ಪಕ್ಷಕ್ಕಾಗಿ ಯಾರು ದುಡಿದಿದ್ದಾರೆ, ಯಾರಿಗೆ ಯಾವ ಜವಾಬ್ದಾರಿ ನೀಡಬೇಕು ಎಂಬುದನ್ನು ಕೆಪಿಸಿಸಿ ಅಧ್ಯಕ್ಷರು ನಿರ್ಧರಿಸಲಿದ್ದಾರೆ. ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ಕಲೀಲುಲ್ಲಾ ಹೇಳಿದ್ದಾರೆ.

- ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸಿ: ಜಿಲ್ಲಾ ಅಧ್ಯಕ್ಷ ಇಬ್ರಾಹಿಂ ಹೇಳಿಕೆ ।

- ಜಗಳೂರಿನಲ್ಲಿ ಕಾಂಗ್ರೆಸ್‌ನಿಂದ ಸಂಘಟನ್ ಸೃಜನ್ ಅಭಿಯಾನ-2 ಕಾರ್ಯಕ್ರಮ

- - -

ಕನ್ನಡಪ್ರಭ ವಾರ್ತೆ ಜಗಳೂರು

ಪಕ್ಷಕ್ಕಾಗಿ ಯಾರು ದುಡಿದಿದ್ದಾರೆ, ಯಾರಿಗೆ ಯಾವ ಜವಾಬ್ದಾರಿ ನೀಡಬೇಕು ಎಂಬುದನ್ನು ಕೆಪಿಸಿಸಿ ಅಧ್ಯಕ್ಷರು ನಿರ್ಧರಿಸಲಿದ್ದಾರೆ. ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ಕಲೀಲುಲ್ಲಾ ಹೇಳಿದರು.

ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಪಕ್ಷದ ‘ಸಂಘಟನ್ ಸೃಜನ್ ಅಭಿಯಾನ-2’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಆಗ್ನೇಯ ಪದವೀಧರ ಕ್ಷೇತ್ರದ ಸೋಲಿನ ಬಳಿಕ ಜಗಳೂರಿನಲ್ಲಿ ನಡೆದ ಈ ಅಭಿಯಾನ ಕಾಂಗ್ರೆಸ್‌ಗೆ ಸಂಘಟನಾ ಬಲ ಹೆಚ್ಚಿಸಿಕೊಳ್ಳುವ ವೇದಿಕೆಯಾಗಿದೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಚುನಾವಣೆಗಳಲ್ಲಿ ಒಗ್ಗಟ್ಟು, ಸಮರ್ಥ ನಾಯಕತ್ವ ಮತ್ತು ಕಾರ್ಯಕರ್ತರ ಪರಿಶ್ರಮ ಪಕ್ಷದ ಮುಂದಿನ ರಾಜಕೀಯ ಹೆಜ್ಜೆಗಳನ್ನು ನಿರ್ಧರಿಸಲಿದೆ ಎಂದರು.

