ರಸ್ತೆ ಗುಂಡಿಗಳ ಬಗ್ಗೆ ಸ್ವತಃ ಸಚಿವ ಕೃಷ್ಣಬೈರೇಗೌಡ ಅವರು ಟ್ವೀಟ್‌ ಮಾಡಿ ತೀವ್ರ ಅಸಮಾಧಾನ

| Published : Aug 16 2024, 01:48 AM IST / Updated: Aug 16 2024, 10:10 AM IST

Krishna Byre Gowda

ಸಾರಾಂಶ

ರಸ್ತೆ ಗುಂಡಿಗಳ ಬಗ್ಗೆ ಸ್ವತಃ ಸಚಿವ ಕೃಷ್ಣಬೈರೇಗೌಡ ಅವರು ಟ್ವೀಟ್‌ ಮಾಡಿದ್ದಾರೆ. ಇದಕ್ಕೆ ಪ್ರತಿ ಪಕ್ಷ ನಾಯಕ ಆರ್‌.ಅಶೋಕ್‌ ಟೀಕಾ ಪ್ರಹಾರ ನಡೆಸಿದ್ದಾರೆ.

 ಬೆಂಗಳೂರು : ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಸಂಪುಟ ಸಚಿವ ಕೃಷ್ಣ ಬೈರಗೌಡ ಅವರಿಂದಲೇ ಅಸಮಾಧಾನ ವ್ಯಕ್ತಪಡಿಸಿದ್ದು, ರಸ್ತೆ ಗುಂಡಿ ಮುಚ್ಚುವಂತೆ ಸಾಮಾಜಿಕ ಜಾಲತಾಣದ ಮೂಲಕ ಒತ್ತಾಯಿಸಿದ್ದಾರೆ.

ನಗರದ ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗೆ ಸಾಗುವ ರಿಂಗ್‌ ರಸ್ತೆಯ ಸರ್ವಿಸ್‌ ರಸ್ತೆಯಲ್ಲಿನ ಗುಂಡಿಗಳ ಇರುವ ವಿಡಿಯೋವನ್ನು ಸಾರ್ವಜನಿಕರು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.

ಸಚಿವರು ಈ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಬಿಬಿಎಂಪಿ ಅಥವಾ ಬಿಎಂಆರ್‌ಸಿಎಲ್‌ (ನಮ್ಮ ಮೆಟ್ರೋ) ಯಾರಾದರೂ ಆಗಲಿ ದಯವಿಟ್ಟು ಗುಂಡಿ ಮುಚ್ಚುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಪರಿಹಾರ ಮಾಡುವಂತೆ ಕೋರಿದ್ದಾರೆ.

ಸಚಿವರೇ ರಸ್ತೆ ಗುಂಡಿ ಮುಚ್ಚುವಂತೆ ಸಾಮಾಜಿಕ ಜಾಲತಾಣದ ಮೂಲಕ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಪ್ರತಿ ಪಕ್ಷದ ನಾಯಕರು ಹಾಗೂ ಸಾರ್ವಜನಿಕರು ರಾಜ್ಯ ಸರ್ಕಾರದ ಕಾರ್ಯ ವೈಖರಿ ಬಗ್ಗೆ ಲೇವಡಿ ಮಾಡಿದ್ದಾರೆ.

ದರಿದ್ರ, ನಾಲಾಯಕ್‌ ಸರ್ಕಾರ: ಅಶೋಕ್‌

 ಬೆಂಗಳೂರು :  ಕಂದಾಯ ಸಚಿವ ಹಾಗೂ ಬ್ಯಾಟರಾಯನಪುರ ಶಾಸಕರೂ ಆದ ಕೃಷ್ಣ ಭೈರೇಗೌಡ ಅವರು ಅತ್ಯಂತ ಅಸಹಾಯಕರಾಗಿ ಬಿಬಿಎಂಪಿ ಮತ್ತು ಬಿಎಂಆರ್‌ಸಿಎಲ್‌ ಅಧಿಕಾರಿಗಳಿಗೆ ರಸ್ತೆ ಗುಂಡಿ ಮುಚ್ಚುವಂತೆ ಸಾಮಾಜಿಕ ಜಾಲತಾಣದಲ್ಲಿ ಬೇಡಿಕೊಳ್ಳುತ್ತಿರುವುದನ್ನು ನೋಡಿದರೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಎಂತಹ ದರಿದ್ರ ನಾಲಾಯಕ್ ಸರ್ಕಾರ ಎಂಬುದು ಸ್ಪಷ್ಟವಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್ ವ್ಯಂಗ್ಯವಾಡಿದ್ದಾರೆ.

ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ ‘ಎಕ್ಸ್‌’ ಖಾತೆಯಲ್ಲಿ ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್‌ ರಸ್ತೆಯ ಸರ್ವಿಸ್‌ ರಸ್ತೆಯ ವಿಡಿಯೋ ಹಂಚಿಕೊಂಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಅಶೋಕ್‌, ಕೃಷ್ಣ ಭೈರೇಗೌಡರೇ ಆದೇಶ ಮಾಡಿ ಕೆಲಸ ಮಾಡಿಸಬೇಕಾದ ಸ್ಥಾನದಲ್ಲಿರುವ ತಾವು ಬಿಬಿಎಂಪಿ ಅಧಿಕಾರಿಗಳಿಗೆ ಇಷ್ಟೊಂದು ಅಸಹಾಯಕರಾಗಿ ಅಂಗಲಾಚುತ್ತಿದ್ದೀರಲ್ಲಾ, ಬೆಂಗಳೂರು ಅಭಿವೃದ್ಧಿ ಸಚಿವರು ತಮ್ಮ ಕೆಲಸ ಮಾಡುತ್ತಿಲ್ಲ ಎಂದು ಪರೋಕ್ಷವಾಗಿ ಟಾಂಗ್‌ ಕೊಡುತ್ತಿದ್ದೀರೋ ಅಥವಾ ಇದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಬಹಿರಂಗ ಬಂಡಾಯದ ಮುನ್ಸೂಚನೆಯೋ ಎಂದು ಪ್ರಶ್ನಿಸಿದ್ದಾರೆ.

ಮುಂದುವರೆದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ, ತಮ್ಮ ಸಂಪುಟದಲ್ಲಿ ಸಚಿವರ ಮಧ್ಯೆ ಪರಸ್ಪರ ಒಂದು ಸ್ವಲ್ಪವೂ ತಾಳಮೇಳವಿಲ್ಲವೇ? ಒಬ್ಬ ಸಚಿವ ಮತ್ತೊಬ್ಬ ಸಚಿವರ ಕರೆ ಸ್ವೀಕರಿಸುವುದಿಲ್ಲವೇ? ನಿಮ್ಮ ಸರ್ಕಾರದಲ್ಲಿ ಏನಾಗುತ್ತಿದೆ ಎಂದು ಅಶೋಕ್‌ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ.