ಸಾರಾಂಶ
ಮಂಗಳೂರು ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಸಮಾರಂಭ ಗುರುವಾರ ನೆರವೇರಿತು. ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟನೆ ನೆರವೇರಿಸಿದರು.
ಮಂಗಳೂರು ವಿವಿ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಪರಿಷತ್ ಉದ್ಘಾಟನೆಕನ್ನಡಪ್ರಭ ವಾರ್ತೆ ಮಂಗಳೂರು
ದೇಶದ ಪ್ರಜಾಪ್ರಭುತ್ವದ ಸ್ವರೂಪ ಬದಲಾವಣೆಗೆ ವಿದ್ಯಾರ್ಥಿಗಳ ಕೊಡುಗೆ ಅಪಾರ. ವಿದ್ಯಾರ್ಥಿಗಳ ಶಕ್ತಿಯೇ ನಿಜವಾದ ರಾಷ್ಟ್ರ ಶಕ್ತಿ. ಇದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾಯಕರು ಕೇವಲ ರಾಜಕೀಯ ಕ್ಷೇತ್ರಕ್ಕೆ ಮಾತ್ರವೇ ಸೀಮಿತವಾಗಿರದೆ, ಎಲ್ಲ ಕ್ಷೇತ್ರಗಳಿಗೂ ನಾಯಕರ ಅಗತ್ಯ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ವೃತ್ತಿಪರತೆ, ಸಾಮಾನ್ಯ ಜ್ಞಾನ, ಉನ್ನತ ಚಿಂತನೆಗಳನ್ನು ಮೈಗೂಡಿಸಿಕೊಂಡು ದೇಶದ ಪ್ರಗತಿಗೆ ಕೈಜೋಡಿಸಬೇಕು ಎಂದು ಕಿವಿಮಾತು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್. ಧರ್ಮ ಮಾತನಾಡಿ, ಬದುಕಿನಲ್ಲಿ ಸವಾಲುಗಳು ಎದುರಾದಾಗ ಸಕಾರಾತ್ಮಕವಾಗಿ ಆಲೋಚನೆ ಮಾಡುವ ಮೂಲಕ ಪ್ರಗತಿಯೆಡೆಗೆ ಹೆಜ್ಜೆ ಹಾಕಬೇಕಿದೆ. ಸಮಾನತೆ, ಸಹಬಾಳ್ವೆಯ ಕಡೆಗೆ ಗಮನ ಹರಿಸಿ ವಿದ್ಯಾರ್ಜನೆ ವೇಳೆ ಶ್ರದ್ಧೆ ಹಾಗೂ ಶಿಸ್ತುಬದ್ಧವಾಗಿ ಕಲಿಕಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕಿದೆ ಎಂದರು.
ಮುಖ್ಯ ಅತಿಥಿ, ಸಿದ್ದಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಅಜಕ್ಕಳ ಗಿರೀಶ ಭಟ್ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎನ್., ವಿದ್ಯಾರ್ಥಿ ಪರಿಷತ್ತಿನ ಉಪನಿರ್ದೇಶಕ ಪ್ರೊ. ಜಯವಂತ ನಾಯಕ್, ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಸಾತ್ವಿಕ್, ಕಾರ್ಯದರ್ಶಿ ಕೀರ್ತನ್, ಸಹಕಾರ್ಯದರ್ಶಿ ನಂದಿತಾ ಎಸ್, ಲಲಿತಕಲಾ ಸಂಘದ ಕಾರ್ಯದರ್ಶಿ ಪೂಜಾ ಶೆಟ್ಟಿ, ಸಹಕಾರ್ಯದರ್ಶಿ ಅನನ್ಯಾ ಇದ್ದರು.