ಅಸ್ಪೃಶ್ಯತೆ ನಿವಾರಣೆ ಹಾಗೂ ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯ ಮೂಡಿಸುವ ಕಾರ್ಯದಲ್ಲಿ ಪೇಜಾವರ ಶ್ರೀಗಳು ಸದಾ ಮುಂಚೂಣಿಯಲ್ಲಿದ್ದಾರೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಅಸ್ಪೃಶ್ಯತೆ ನಿವಾರಣೆ ಹಾಗೂ ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯ ಮೂಡಿಸುವ ಕಾರ್ಯದಲ್ಲಿ ಪೇಜಾವರ ಶ್ರೀಗಳು ಸದಾ ಮುಂಚೂಣಿಯಲ್ಲಿದ್ದಾರೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ನಗರದ ಶ್ರೀಕೃಷ್ಣ-ವಾದಿರಾಜ ಮಠದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರಿಗೆ ಭಕ್ತರು ಹಮ್ಮಿಕೊಂಡಿದ್ದ ಗೌರವ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಬೇಕೆಂಬುದು ವಿಶ್ವೇಶತೀರ್ಥ ಸ್ವಾಮೀಜಿಯವರ ಕನಸಾಗಿತ್ತು. ಇಂದು ಆ ಕನಸು ನನಸಾಗಿದೆ. ಪ್ರಸ್ತುತ ಶ್ರೀಗಳು ಆಧುನಿಕ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಸಂಕಲ್ಪ ಮಾಡಿದ್ದು, ಸುಮಾರು ₹ 7 ಕೋಟಿ ವೆಚ್ಚದ ಕಟ್ಟಡ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಬಳಿಕ ಆಶೀರ್ವಚನ ನೀಡಿದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು, ನ್ಯಾಯದ ಪರವಾಗಿ ಗಟ್ಟಿಯಾಗಿ ನಿಲ್ಲುವ ಗುಣ ಬಸನಗೌಡ ಪಾಟೀಲ ಯತ್ನಾಳ ಅವರಲ್ಲಿದೆ. ಅವರು ಸದಾ ಜನಪರವಾಗಿ ಧ್ವನಿ ಎತ್ತುತ್ತಾರೆ. ನ್ಯಾಯದ ಪರವಾದ ಅವರ ಗಟ್ಟಿತನಕ್ಕೆ ಬೆಂಬಲ ದೊರೆಯುತ್ತದೆ. ವಿದ್ಯಾರ್ಥಿ ನಿಲಯವನ್ನು ಆಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಲು ₹ 7 ಕೋಟಿ ವೆಚ್ಚದ ನೂತನ ಕಟ್ಟಡ ನಿರ್ಮಾಣ ಆರಂಭಿಸಲಾಗಿದೆ. ವಿಜಯಪುರದ ಜನತೆ ತನು, ಮನ, ಧನದಿಂದ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ಶ್ರೀಮಠದ ವಿಜಯಪುರ ಶಾಖೆಯ ಗೌರವಾಧ್ಯಕ್ಷ ಗೋಪಾಲ ನಾಯಕ ಮಾತನಾಡಿ, ದೇಶಾದ್ಯಂತ ಪೇಜಾವರ ಮಠದ ಶಾಖೆಗಳು ಕಾರ್ಯನಿರ್ವಹಿಸುತ್ತಿದ್ದು, ಸಮಸ್ತ ಹಿಂದೂ ಸಮಾಜಕ್ಕೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಉತ್ತಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಬೆಳೆಸುವಲ್ಲಿ ಶ್ರೀಮಠದ ಯತಿಗಳ ಕೊಡುಗೆ ಅಪಾರವಾಗಿದೆ ಎಂದು ಶ್ಲಾಘಿಸಿದರು.
ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಸ್ವಾಗತಿಸಿದರು. ವಿಕಾಸ ಪದಕಿ ವಂದಿಸಿದರು. ಶ್ರೀಧರ ಜೋಶಿ ನಿರೂಪಿಸಿದರು. ಬ್ರಾಹ್ಮಣ ಮಹಾಸಭಾದ ಜಿಲ್ಲಾ ಪ್ರತಿನಿಧಿ ಸತೀಶ್ಚಂದ್ರ ಕುಲಕರ್ಣಿ, ಮಧ್ವ ಮಹಾಮಂಡಳದ ಕಾರ್ಯದರ್ಶಿ ಶ್ರೀಪಾದ ಸಿಂಗನಮಲ್ಲಿ, ಸಮಿತಿ ಪದಾಧಿಕಾರಿಗಳಾದ ವಿ.ಸಿ.ಕುಲಕರ್ಣಿ, ವಿ.ಬಿ.ಕುಲಕರ್ಣಿ, ಅಶೋಕರಾವ, ಮೋಹನ ಕೌತಾಳ, ಪಂ.ವಾಸುದೇವಾಚಾರ್ಯ, ವಿಜಯ ಜೋಶಿ ಮುಂತಾದವರು ಉಪಸ್ಥಿತರಿದ್ದರು.