ಕನ್ನಡಪ್ರಭ ವಾರ್ತೆ ನಾಗಮಂಗಲ

ಲಾರಿ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ - ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ತಾಲೂಕಿನ ಕಾಚೇನಹಳ್ಳಿ ಸಮೀಪ ಗುರುವಾರ ತಡರಾತ್ರಿ ಸಂಭವಿಸಿದೆ.

ತಾಲೂಕಿನ ಪಿ.ನೇರಲಕೆರೆ ಗ್ರಾಮದ ಬಸವರಾಜು ಪುತ್ರ ಆಕಾಶ್ (22) ರಸ್ತೆ ಅಪಘಾತದಲ್ಲಿ ಮೃತಪಟ್ಟವರು.

ಬೆಂಗಳೂರಿನಲ್ಲಿ ರಿಕ್ಷಾ ಚಾಲಕನಾಗಿದ್ದ ಆಕಾಶ್ ಊರ ಹಬ್ಬಕ್ಕೆಂದು ಪಿ.ನೇರಲಕೆರೆ ಗ್ರಾಮಕ್ಕೆ ಬಂದಿದ್ದರು. ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಬಸ್ ನಲ್ಲಿ ಬರುತ್ತಿದ್ದ ತನ್ನ ಸಹೋದರಿಯನ್ನು ಕರೆತರುವ ಸಲುವಾಗಿ ಗುರುವಾರ ತಡರಾತ್ರಿ ತಮ್ಮ‌ ಆಟೋರಿಕ್ಷಾ ತೆಗೆದುಕೊಂಡು ಬೆಳ್ಳೂರು ಕ್ರಾಸ್ ಗೆ ತೆರಳುತ್ತಿದ್ದ ವೇಳೆ ರಾಯಚೂರಿನಿಂದ ಮೈಸೂರಿಗೆ ಸಂಚರಿಸುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ರಿಕ್ಷಾ ಜಖಂಗೊಂಡು ಆಕಾಶ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ಅಪರಾಧ‌ ವಿಭಾಗದ ಪಿಎಸ್ ಐ ಲಕ್ಷ್ಮಣ ಕಾಮಣ್ಣವರ್ ನೇತೃತ್ವದ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಆಕಾಶ್ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆಗೊಳಪಡಿಸಿದರು.


ಶುಕ್ರವಾರ ಬೆಳಗ್ಗೆ ಮರಣೋತ್ತರ ಪರೀಕ್ಷೆ‌ ನಡೆಸಿದ ನಂತರ ಆಕಾಶ್ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು. ‌ಆಸ್ಪತ್ರೆ ಆವರಣದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.

ರಿಕ್ಷಾ ಮತ್ತು ಲಾರಿಯನ್ನು ವಶಕ್ಕೆ ಪಡೆದುಕೊಂಡು ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ನಾಗಮಂಗಲ ಗ್ರಾಮಾಂತರ ಠಾಣೆಯ ಪೊಲೀಸರು ಮುಂದಿನ ಕಾನೂನು ಕ್ರಮ ವಹಿಸಿದ್ದಾರೆ.