ನಾಗಮಂಗಲ ಗಲಭೆ ಒಂದು ಪೂರ್ವನಿಯೋಜಿತ, ಪ್ರಚೋದನೆ ಕೃತ್ಯ : ಬಿಜೆಪಿ ಸತ್ಯಶೋಧನಾ ಸಮಿತಿ ವರದಿ

| Published : Sep 21 2024, 01:49 AM IST / Updated: Sep 21 2024, 08:38 AM IST

ನಾಗಮಂಗಲ ಗಲಭೆ ಒಂದು ಪೂರ್ವನಿಯೋಜಿತ, ಪ್ರಚೋದನೆ ಕೃತ್ಯ : ಬಿಜೆಪಿ ಸತ್ಯಶೋಧನಾ ಸಮಿತಿ ವರದಿ
Share this Article
  • FB
  • TW
  • Linkdin
  • Email

ಸಾರಾಂಶ

ನಾಗಮಂಗಲ ಗಲಭೆ ಪೂರ್ವನಿಯೋಜಿತ ಕೃತ್ಯವಾಗಿದ್ದು, ರಾಜ್ಯ ಸರ್ಕಾರದ ವೈಫಲ್ಯ ಮತ್ತು ತುಷ್ಟೀಕರಣ ನೀತಿಯೇ ಇದಕ್ಕೆ ಕಾರಣ ಎಂದು ಬಿಜೆಪಿ ಸತ್ಯಶೋಧನಾ ಸಮಿತಿ ಆರೋಪಿಸಿದೆ. 

  ಬೆಂಗಳೂರು : ‘ನಾಗಮಂಗಲ ಗಲಭೆ ಒಂದು ಪೂರ್ವನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವೈಫಲ್ಯ ಮತ್ತು ತುಷ್ಟೀಕರಣ ಎದ್ದು ಕಾಣುವಂತಿದೆ’ ಎಂದು ಬಿಜೆಪಿಯ ಸತ್ಯಶೋಧನಾ ಸಮಿತಿ ನೇತೃತ್ವ ವಹಿಸಿದ್ದ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದಾರೆ.

‘ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನಡೆಸಬೇಕು. ಜತೆಗೆ ಬೆಂಕಿ ಹಾಕಿದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು’ ಎಂದೂ ಅವರು ಆಗ್ರಹಿಸಿದ್ದಾರೆ.ಶುಕ್ರವಾರ ತಮ್ಮ ನೇತೃತ್ವದ ಸಮಿತಿಯ ವರದಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸಲ್ಲಿಸಿದ ಬಳಿಕ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.ನಿರ್ದಿಷ್ಟ ಅಂಗಡಿಗಳನ್ನೇ ಗುರಿ ಮಾಡಿ ಬೆಂಕಿ ಹಚ್ಚಿದ್ದಾರೆ. ಕಳೆದ ವರ್ಷವೂ ಗಲಭೆ ಆಗಿತ್ತು. ಆದರೂ ಈ ವರ್ಷ ಮುಂಜಾಗ್ರತೆ ಕ್ರಮ ಕೈಗೊಂಡಿಲ್ಲ. ಆರೋಪಿಗಳು ಮಾಸ್ಕ್ ಧರಿಸಿದ್ದು ನೋಡಿದರೆ, ಪೆಟ್ರೋಲ್ ಬಾಂಬ್ ಸಿದ್ಧವಾಗಿಟ್ಟುಕೊಂಡಿದ್ದನ್ನು ಗಮನಿಸಿದರೆ ಇದೊಂದು ಪೂರ್ವಯೋಜಿತ ಕೃತ್ಯ ಎಂಬುದು ಸ್ಪಷ್ಟವಾಗುತ್ತದೆ ಎಂದು ತಿಳಿಸಿದರು.

ನಾಗಮಂಗಲದಲ್ಲಿ ಅದ್ಭುತವಾದ ಸೌಹಾರ್ದತೆ ಇತ್ತು. ಕಾಲಕಾಲದಲ್ಲಿ ರಾಜಕೀಯದ ಹಸ್ತಕ್ಷೇಪ, ವಿಭಜನೆಯ ರಾಜಕಾರಣ ಮತ್ತು ತುಷ್ಟೀಕರಣದ ಕಾರಣದಿಂದ ಗಲಭೆ ನಡೆದಿದೆ. ಮತಕ್ಕಾಗಿ ಆಪಾದಿತರ ಕೇಸುಗಳನ್ನು ಹಿಂಪಡೆಯಲಾಗಿದೆ. ಪೊಲೀಸರ ಸಂಪೂರ್ಣ ವೈಫಲ್ಯತೆ ಕಾಣುತ್ತದೆ. ಪೊಲೀಸರ ಕೈಕಟ್ಟಿ ಹಾಕಿದ್ದರು. ಏನೂ ಕ್ರಮ ಕೈಗೊಳ್ಳಲು ಅವರಿಗೆ ಅವಕಾಶ ಇರಲಿಲ್ಲ.

