ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತರ ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ಸೌಲಭ್ಯಗಳನ್ನು ತಲುಪಿಸಿ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ತಮ್ಮ ಕಚೇರಿ ಸಭಾಂಗಣದಲ್ಲಿ ಸೋಮವಾರ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತರ ಅಭಿವೃದ್ಧಿ ಸಂಬಂಧ ಹಮ್ಮಿಕೊಂಡಿದ್ದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಲ್ಪಸಂಖ್ಯಾತರಿಗೆ ಇರುವ ತೊಂದರೆಗಳ ಕುರಿತು ಪಟ್ಟಿ ಮಾಡಿ ಸಭೆಯಲ್ಲಿ ಮಂಡಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗೆ ಸೂಚಿದರು. ನರಸಿಂಹರಾಜ ವಿಧಾನ ಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಮಾತನಾಡಿ ಸಮುದಾಯಗಳ ನಡುವೆ ಅಸಮಾನತೆಯನ್ನು ಹೋಗಲಾಡಿಸಲು ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಡಿ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಈ ಸೌಲಭ್ಯಗಳನ್ನು ಅಲ್ಪಸಂಖ್ಯಾತರು ಬಳಸಿಕೊಳ್ಳಬೇಕು. ಆರೋಗ್ಯ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಕಮಿಟಿಯಲ್ಲಿ ಇರುವ ಸದಸ್ಯರು ಜಿಲ್ಲೆಯಲ್ಲಿ ಪ್ರವಾಸ ಮಾಡಿ ಅಲ್ಪಸಂಖ್ಯಾತರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಿ ಸಭೆಯಲ್ಲಿ ಚರ್ಚಿಸಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಹೆಚ್ಚಳ ಮಾಡಲು ಶಿಕ್ಷಣ ಇಲಾಖೆ ಕ್ರಮ ವಹಿಸಬೇಕು. ಉರ್ದು ಶಾಲೆಗಳಲ್ಲಿ ಮಕ್ಕಳಿಗೆ ಉರ್ದು ಭಾಷೆಯ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಯ ಕಲಿಕೆಗೂ ಒತ್ತು ನೀಡಬೇಕು. ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಅಲ್ಪಸಂಖ್ಯಾತ ನಿರುದ್ಯೋಗ ಯುವಕರಿಗೆ ಸ್ವ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹ ಕಲ್ಪಿಸಬೇಕು. ಇದರಿಂದ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾಗುತ್ತದೆ ಎಂದರು. ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿಲ್ಪಾ ಮಾತನಾಡಿ, ಮೈಸೂರು ಜಿಲ್ಲೆಯಲ್ಲಿ 3,61,778 ಅಲ್ಪಸಂಖ್ಯಾತರ ಜನಸಂಖ್ಯೆ ಇದೆ. ಇವರಿಗೆ ಪ್ರಧಾನಮಂತ್ರಿ ಗಳ 15 ಅಂಶಗಳ ಕಾರ್ಯಕ್ರಮದಡಿ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))