ಶಾಸಕ ಬಿ.ದೇವೇಂದ್ರಪ್ಪ ಕಾರ್ಯಕ್ರಮ ಉದ್ಘಾಟಿಸಿ, ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಎದುರಾದ ಸೋಲನ್ನು ಆತ್ಮಾವಲೋಕನದ ಅವಕಾಶವಾಗಿ ಸ್ವೀಕರಿಸಿ, ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಚುನಾವಣೆಗಳಲ್ಲಿ ಒಗ್ಗಟ್ಟಿನ ಶಕ್ತಿಯಿಂದ ಗೆಲುವು ಸಾಧಿಸಲು ಕಾಂಗ್ರೆಸ್ ಸಜ್ಜಾಗಬೇಕಿದೆ. ವೈಯಕ್ತಿಕ ಆಕಾಂಕ್ಷೆ, ಗುಂಪುಗಾರಿಕೆ ಮತ್ತು ಆಂತರಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ತಳಮಟ್ಟದಿಂದ ಪಕ್ಷವನ್ನು ಬಲಪಡಿಸುವಂತೆ ಕಾರ್ಯಕರ್ತರಿಗೆ ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯಮಟ್ಟದ ವೀಕ್ಷಕರು ಹಾಗೂ ಉಸ್ತುವಾರಿಗಳು ಅರ್ಜಿಗಳನ್ನು ಸ್ವೀಕರಿಸುತ್ತಿದ್ದು, ಕಾರ್ಯಕರ್ತರು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ತಿಳಿಸಬೇಕು. ಈ ಪ್ರಕ್ರಿಯೆಯಲ್ಲಿ ಅನಗತ್ಯ ಗೊಂದಲ ಸೃಷ್ಟಿಸದೇ ಅರ್ಹರ ಹೆಸರುಗಳನ್ನು ಶಿಫಾರಸು ಮಾಡಬೇಕು. ಸೂಕ್ತ ಅಭ್ಯರ್ಥಿಗಳ ಆಯ್ಕೆ ಕೆಪಿಸಿಸಿ ಮಟ್ಟದಲ್ಲಿ ನಡೆಯಲಿದ್ದು, ಪಕ್ಷದ ಸಂಘಟನಾ ಹಿತಾಸಕ್ತಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಶಿವಮೊಗ್ಗದಿಂದ ಆಗಮಿಸಿದ್ದ ವೀಕ್ಷಕಿ ಅನಿತಾಕುಮಾರಿ ಮಾತನಾಡಿ, ‘ಹಳೆ ಬೇರು, ಹೊಸ ಚಿಗುರು’ ಎಂಬಂತೆ ಅನುಭವಿಗಳ ಮಾರ್ಗದರ್ಶನದಲ್ಲಿ ಹೊಸಬರಿಗೆ ಪಕ್ಷದ ಚುಕ್ಕಾಣಿ ಹಿಡಿಯಲು ಅವಕಾಶ ಕಲ್ಪಿಸಬೇಕು. ಪಕ್ಷದಲ್ಲಿ ಸ್ಥಾನ ಪಡೆಯುವುದು ಮಾತ್ರ ಮುಖ್ಯವಲ್ಲ; ಜವಾಬ್ದಾರಿ ದೊರೆತ ಬಳಿಕ ಅದನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯವೂ ಇರಬೇಕು ಎಂದು ಹೇಳಿದರು.

ತಾಲೂಕು ಉಸ್ತುವಾರಿ ನಾಗರಾಜ್‌ ಗೌಡ, ಕೆಪಿಸಿಸಿ ಎಸ್‌ಟಿ ಘಟಕದ ಮಾಜಿ ಅಧ್ಯಕ್ಷ ಕೆ.ಪಿ. ಪಾಲಯ್ಯ, ಕೆಪಿಸಿಸಿ ಎಸ್‌ಟಿ ಘಟಕದ ಕಾರ್ಯದರ್ಶಿ ಎಂ.ಡಿ. ಕೀರ್ತಿಕುಮಾರ್ ಮಾತನಾಡಿದರು.

ಸಭೆಯಲ್ಲಿ ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಟೇಲ್, ರವಿ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮದ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರವೀಣ್‌ಕುಮಾರ್, ಡಾ.ಬಸವಾನಂದ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- - -

-29ಜೆ.ಜಿ.ಎಲ್.1: ಜಗಳೂರಲ್ಲಿ ಕಾಂಗ್ರೆಸ್ ಪಕ್ಷದ ‘ಸಂಘಟನ್ ಸೃಜನ್ ಅಭಿಯಾನ-2’ ಕಾರ್ಯಕ್ರಮವನ್ನು ಶಾಸಕ ಬಿ.ದೇವೇಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ಕಲೀಲುಲ್ಲಾ ದೀಪಬೆಳಗುವ ಮೂಲಕ ಉದ್ಘಾಟಿಸಿದರು.