ಬಳ್ಳಾರಿ: ರಾಜ್ಯದಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಸರ್ಕಾರ ಇನ್ನು ಬರ ಘೋಷಿಸದೇ ರೈತರನ್ನು ಸಂಕಷ್ಟಕ್ಕೆ ದೂಡಿದೆ. ರಾಜ್ಯದ ಜನರ ಸಂಕಷ್ಟ ಆಲಿಸಬೇಕಾದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟ ರಚನೆಗೆ ದೆಹಲಿಯ ಫೈವ್‌ಸ್ಟಾರ್ ಹೋಟೆಲ್‌ನಲ್ಲಿ ವಾಸ್ತವ್ಯ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.
ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಿಡಗಿನಮೊಳ, ಕಾರೇಕಲ್ಲು ಗ್ರಾಮಗಳಿಗೆ ಭೇಟಿ ನೀಡಿ ಮಳೆ ಕೊರತೆಯಿಂದ ಒಣಗಿರುವ ಬೆಳೆಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ರಾಜ್ಯದ ಖಜಾನೆ ಸಂಪೂರ್ಣ ಖಾಲಿಯಾಗಿದೆ. ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ರೈತರ ಕಣ್ಣೀರನ್ನು ಒರೆಸುವ ಬದಲು ಆಡಳಿತ ಪಕ್ಷದ ನಾಯಕರು ರಾಜಕೀಯ ಲೆಕ್ಕಾಚಾರದಲ್ಲೇ ನಿರತರಾಗಿದ್ದಾರೆ. ಬೆಳೆ ಬಿತ್ತನೆ ಮಾಡಿ 50 ದಿನಗಳಾದರೂ ಮಳೆಯಾಗದೇ ಬೆಳೆ ಸಂಪೂರ್ಣ ಒಣಗಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿಯೂ ಜಿಲ್ಲಾಧಿಕಾರಿ, ತಹಸೀಲ್ದಾರರು ಅಥವಾ ಜಿಲ್ಲಾ ಉಸ್ತುವಾರಿ ಸಚಿವರು ಹೊಲಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿ ಪರಿಶೀಲಿಸಿಲ್ಲ. ರೈತರ ಸಮಸ್ಯೆ ಅರಿಯುವ ಮನಸ್ಸೇ ಸರ್ಕಾರಕ್ಕೆ ಇಲ್ಲ ಎಂದು ಆಪಾದಿಸಿದರು.
ರೈತರು ಗುಳೆ ಹೋಗುವ ಪರಿಸ್ಥಿತಿ:ಕಲ್ಯಾಣ ಕರ್ನಾಟಕ ಭಾಗದ ಸಾವಿರಾರು ರೈತರು ಹಾಗೂ ಕೃಷಿ ಕಾರ್ಮಿಕರು ಉದ್ಯೋಗಕ್ಕಾಗಿ ಗೋವಾ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಗೆ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ಕಲ್ಯಾಣ ಕರ್ನಾಟಕ ಭಾಗದ ಗೃಹ ಸಚಿವರು ಜನರ ಸಂಕಷ್ಟಗಳ ಬಗ್ಗೆ ಬಾಯಿ ಬಿಡುತ್ತಿಲ್ಲ. ಸರ್ಕಾರಕ್ಕೆ ಜನರ ಜೀವನೋಪಾಯದ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ರಾಜ್ಯ ಸರ್ಕಾರ ಉದ್ಯೋಗ ಸೃಷ್ಟಿಗೆ ಯಾವುದೇ ಯೋಜನೆ ರೂಪಿಸಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗದ ಕೊರತೆಯಿಂದ ಜನರು ಊರು ತೊರೆಯುತ್ತಿದ್ದಾರೆ ಎಂದರು.
