ತಾರತಮ್ಯವಿಲ್ಲದೇ ಹಕ್ಕು ನೀಡುವುದೇ ಸಂವಿಧಾನದ ಉದ್ದೇಶ

| Published : Jan 27 2025, 12:45 AM IST

ಸಾರಾಂಶ

ಜಿಲ್ಲಾಡಳಿತದ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರದೇಶದ ಪ್ರತಿಯೊಬ್ಬ ನಾಗರಿಕರಿಗೂ ಸ್ವಾತಂತ್ರ್ಯ, ಸಮಾನತೆ, ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕ, ಇತರೆ ಹಕ್ಕುಗಳನ್ನು ಯಾವುದೇ ತಾರತಮ್ಯವಿಲ್ಲದೇ ನೀಡವುದು ಸಂವಿಧಾನದ ಪ್ರಮುಖ ಉದ್ದೇಶವಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ತಿಳಿಸಿದರು.ನಗರದ ಡಾ.ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ 76ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ, ಅಕರ್ಷಕ ಪಥಸಂಚಲನ ನಡೆಸಿದ ಪೊಲೀಸ್ ತುಕಡಿಗಗಳು ಹಾಗೂ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದ ಬಳಿಕ ಗಣರಾಜ್ಯೋತ್ಸವ ಸಂದೇಶ ನೀಡಿ ಮಾತನಾಡಿದರು.ಸ್ವಾತಂತ್ರ್ಯ ನಂತರ ಆಡಳಿತ ನಡೆಸಲು ನಮಗೆ ನಮ್ಮದೇ ಆದ ಸಂವಿಧಾನವಿರಲಿಲ್ಲ. ಜ.26 1950ರಲ್ಲಿ ಭಾರತವು ಗಣತಂತ್ರ ದೇಶವೆಂದು ಘೋಷಿಸಿಕೊಂಡು ಇಂದಿಗೆ 75 ವರ್ಷಗಳೇ ಸಂದಿವೆ. ಸಂವಿಧಾನ ಜಾರಿಗೊಳಿಸಿದ ದಿನವನ್ನು ದೇಶಾದ್ಯಂತ ಗಣರಾಜ್ಯೋತ್ಸವ ದಿನವನ್ನಾಗಿ ಪ್ರತಿವರ್ಷವೂ ಹೆಮ್ಮೆಯಿಂದ ಆಚರಿಸುತ್ತಿದ್ದೇವೆ. ಸಂವಿಧಾನ ಕರಡು ಸಮಿತಿ ಅಧ್ಯಕ್ಷರಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರು ಇಡೀ ಜಗತ್ತಿಗೆ ಮಾದರಿಯಾಗುವಂತಹ ಸಂವಿಧಾನ ರಚಿಸಿ ನಮಗೆ ಕೊಡುಗೆಯಾಗಿ ನೀಡಿದ್ದಾರೆ ಎಂದರು.ದೇಶದ ಸಮಗ್ರತೆಯನ್ನು ಎತ್ತಿ ಹಿಡಿಯಲು ಸಂವಿಧಾನ ನೆರವಾಗಿದೆ. ಇಡೀ ವಿಶ್ವದಲ್ಲಿಯೇ ಶ್ರೇಷ್ಠವಾಗಿರುವ ಭಾರತ ಸಂವಿಧಾನದ ಘನತೆ, ಗೌರವವನ್ನು ಕಾಪಾಡಿಕೊಳ್ಳಬೇಕಾದ್ದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಮಾಜದಲ್ಲಿ ಗೌರವದಿಂದ ಜೀವಿಸುವ ಹಕ್ಕನ್ನು ನೀಡಿರುವ ಸಂವಿಧಾನವನ್ನು ಎಲ್ಲರೂ ಆದರದಿಂದ ಗೌರವಿಸೋಣ ಎಂದು ಸಚಿವರು ತಿಳಿಸಿದರು. ಜಾನಪದ ಕಲೆ, ಸಂಸ್ಕೃತಿಗಳ ತವರೂರು ಆಗಿರುವ ಗಡಿಜಿಲ್ಲೆ ಚಾಮರಾಜನಗರದ ಸರ್ವತೋಮುಖ ಅಭಿವೃದ್ದಿಗೆ ಸರ್ಕಾರ ಬದ್ಧವಾಗಿದೆ. ಜಿಲ್ಲೆಯ ಸರ್ವಾಂಗೀಣ ಪ್ರಗತಿಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯಸರ್ಕಾರವು ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಜನಪರ ಅಗತ್ಯತೆಗಳನ್ನು ಪೂರೈಸುವ ಉದ್ದೇಶದೊಂದಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ ಎಂದು ತಿಳಿಸಿದರು. ಗಣರಾಜ್ಯೋತ್ಸವ ಸಂದೇಶ ನೀಡಿದ ಬಳಿಕ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್, ಲೋಕಸಭಾ ಸದಸ್ಯ ಸುನಿಲ್ ಬೋಸ್, ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಸೇರಿದಂತೆ ಇತರೆ ಗಣ್ಯರು ರಾಷ್ಟ್ರನಾಯಕರಾದ ಮಹಾತ್ಮ ಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.ನಂತರ ಬಂಜಾರ ಇಂಡಿಯನ್ ಶಾಲೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಸಂತ ಜೋಸೆಫರ ಪ್ರೌಢಶಾಲೆ ಮತ್ತು ಜೆ.ಎಸ್.ಎಸ್. ಬಾಲಕಿಯರ ಪ್ರೌಢಶಾಲೆ ಮಕ್ಕಳಿಂದ ದೇಶಭಕ್ತಿ ಸಾರುವ ನೃತ್ಯ ಪ್ರದರ್ಶನ ಅಕರ್ಷಕವಾಗಿ ಮೂಡಿಬಂತು. ಸಾರಿಗೆ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ ರಸ್ತೆ ಸುರಕ್ಷತೆ ಅರಿವು ಕುರಿತ ಅಣುಕು ಪ್ರದರ್ಶನ ಎಲ್ಲರ ಗಮನ ಸೆಳೆಯಿತು.ತದನಂತರ ಪಥಸಂಚಲನದಲ್ಲಿ ಪಾಲ್ಗೊಂಡ ಪೊಲೀಸ್, ಅರಣ್ಯ, ಅಬಕಾರಿ, ಗೃಹರಕ್ಷಕ ದಳ ಹಾಗೂ ವಿವಿಧ ಶಾಲೆಗಳ ಎನ್.ಎನ್.ಸಿ, ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳಿಗೆ ಗಣ್ಯರು ಸ್ಮರಣಿಕೆ ನೀಡಿ ಗೌರವಿಸಿದರು. ಅಲ್ಲದೇ ಅಕಸ್ಮಿಕ ಅಪಘಾತದಲ್ಲಿ ಮರಣ ಹೊಂದಿದವರ ಅಂಗಾಂಗ ದಾನ ಮಾಡಿದ ಕುಟುಂಬದ ಸದಸ್ಯರಿಗೆ ಪ್ರಮಾಣಪತ್ರ ನೀಡಿದರು. ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ನಗರಸಭೆ ಅಧ್ಯಕ್ಷ ಎಸ್. ಸುರೇಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ. ಚಂದ್ರು, ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್, ನಗರಸಭೆ ಉಪಾಧ್ಯಕ್ಷೆ ಮಮತ, ಸದಸ್ಯರಾದ ಚಂದ್ರಶೇಖರ್, ಜಿಲ್ಲಾಧಿಕಾರಿ ಶಿಲ್ಪಾನಾಗ್. ಜಿಪಂ ಸಿಇಒ ಮೋನಾರೋತ್, ಎಸ್ಪಿಡಾ.ಕವಿತ, ಎಡಿಸಿ ಗೀತಾ ಹುಡೇದ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಜಿಪಂ ಉಪ ಕಾರ್ಯದರ್ಶಿ ಪಿ.ಲಕ್ಷ್ಮಿ, ತಹಸೀಲ್ದಾರ್ ಗಿರಿಜ ಇದ್ದರು.