ಯಲಹಂಕ ಶಾಸಕ ಎಸ್‌.ಆರ್. ವಿಶ್ವನಾಥ್‌ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಸಂಬಂಧ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಎ1 ಆರೋಪಿ ಎಂ.ಎನ್‌. ಗೋಪಾಲಕೃಷ್ಣ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶಿಸಿದೆ. 

 ಬೆಂಗಳೂರು : ಯಲಹಂಕ ಶಾಸಕ ಎಸ್‌.ಆರ್. ವಿಶ್ವನಾಥ್‌ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಸಂಬಂಧ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಎ1 ಆರೋಪಿ ಎಂ.ಎನ್‌. ಗೋಪಾಲಕೃಷ್ಣ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶಿಸಿದೆ.ಹೆಸರಘಟ್ಟ ಹೋಬಳಿಯ ಗೋಪಾಲಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರ ಪೀಠ ಈ ಆದೇಶ ನೀಡಿದೆ.

ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖಾಧಿಕಾರಿ ಪೆನ್ ಡ್ರೈವ್, ಪತ್ರ ಸೇರಿ ಸಾಕಷ್ಟು ಸಾಕ್ಷ್ಯವನ್ನು ಸಂಗ್ರಹ ಮಾಡಿದ್ದಾರೆ. ಮೇಲ್ನೋಟಕ್ಕೆ ದೂರಿನಲ್ಲಿ ಆರೋಪಿಯ ವಿರುದ್ಧ ದೂರುದಾರರು ಮಾಡಿರುವ ಆರೋಪಗಳಲ್ಲಿ ಸಾಕಷ್ಟು ಸಾಕ್ಷ್ಯಗಳಿವೆ ಎಂಬುದು ಕಂಡು ಬರುತ್ತಿದೆ. ವಿಸ್ತೃತ ತನಿಖೆಯಿಂದ ಅರ್ಜಿದಾರರ ವಿರುದ್ಧ ದೂರುದಾರ ವಿಶ್ವನಾಥ್‌ ಮಾಡಿರುವ ಆರೋಪಗಳ ಸತ್ಯಾಂಶ ಹೊರಬರಲು ಸಾಧ್ಯ. ಹಾಗಾಗಿ, ಈ ಹಂತದಲ್ಲಿ ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಪೀಠ ಆದೇಶದಲ್ಲಿ ತಿಳಿಸಿದೆ.

ಆರೋಪಿ ಎಂ.ಎನ್‌. ಗೋಪಾಲಕೃಷ್ಣ ಹಾಗೂ ಮತ್ತೋರ್ವ ವ್ಯಕ್ತಿ ವಿಶ್ವನಾಥ್‌ ಅವರನ್ನು ಮುಗಿಸುವುದಾಗಿ ಮಾತನಾಡಿದ್ದ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಅದನ್ನು ಆಧರಿಸಿ ವಿಶ್ವನಾಥ್‌ 2021ರ ಡಿ.1ರಂದು ರಾಜಾನುಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರಿಂದ ಕೊಲೆ ಬೆದರಿಕೆ ಹಾಗೂ ಅಪರಾಧಿಕ ಒಳ ಸಂಚು ಆರೋಪದಡಿ ಅರ್ಜಿದಾರರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಹಾಗಾಗಿ, ಗೋಪಾಲಕೃಷ್ಣ ಅವರು ತನಿಖೆಗೆ ತಡೆ ನೀಡಬೇಕು ಮತ್ತು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.