 ಯಾರ ಮೇಲೂ ಕೇಸ್ ಮಾಡುವ ಹಾಗಿಲ್ಲ. ಯಾರ ಮೇಲೂ ಕ್ರಮ ಕೈಗೊಳ್ಳುವಂತಿಲ್ಲ ಎಂಬ ಸ್ಥಿತಿ ಪೊಲೀಸರದಾಗಿತ್ತು ಎಂದು ವಿವರಿಸಿದರು.ನಿರ್ದಿಷ್ಟ ಪೆಟ್ರೋಲ್ ಬಂಕ್‌ನಿಂದ ಪೆಟ್ರೋಲ್ ಬಾಂಬಿಗೆ ಪೆಟ್ರೋಲ್ ಕೊಡಲಾಗಿದೆ. ನಾಗಮಂಗಲವು ತಲೆಮರೆಸಿಕೊಂಡಿರುವವರು, ಸಮಾಜಬಾಹಿರ ಶಕ್ತಿಗಳು, ದೇಶದ್ರೋಹಿಗಳು, ಪಿಎಫ್ಐ ಚಟುವಟಿಕೆಗಳ ನೆಲೆಯಾಗಿದೆ. ಮಾದಕ ವಸ್ತುಗಳನ್ನು ಇಲ್ಲಿ ಸಂಗ್ರಹಿಸಿ ಇಡಲಾಗುತ್ತಿದೆ ಎಂದು ಆಪಾದಿಸಿದರು.

ಕೇರಳ ಮೂಲದ ವ್ಯಕ್ತಿಗಳು ಭಾಗಿಯಾದ ಕುರಿತು ಗೃಹ ಸಚಿವರೂ ಹೇಳಿದ್ದಾರೆ. ಬಾಂಗ್ಲಾ ದೇಶೀಯರು ಇರುವ ಬಗ್ಗೆ ಅವರೇ ತಿಳಿಸಿದ್ದಾರೆ. 800 ಎಕರೆ ಹೊಂದಿದ ಪ್ರಬಲ ವ್ಯಕ್ತಿಯ ಜಾಗದಲ್ಲಿ ಬಾಂಗ್ಲಾ ದೇಶೀಯರು ಕೆಲಸ ಮಾಡುತ್ತಿದ್ದಾರೆ. ನಿಷೇಧಿತ ಪಿಎಫ್ಐ ಚಟುವಟಿಕೆ ಮಾಡಲು ಹೇಗೆ ಅವಕಾಶ ಕೊಟ್ಟಿದ್ದಾರೆ ಎಂದು ಅಶ್ವತ್ಥನಾರಾಯಣ ಖಾರವಾಗಿ ಪ್ರಶ್ನಿಸಿದರು.ನಮ್ಮ ಆಡಳಿತಾವಧಿಯಲ್ಲಿ ಎಲ್ಲಿಯೂ ಗಣೇಶೋತ್ಸವ ಸಂದರ್ಭದಲ್ಲಿ ಗಲಾಟೆಗಳು ಆಗಿರಲಿಲ್ಲ. ಇವತ್ತು ರಾಜ್ಯದ 8-10 ಕಡೆ ಗಲಭೆಗಳು ಆಗಿವೆ. ವಿನಾ ಕಾರಣ ಪ್ರಚೋದನೆ ನಡೆದಿದೆ.

 ಅವರ ಚುನಾಯಿತ ಪ್ರತಿನಿಧಿಗಳು ಬಾಂಗ್ಲಾ ದೇಶದ ಪರಿಸ್ಥಿತಿ ನಿರ್ಮಿಸುತ್ತೇವೆ; ಗವರ್ನರ್ ಕಚೇರಿಗೆ ನುಗ್ಗುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಮೋದಿಜೀ ಅವರನ್ನು ಶೇಖ್ ಹಸೀನಾ ಥರ ಮಾಡುತ್ತೇವೆ ಎಂದು ಎಚ್ಚರಿಕೆ ನೀಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಈ ರೀತಿ ಬಹಿರಂಗ ಹೇಳಿಕೆ ಕೊಟ್ಟರೂ ಒಂದೇ ಒಂದು ಕೇಸು ದಾಖಲಿಸುತ್ತಿಲ್ಲ ಎಂದರು.ರಾಜ್ಯದಲ್ಲಿ ದ್ವೇಷದ ರಾಜಕಾರಣ ನಡೆದಿದೆ. 

ಇವರ ಕಣ್ಣ ಮುಂದೆಯೇ ಎಲ್ಲ ರೀತಿಯ ಅನೈತಿಕ ಚಟುವಟಿಕೆ, ಕಾನೂನು ದುರ್ಬಳಕೆ ಆದರೂ ಕೈಕಟ್ಟಿ ಇರುತ್ತಾರೆ. ಪೊಲೀಸ್ ಇಲಾಖೆಯ 8 ಸಿಬ್ಬಂದಿಗಳ ಮೇಲೆ ಹಲ್ಲೆ ಆಗಿದೆ. ಗಾಯವಾಗಿದ್ದರೂ ಮೆಡಿಕೊ ಲೀಗಲ್ ಕೇಸ್ ಆಗಿಲ್ಲ. ಮುಗ್ಧ ಜನರ ಮೇಲೆ ಕೇಸು ಹಾಕಿದ್ದಾರೆ ಎಂದು ಟೀಕಿಸಿದರು. ಸತ್ಯಶೋಧನಾ ಸಮಿತಿಯಲ್ಲಿದ್ದ ಮಾಜಿ ಸಚಿವ ಕೆ.ಸಿ.ನಾರಾಯಣ ಗೌಡ, ರಾಜ್ಯ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್ ಗೌಡ, ಮುಖಂಡ ಭಾಸ್ಕರ್ ರಾವ್ ಅವರ ಉಪಸ್ಥಿತರಿದ್ದರು.