ಸರ್ಕಾರಿ ಸೇವೆಗಳನ್ನು ಜನರ ಬಳಿಗೆ ತಲುಪಿಸುವ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾ ಸೇವಾ ಆಂದೊಲನ ಎಂಬ ನೂತನ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದೆ ಎಂದು ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ ಹೇಳಿದರು.

ಕಮಲನಗರ: ಸರ್ಕಾರಿ ಸೇವೆಗಳನ್ನು ಜನರ ಬಳಿಗೆ ತಲುಪಿಸುವ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾ ಸೇವಾ ಆಂದೊಲನ ಎಂಬ ನೂತನ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದೆ ಎಂದು ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ ಹೇಳಿದರು.

ತಾಲೂಕಿನ ಠಾಣಾ ಕೂಶನೂರ ಗ್ರಾಮದಲ್ಲಿರುವ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಿದರು.ನಂತರ ಅಹವಾಲುಗಳನ್ನು ಸ್ವೀಕರಿಸಿ ತಹಸೀಲ್ದಾರ್ ಕುಲಕರ್ಣಿ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳನ್ನು ಫಲಾನುಭವಿಗಳಿಗೆ ತಲುಪಿಸುವುದು, ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವುದು ಮೂಲ ಉದ್ದೇಶ ಆಗಿದೆ ಎಂದರು.

ಕಾರ್ಯಕ್ರಮದಲ್ಲಿ ನಿವೇಶನ, ರಸ್ತೆ, ಚರಂಡಿ, ಕುಡಿಯುವ ನೀರು, ಪಹಣಿ, ಪಿಂಚಣಿ, ವಸತಿ ಯೋಜನೆ, ವಿದ್ಯುತ್ ಸೇರಿದಂತೆ ವಿವಿಧ ಮೂಲಸೌಕರ್ಯ ಹಾಗೂ ಸರ್ಕಾರಿ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಾರ್ವಜನಿಕರು ಮನವಿ ಸಲ್ಲಿಸಿದರು.

ಸ್ವೀಕರಿಸಲಾದ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ವಹಿಸಿ, ಸಮಸ್ಯೆಗಳನ್ನು ಪರಿಶೀಲಿಸಿ ನಿಯಮಾನುಸಾರ ಶೀಘ್ರ ಪರಿಹಾರ ಕಲ್ಪಿಸುವಂತೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಗ್ರೇಡ್‌-2 ತಹಸೀಲ್ದಾರ್ ರಮೇಶ ಪೆದ್ದೆ, ತಾ.ಪಂ ಇಒ ಹನಮಂತರಾಯ ಕೌಟಗೆ, ಪಿಎಸ್‌ಐ ಶೇಖ ಶಾ ಪಟೇಲ್, ಪಿಡಿಒ ಮನೋಹರ ಇತರೆ ಇಲಾಖೆಯ ಸಿಬ್ಬಂದಿ ಹಾಗೂ ಠಾಣಾಕುಶನೂರ ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.