ರಾಜ್ಯಪಾಲರು ನೀಡಿದ ನೋಟಿಸ್‌ ವಾಪಸ್‌ ಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ

| Published : Aug 06 2024, 12:36 AM IST

ರಾಜ್ಯಪಾಲರು ನೀಡಿದ ನೋಟಿಸ್‌ ವಾಪಸ್‌ ಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಆಗ್ರಹಿಸಿ ಹಾಗೂ ಸಿದ್ದರಾಮಯ್ಯ ಜನಪ್ರಿಯತೆ ಸಹಿಸದೇ ಷಡ್ಯಂತ್ರ ನಡೆಸುತ್ತಿರುವ ಬಿಜೆಪಿಯ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ನೇತೃತ್ವದಲ್ಲಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಆಗ್ರಹಿಸಿ ಹಾಗೂ ಸಿದ್ದರಾಮಯ್ಯ ಜನಪ್ರಿಯತೆ ಸಹಿಸದೇ ಷಡ್ಯಂತ್ರ ನಡೆಸುತ್ತಿರುವ ಬಿಜೆಪಿಯ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ನೇತೃತ್ವದಲ್ಲಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಬೃಹತ್ ಪ್ರತಿಭಟನಾ ಮೆರವಣಿಗೆ ಎಂ.ಜಿ. ರೋಡ್, ಜೆ.ಪಿ. ಸರ್ಕಲ್ ಮೂಲಕ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಆಗಮಿಸಿತು. ತಮಟೆ ಬಾರಿಸುತ್ತ, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಪರ ಘೋಷಣೆ ಕೂಗಿದ ಕಾರ್ಯಕರ್ತರು, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಡಾ ಪ್ರಕರಣದಲ್ಲಿ ರಾಜ್ಯಪಾಲರ ನಡೆಯನ್ನು ಖಂಡಿಸಿದರು. ಕೆಲ ಕಾಲ ವಾಹನ ಸಂಚಾರ ಬಂದ್ ಮಾಡಿ ಪ್ರತಿಭಟಿಸಿದರು.

