ಸಾರಾಂಶ
ದೊಡ್ಡಬಳ್ಳಾಪುರ: ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಭವ್ಯ ಪರಂಪರೆ ಇದೆ. ಇದರ ಅನನ್ಯತೆಯನ್ನು ಉಳಿಸಿ, ಬೆಳೆಸುವ ಜವಾಬ್ದಾರಿಯನ್ನು ಕನ್ನಡಿಗರು ಸಮರ್ಥವಾಗಿ ನಿರ್ವಹಿಸಬೇಕಾಗಿದೆ ಎಂದು ಕವಯತ್ರಿ ಎಂ.ಬಿ.ಯಶೋಧಮ್ಮ ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ನವ್ಯಶ್ರೀ ಕಲ್ಚರಲ್ ಆ್ಯಂಡ್ ಸ್ಪೋರ್ಟ್ಸ್ ಅಕಾಡೆಮಿ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಭಾನುವಾರ ನಡೆದ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ಪ್ರಜ್ಞೆ ಜಾಗೃತಗೊಳ್ಳಬೇಕು. ಭಾಷೆ ಮತ್ತು ಸೃಜನಶೀಲತೆ ಉಳಿಯಬೇಕಾದರೆ ಎಲ್ಲಾ ವಲಯಗಳಲ್ಲಿ ಸಮರ್ಪಕ ಬಳಕೆ ಅಗತ್ಯ. ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದರೆ ಕನ್ನಡ ಎಲ್ಲೆಡೆ ಪಸರಿಸಲು ಸಾಧ್ಯವಾಗುತ್ತದೆ ಎಂದರು.
ವಿಶ್ವಮಾನ್ಯವಾದ ಸಾಹಿತ್ಯ ರಚನೆ ಕನ್ನಡದಲ್ಲಿ ಆಗಿದೆ. ಈ ಪರಂಪರೆಯನ್ನು ಅಧ್ಯಯನ ಮಾಡಿದವರಿಗೆ ಭಾಷೆ ಮತ್ತು ಸಾಹಿತ್ಯದ ಅನನ್ಯತೆ ಅರಿವಾಗುತ್ತದೆ. ಜಗತ್ತಿನ ಪ್ರಮುಖ ಭಾಷೆಗಳ ಸಾಲಿನಲ್ಲಿ ಕನ್ನಡಕ್ಕೆ ಮಹತ್ವದ ಸ್ಥಾನವಿದ್ದು, ಪುಸ್ತಕಗಳನ್ನು ಓದುವ ಮೂಲಕ ನಮ್ಮ ನುಡಿಯನ್ನು ಉಳಿಸಬೇಕಾಗಿದೆ ಎಂದರು.ಬೆಂಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮಹತ್ವದ ಪಾತ್ರವಹಿಸಿತ್ತು. ಕನ್ನಡ ಮಾತನಾಡುವವರನ್ನು ಒಗ್ಗೂಡಿಸಿ ಮೈಸೂರು ರಾಜ್ಯವಾಗಿ ರೂಪುಗೊಂಡ ಕನ್ನಡ ನಾಡು, ನಂತರ ಕರ್ನಾಟಕ ಎಂದು ಮರುನಾಮಕರಣಗೊಂಡಿತು. ಈ ಐತಿಹಾಸಿಕ ಘಟನೆಗೆ ಐವತ್ತು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸುವರ್ಣ ಸಂಭ್ರಮ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಶೀರ್ಷಿಕೆಯಲ್ಲಿ ರಾಜ್ಯಾದ್ಯಂತ ಕಾರ್ಯಕ್ರಮಗಳು ನಡೆಯುತ್ತಿವೆ ಎಂದರು.
ಕನ್ನಡವನ್ನು ಕಟ್ಟುವ ಕೆಲಸ ನಿರಂತರ ನಡೆಯಬೇಕಾಗಿದೆ. ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗೆ ದೊಡ್ಡಬಳ್ಳಾಪುರ ತಾಲೂಕಿನ ಸಾಹಿತಿಗಳು ಮತ್ತು ಕಲಾವಿದರ ಕೊಡುಗೆ ಅಪಾರವಾಗಿದೆ ಎಂದರು.ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕ ಆಯುಕ್ತ ವೆಂಕಟರಾಜು, ನವ್ಯಶ್ರೀ ಕಲ್ಚರಲ್ ಆ್ಯಂಡ್ ಸ್ಪೋರ್ಟ್ಸ್ ಅಕಾಡೆಮಿ ಅಧ್ಯಕ್ಷೆ ಪದ್ಮಾವತಿ, ಯುವ ಕಲಾವಿದೆ ನವ್ಯಶ್ರೀ, ಸಂಗೀತ ಶಿಕ್ಷಕಿ ಮೀರಾಬಾಯಿ ಸೇರಿ ಸಂಗೀತ, ನೃತ್ಯ ಮತ್ತು ಯೋಗ ಕಲಿಕಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಂದ ಭರತನಾಟ್ಯ ಮತ್ತು ಯೋಗ ಪ್ರದರ್ಶನ ನಡೆಯಿತು.