ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ ಗೆಲುವೇ ಮುಖ್ಯ ಗುರಿ

| Published : Mar 31 2024, 02:04 AM IST

ಸಾರಾಂಶ

ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳಿಸುವುದೇ ಕಾಂಗ್ರೆಸ್‌ ಕಾರ್ಯಕರ್ತರ ಗುರಿಯಾಗಿರಲಿ. ವಿನಾಕಾರಣ ಗೊಂದಲಗಳನ್ನು ಸೃಷ್ಠಿಸಿಕೊಳ್ಳುವುದು ಸರಿಯಲ್ಲ ಎಂದು ತಾಲೂಕು ಕಾಂಗ್ರೆಸ್ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ, ಚನ್ನಗಿರಿ

ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳಿಸುವುದೇ ಕಾಂಗ್ರೆಸ್‌ ಕಾರ್ಯಕರ್ತರ ಗುರಿಯಾಗಿರಲಿ. ವಿನಾಕಾರಣ ಗೊಂದಲಗಳನ್ನು ಸೃಷ್ಠಿಸಿಕೊಳ್ಳುವುದು ಸರಿಯಲ್ಲ ಎಂದು ತಾಲೂಕು ಕಾಂಗ್ರೆಸ್ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಲೋಕಸಭಾ ಚುನಾವಣೆ ಸಮರ್ಥವಾಗಿ ಎದುರಿಸುವ ಸಲುವಾಗಿ ಏರ್ಪಡಿಸಿದ್ದ ಕಾರ್ಯಕರ್ತರ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಡೀ ರಾಜ್ಯವೇ ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆ ಫಲಿತಾಂಶ ಕುತೂಹಲದಿಂದ ಎದುರುನೋಡುತ್ತಿದೆ. ಕಳೆದ ನಾಲ್ಕೈದು ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲು ಕಂಡಿದ್ದು, ಈ ಬಾರಿಯ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯಾಗಿ ಡಾ.ಪ್ರಭಾ ಮಲ್ಲಿಕಾರ್ಜುನ್ ಇದ್ದಾರೆ. ವಿರೋಧ ಪಕ್ಷ ಬಿಜೆಪಿಯಿಂದ ಗಾಯತ್ರಿ ಸಿದ್ದೇಶ್ವರ್ ಕಣದಲ್ಲಿದ್ದಾರೆ. ಚನ್ನಗಿರಿ ವಿಧಾನಸಭಾ ಕ್ಷೇತ್ರದಿಂದ ಹೆಚ್ಚಿನ ಮತಗಳನ್ನು ಕಾಂಗ್ರೆಸ್ ಅಭ್ಯರ್ಥಿಗೆ ಕೊಡಿಸುವ ಮೂಲಕ, ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ, ಪಾರ್ಲಿಮೆಂಟ್‌ಗೆ ಕಳಿಸುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ ಎಂದರು.

ಕಾಂಗ್ರೆಸ್ ಹಿರಿಯ ಮುಖಂಡ ಅಮಾನುಲ್ಲಾ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆ ಮಹತ್ವದ್ದಾಗಿದೆ. ಪಕ್ಷದಲ್ಲಿ ನಿಷ್ಠೆ- ಪ್ರಾಮಾಣಿಕತೆ, ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಬೇಕು. ಯಾರೇ ಅಭ್ಯರ್ಥಿಯಾಗಿರಲಿ, ಪಕ್ಷದ ತೀರ್ಮಾನಕ್ಕೆ ಬದ್ಧರಾಗಿ ಚುನಾವಣೆ ಮಾಡಬೇಕಾಗಿದೆ ಎಂದು ತಿಳಿಸಿದರು.

ಬಿಜೆಪಿ ಪಕ್ಷದವರು ಅಯೋಧ್ಯೆ ಶ್ರೀರಾಮ ಮಂದಿರ ವಿಚಾರ ಮುಂದಿಟ್ಟುಕೊಂಡು ಚುನಾವಣೆ ಮಾಡುತ್ತಿದ್ದಾರೆ. ಆದರೆ, ಕಾಂಗ್ರೆಸ್‌ ದೇಶದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಚುನಾವಣೆ ಮಾಡುತ್ತಿದೆ. ಬಿಜೆಪಿಯವರು ಹಿಂದೂ- ಮುಸ್ಲಿಂ ಎಂಬ ಧರ್ಮಗಳ ಆಧಾರದ ಮೇಲೆ ಚುನಾವಣೆ ಮಾಡುತ್ತ, ದೇಶದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ ಎಂದರು.

ಸಭೆಯಲ್ಲಿ ಕಾಂಗ್ರೆಸ್ ಪ್ರಮುಖರಾದ ಸಿ.ನಾಗರಾಜ್, ನಲ್ಲೂರು ಶೇಖರಪ್ಪ, ಕೊಂಡದಹಳ್ಳಿ ಜಯಣ್ಣ, ಗೌಸ್ ಪೀರ್, ತನ್ವೀರ್, ಪಾಂಡೋಮಟ್ಟಿ ಜಗದೀಶ್, ಅಮೀರ್ ಅಹಮದ್, ಜಿತೇಂದ್ರ ಕಂಚುಗಾರ್, ಪಿ.ಆರ್.ಮಂಜುನಾಥ್, ಜಬೀಉಲ್ಲಾ, ಮಲ್ಲೇಶ್, ಖದೀರ್, ಪ್ರಕಾಶ್, ಬಾಬುಜಾನ್, ಬಿ.ಆರ್. ಹಾಲೇಶ್, ಜ್ಯೋತಿ ಕೊಟ್ರೇಶ್ ಕೋರಿ, ಸೈಯ್ಯದ್ ಅಫ್ರೋಜ್, ದೀಪಕ್ ಗಾರ್ಘೆ, ಕಾರ್ಯಕರ್ತರು ಹಾಜರಿದ್ದರು.

- - -

ಕೋಟ್‌ ದೇಶಕ್ಕೆ ಸ್ವಾತಂತ್ರ್ಯ ತರುವಲ್ಲಿ ಹಿಂದೂ-ಮುಸ್ಲಿಂ ಇಬ್ಬರು ಹೋರಾಟ ಮಾಡಿದ್ದಾರೆ. ಭಾರತದಲ್ಲಿರುವ ಮುಸ್ಲಿಮರು ಯಾರೂ ಅರಬ್ ದೇಶಗಳಿಂದ ಬಂದವರಲ್ಲ, ಅವರೆಲ್ಲರೂ ಭಾರತೀಯರೇ ಆಗಿದ್ದಾರೆ. ತಮ್ಮ ರಾಜಕೀಯ ಹಿತಾಸಕ್ತಿಗೋಸ್ಕರ ಹಿಂದೂ- ಮುಸ್ಲಿಂ ಎಂದು ಭಿನ್ನತೆ ಮಾಡುತ್ತಿರುವ ಬಿಜೆಪಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕಾಗಿದೆ

- ಅಮಾನುಲ್ಲಾ, ಹಿರಿಯ ಮುಖಂಡ

- - - -30ಕೆಸಿಎನ್‌1:

ಚನ್ನಗಿರಿ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ಪೂರ್ವಭಾವಿ ಸಭೆಯಲ್ಲಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಸಿ.ಎಚ್.ಶ್ರೀನಿವಾಸ್ ಮಾತನಾಡಿದರು.