ಈ ವೇಳೆ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ, ಕಳೆದ ೪೦ ವರ್ಷಗಳಿಂದ ರಾಜಕೀಯದಲ್ಲಿ ಯಾವುದೇ ಕಳಂಕ ಇಲ್ಲದೇ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯನವರು ಹಣಕಾಸು ಹಾಗೂ ಆಡಳಿತ ವಿಷಯದಲ್ಲಿ ಎಂದಿಗೂ ತಪ್ಪು ಮಾಡಿಲ್ಲ. ಮುಡಾದಲ್ಲಿ ಕಾನೂನು ಪ್ರಕಾರ ಸೈಟು ಹಂಚಿಕೆ ಮಾಡಲಾಗಿದೆ. ಬಿಜೆಪಿ ಮತ್ತು ಜೆಡಿಎಸ್‌ನ ಅನೇಕರು ಕೂಡ ಮುಡಾದಲ್ಲಿ ಸೈಟ್‌ ಪಡೆದಿದ್ದಾರೆ. ಆದರೂ ಬಿಜೆಪಿ ಹಾಗೂ ಜೆಡಿಎಸ್‌ನವರು ವಿನಾಕಾರಣ ಸಂಚು ರೂಪಿಸಿ, ಪ್ರತಿಭಟನೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯವರ ಪರವಾಗಿ ಹೋರಾಡಲು ನಾವು ಸದಾ ಸಿದ್ಧರಿದ್ದೇವೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ನಾವೆಲ್ಲ ಸಿದ್ದರಾಮಯ್ಯನವರ ಬೆನ್ನ ಹಿಂದಿರುತ್ತೇವೆ ಎಂದು ವಾಗ್ದಾಳಿ ನಡೆಸಿದರು. ಹಿರೇಕೆರೂರ ಶಾಸಕ ಯು.ಬಿ. ಬಣಕಾರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾನೂನು ಇಕ್ಕಟ್ಟಿಗೆ ಸಿಲುಕಿಸಲು ರಾಜ್ಯಪಾಲರು ನಿಯಮ ಬಾಹಿರವಾಗಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಯಾರು ಎಷ್ಟೇ ಷಡ್ಯಂತ್ರ ಮಾಡಿದರೂ ಸಫಲರಾಗುವುದಿಲ್ಲ. ಬದಲಾಗಿ ಅವರ ವರ್ಚುಸ್ಸು ಮತ್ತಷ್ಟು ಹೆಚ್ಚಾಗುತ್ತದೆ. ಕಾಂಗ್ರೆಸ್ ಮತ್ತಷ್ಟು ಬಲಿಷ್ಠವಾಗುತ್ತದೆ. ಸಿದ್ದರಾಮಯ್ಯ ಅವರು ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಜನಪ್ರಿಯತೆಯನ್ನು ಬಿಜೆಪಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದರು.ರಾಣಿಬೆನ್ನೂರ ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿಷ್ಕಳಂಕ ಚಾರಿತ್ರ್ಯ ಹೊಂದಿದ್ದು, ೭೦ ವರ್ಷಗಳಿಂದ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಕೆಲಸ ಮಾಡಿದ್ದಾರೆ. ಜನಪರ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯನವರನ್ನು ರಾಜ್ಯದ ಜನತೆ ಒಪ್ಪಿದ್ದು, ಅವರ ಬೆನ್ನಿಗೆ ನಿಂತಿದ್ದಾರೆ. ಷಡ್ಯಂತ್ರ ಮಾಡುವ ಮೂಲಕ ಅವರನ್ನು ಅಧಿಕಾರದಿಂದ ಇಳಿಸುವ ಸಂಚು ನಡೆಯೋದಿಲ್ಲ. ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಇದನ್ನು ಸಹಿಸೋದಿಲ್ಲ. ಕೂಡಲೇ ನೋಟಿಸ್ ಹಿಂಪಡೆಯಬೇಕು. ಇಲ್ಲದಿದ್ದರೆ ಬೀದಿಗೆ ಇಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು. ಮಾಜಿ ಸಚಿವ ಆರ್‌.ಶಂಕರ, ಮುಖಂಡ ಎಸ್‌.ಆರ್‌.ಪಾಟೀಲ ಇತರರು ಮಾತನಾಡಿದರು. ಸ್ಥಳಕ್ಕೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಆಗಮಿಸಿ ಶಾಸಕರಿಂದ ಮನವಿ ಪತ್ರ ಸ್ವೀಕರಿಸಿದರು.ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಮಾಜಿ ಶಾಸಕ ಅಜ್ಜಂಫೀರ್‌ ಖಾದ್ರಿ, ಕೊಟ್ರೇಶಪ್ಪ ಬಸೇಗಣ್ಣಿ, ಎಸ್‌ಎಫ್‌ಎನ್‌ ಗಾಜಿಗೌಡ್ರ, ಆನಂದಸ್ವಾಮಿ ಗಡ್ಡದೇವರಮಠ, ಕರ್ಜಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ. ಮೈದೂರ, ಹಾವೇರಿ ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ, ಪ್ರಕಾಶಗೌಡ ಪಾಟೀಲ, ಪ್ರಸನ್ನ ಹಿರೇಮಠ, ಪ್ರೇಮಾ ಪಾಟೀಲ, ಸೇರಿದಂತೆ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.ಸಿಎಂ ಸಿದ್ದರಾಮಯ್ಯನವರ ಜನಪ್ರಿಯತೆಯನ್ನು ಸಹಿಸದೇ ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ನಾಯಕರು ರಾಜ್ಯಪಾಲರ ಮೂಲಕ ನೋಟಿಸ್ ಕೊಡಿಸಿದ್ದು ಖಂಡನೀಯ. ವಿನಾಕಾರಣ ಸಿದ್ದರಾಮಯ್ಯನವರ ಮೇಲೆ ಆರೋಪ ಹೊರಿಸಿ ಬಿಜೆಪಿಯವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಬಿಜೆಪಿ ಎಂದಿಗೂ ನೇರವಾಗಿ ಅಧಿಕಾರ ಹಿಡಿಯದೇ ಹಿಂಬಾಗಿಲಿಂದ ಅಧಿಕಾರಕ್ಕೆ ಬಂದಿದೆ. ಆದರೆ, ಜನಪರ ಆಡಳಿತ ನೀಡುತ್ತಿರುವ ಸಿಎಂ ಸಿದ್ದರಾಮಯ್ಯನವರ ಬೆನ್ನಿಗೆ ರಾಜ್ಯದ ಜನರು ನಿಂತಿದ್ದಾರೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.