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸರಿಯಾಗಿ ಗ್ರಾಮಸಭೆ ನಡೆಸಿ ಸಲಹೆ ಸೂಚನೆ ಪಡೆಯುವ ಮತ್ತು ನೀಡುವ ಕಾರ್ಯ ಮಾಡಬೇಕು. ಜವಾಬ್ದಾರಿ ಅರಿತು ಸರ್ಕಾರ ಮಕ್ಕಳ ಲಾಲನೆ ಪಾಲನೆಗೆ ನೀಡಿರುವ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದರು.
ಕಾರ್ಯಗಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಅಮರೇಶ ಎಚ್. ಸ್ವಾಗತಿಸಿದರು. ಸಖಿ ಸೆಂಟರ್‌ನ ಶಂಕರಮ್ಮ ಜಮ್ಮನಕಟ್ಟಿ ನಿರೂಪಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಪೊಲೀಸ್ ತರಬೇತುದಾರ ರೋಹಿತ ಸಿ.ಜೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೀಣಾ ಎಂ, ಇದ್ದರು.