ಜಿಲ್ಲೆಯಲ್ಲಿ ಆಸಿಡ್ ದಾಳಿಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆಸಿಡ್ ದಾಳಿಗೆ ತುತ್ತಾದ ಮಹಿಳೆ ಅಥವಾ ಯಾವುದೇ ವ್ಯಕ್ತಿ ಪಡುವ ನೋವನ್ನು ನಾವು ಯಾರು ಊಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬೀದರ್‌ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಬಿ.ರೆಹಮಾನ್ ಹೇಳಿದರು.

ಕನ್ನಡಪ್ರಭ ವಾರ್ತೆ ಬೀದರ್

ಜಿಲ್ಲೆಯಲ್ಲಿ ಆಸಿಡ್ ದಾಳಿಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆಸಿಡ್ ದಾಳಿಗೆ ತುತ್ತಾದ ಮಹಿಳೆ ಅಥವಾ ಯಾವುದೇ ವ್ಯಕ್ತಿ ಪಡುವ ನೋವನ್ನು ನಾವು ಯಾರು ಊಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬೀದರ್‌ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಬಿ.ರೆಹಮಾನ್ ಹೇಳಿದರು.

ಇತ್ತೀಚೆಗೆ ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ “ಆಸಿಡ್ ದಾಳಿಯ ಸಂದರ್ಭಗಳನ್ನು ಎದುರಿಸಲು, ತಡೆಯಲು, ಸಂತ್ರಸ್ತರಿಗೆ ಸಹಾಯ ಹಾಗೂ ಕಾಯ್ದೆಗಳ ಕುರಿತು ಅಂಗನವಾಡಿ ಕಾರ್ಯಕರ್ತೆಯರಿಗೆ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಪೊಲೀಸ್ ಸಿಬ್ಬಂದಿಗೆ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮೊದಲು ಅಪರಾಧಗಳಿಗೆ ಶಿಕ್ಷೆ ನೀಡಲು ಭಾರತೀಯ ದಂಡ ಸಂಹಿತೆ (ಐಪಿಸಿ) ಇತ್ತು, ಈಗ ಅದು ಬದಲಾಗಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಬಂದಿದೆ. ಇಂತಹ ಕೃತ್ಯಗಳನ್ನು ಎಸಗುವವರನ್ನು ಸಮರ್ಥವಾಗಿ ದಂಡಿಸುವ ಉದ್ದೇಶದಿಂದ 326(ಎ) ಕಾಯ್ದೆ ಜಾರಿಗೆ ತರಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ಪ್ರಕಾರ, ಆಸಿಡ್ ದಾಳಿ ಮಾಡಲು ಪ್ರಯತ್ನಿಸಿ ವ್ಯಕ್ತಿ ವಿಫಲರಾಗಿದ್ದರೂ ಸಹ ಕಲಂ 124ರ ಅಡಿಯಲ್ಲಿ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಘವೇಂದ್ರ ಉಪಾಧ್ಯ ಮಾತನಾಡಿ, ಮಹಿಳೆಯರಿಗೆ ಇರುವ ಸವಲತ್ತುಗಳ ಬಗ್ಗೆ ತಿಳಿಸಿದರು.

ನ್ಯಾಯವಾದಿ ಬಸವರಾಜ ಬುಳ್ಳಾ ಮಾತನಾಡಿ, ಆಸಿಡ್ ದಾಳಿಯ ಸಂದರ್ಭಗಳನ್ನು ಎದುರಿಸುವ ಕುರಿತು ಮತ್ತು ಸಂತ್ರಸ್ತರಿಗೆ ಲಭ್ಯವಿರುವ ಕಾನೂನು ನೆರವಿನ ಬಗ್ಗೆ ಮಾಹಿತಿ ನೀಡಿದರು.

ಅಪರ ಜಿಲ್ಲಾಧಿಕಾರಿ ಸುರೇಖಾ ವಿ.ಕೆ ಮಾತನಾಡಿ, ಆಸಿಡ್ ದಾಳಿಗೆ ಒಳಗಾದ ಮಹಿಳೆಯರಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಕೈಗೊಳ್ಳಲು 2.50 ಲಕ್ಷ ಬಡ್ಡಿರಹಿತ ಸಾಲ ಮತ್ತು 2.50 ಲಕ್ಷ ಸಹಾಯಧನ ನೀಡಲಾಗುತ್ತದೆ ಎಂದರು.

ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಕಿರಣ ಪಾಟೀಲ ಮಾತನಾಡಿ, ಆಸಿಡ್ ದಾಳಿಗೆ ತುತ್ತಾದ ವ್ಯಕ್ತಿಗೆ ಮತ್ತು ಅವರ ಕುಟುಂಬದವರಿಗೆ ಆಪ್ತ ಸಮಾಲೋಚನೆ ನಡೆಸುವುದು ಅತಿ ಮುಖ್ಯವಾಗಿದೆ. ಅವರ ಚಿಕಿತ್ಸೆಯನ್ನು ತಜ್ಞ ವೈದ್ಯರ ತಂಡದ ಮೂಲಕ ಒದಗಿಸಲಾಗುತ್ತದೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಹಾಗೂ ಜಿಲ್ಲಾ ನಿರೂಪಣಾಧಿಕಾರಿ ಶ್ರೀಕಾಂತ ಮೆಂಗಜಿ ಮಾತನಾಡಿ, ಈಗಾಗಲೇ ಸಖಿ ಒನ್ ಸ್ಟಾಪ್ ಸೆಂಟರ್ ಮತ್ತು ಮಹಿಳಾ ಸಹಾಯವಾಣಿ ಮಹಿಳೆಯರ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿವೆ. ಮಹಿಳೆಯರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ನಾವೆಲ್ಲರೂ ಒಂದಾಗಿ ಕೆಲಸ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶಾರದಾ ಎನ್. ಕಲ್ಮಲಕರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಂಜಯ ಮಠಪತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.