ಬರ ಪರಿಹಾರ ಕಾಮಗಾರಿ ಆರಂಭಿಸಬೇಕಿತ್ತು:
ಪ್ರತಿ ತಾಲೂಕಿನಲ್ಲಿ ಈಗಾಗಲೇ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕಾಗಿತ್ತು. ಶಾಸಕರ ನೇತೃತ್ವದಲ್ಲಿ ಟಾಸ್ಕ್‌ಫೋರ್ಸ್ ರಚಿಸಿ ಕನಿಷ್ಠ ₹50 ಕೋಟಿ ಅನುದಾನ ಬಿಡುಗಡೆ ಮಾಡಿ ಕುಡಿಯುವ ನೀರು, ಮೇವು, ಉದ್ಯೋಗಕ್ಕೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಬೇಕಿತ್ತು. ಆದರೆ ಸರ್ಕಾರ ಯಾವುದೇ ಪೂರ್ವಸಿದ್ಧತೆ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ನೀರಿನ ಅಭಾವ ತೀವ್ರಗೊಂಡು ಟ್ಯಾಂಕರ್ ಅವಲಂಬನೆ ಹೆಚ್ಚಾಗಲಿದೆ. ಇದರೊಂದಿಗೆ ಟ್ಯಾಂಕರ್ ಮಾಫಿಯಾ ಹಾಗೂ ಭ್ರಷ್ಟಾಚಾರಕ್ಕೂ ಅವಕಾಶ ಸಿಗಲಿದೆ ಎಂದು ಎಚ್ಚರಿಸಿದರು.
ರಾಜ್ಯ ಸರ್ಕಾರ ಕೂಡಲೇ ರೈತರ ₹1 ಲಕ್ಷದವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡಬೇಕು. ಮಳೆ ಕೊರತೆಯಿಂದ ಬೆಳೆ ಕಳೆದುಕೊಂಡ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ಜಾನುವಾರುಗಳ ರಕ್ಷಣೆಗೆ ಎಲ್ಲ ತಾಲೂಕುಗಳಲ್ಲಿ ಗೋಶಾಲೆಗಳನ್ನು ಆರಂಭಿಸಿ, ಮೇವು, ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.ಬರ ಘೋಷಣೆ ಮಾಡಿದ ಬಳಿಕವೇ ಕೇಂದ್ರ ಸರ್ಕಾರದ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಲು ಸಾಧ್ಯವಾಗುತ್ತದೆ. ಆಗಸ್ಟ್ 15ರ ನಂತರ ಬರ ಘೋಷಣೆ ಮಾಡಿದರೆ ರೈತರಿಗೆ ಯಾವುದೇ ಪ್ರಯೋಜನವಿಲ್ಲ. ಬೆಳೆ ಸಂಪೂರ್ಣ ಹಾಳಾದ ನಂತರ ಪರಿಹಾರ ಘೋಷಿಸುವುದರಿಂದ ಸಂಕಷ್ಟ ನಿವಾರಣೆಯಾಗುವುದಿಲ್ಲ ಎಂದರು.
ಕಂದಾಯ ಸಚಿವರು ಆಗಸ್ಟ್ ಬಳಿಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ಹೇಳುತ್ತಿರುವುದು ಹಾಸ್ಯಾಸ್ಪದ. ಅಷ್ಟರೊಳಗೆ ರೈತರ ಹೊಲಗಳು ಸಂಪೂರ್ಣ ಬತ್ತಿ ಹೋಗಲಿದ್ದು, ಸಾವಿರಾರು ಜನ ಉದ್ಯೋಗಕ್ಕಾಗಿ ಬೇರೆ ರಾಜ್ಯಗಳಿಗೆ ವಲಸೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ. ಸರ್ಕಾರಕ್ಕೆ ಪರಿಸ್ಥಿತಿಯ ಗಂಭೀರತೆ ಅರ್ಥವಾಗಿಲ್ಲ ಎಂದು ಟೀಕಿಸಿದರು.ಪರಿಶೀಲನಾ ತಂಡದ ಸದಸ್ಯರಾದ ಶಾಸಕರಾದ ಬಿ.ಪಿ.ಹರೀಶ್, ನವೀನ್, ಪಕ್ಷದ ಜಿಲ್ಲಾಧ್ಯಕ್ಷ ಅನಿಲಕುಮಾರ್ ಮೋಕಾ, ಶಾಸಕ ಗಾಲಿ ಜನಾರ್ದನ ರೆಡ್ಡಿ, ಮಾಜಿ ಸಂಸದ ಸಣ್ಣ ಫಕ್ಕೀರಪ್ಪ, ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ, ಪಕ್ಷದ ಮುಖಂಡರಾದ ಎಸ್.ಗುರುಲಿಂಗನಗೌಡ, ಕೆ.ಎ. ರಾಮಲಿಂಗಪ್ಪ, ಮುರಹರಗೌಡ ಗೋನಾಳ್, ಜಿ.ಟಿ. ಪಂಪಾಪತಿ ಸೇರಿದಂತೆ ಪಕ್ಷದ ಸ್ಥಳೀಯ ಮುಖಂಡರು, ರೈತರು ಇದ್ದರು.